ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕಗಳ ಅಧ್ಯಯನಕ್ಕೆ ಸೀಮಿತವಾಗದೆ, ಅದರ ಜೊತೆಗೆ ವಿವಿಧ ಕೌಶಲ್ಯಗಳನ್ನು ಬೆಳೆಸಿಕೊಂಡಲ್ಲಿ ಮಾತ್ರ ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು ಮಾಜಿ ಶಾಸಕ ಹಾಗೂ ವರ್ತಕರ ಸಂಘದ ಅಧ್ಯಕ್ಷ ಸುರೇಶಗೌಡ್ರ ಪಾಟೀಲ ಅಭಿಪ್ರಾಯಪಟ್ಟರು.

ಬ್ಯಾಡಗಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕಗಳ ಅಧ್ಯಯನಕ್ಕೆ ಸೀಮಿತವಾಗದೆ, ಅದರ ಜೊತೆಗೆ ವಿವಿಧ ಕೌಶಲ್ಯಗಳನ್ನು ಬೆಳೆಸಿಕೊಂಡಲ್ಲಿ ಮಾತ್ರ ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದು ಮಾಜಿ ಶಾಸಕ ಹಾಗೂ ವರ್ತಕರ ಸಂಘದ ಅಧ್ಯಕ್ಷ ಸುರೇಶಗೌಡ್ರ ಪಾಟೀಲ ಅಭಿಪ್ರಾಯಪಟ್ಟರು.

ಪಟ್ಟಣದ ವರ್ತಕರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ನಡೆದ 2026-27ನೇ ಸಾಲಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ, ನಗದು ಬಹುಮಾನಗಳ ವಿತರಣೆ ಹಾಗೂ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿ ಜೀವನವು ಭವಿಷ್ಯವನ್ನು ರೂಪಿಸಿಕೊಳ್ಳುವ ಅತ್ಯಂತ ಮಹತ್ವದ ಹಂತವಾಗಿದೆ. ಈ ಅವಧಿಯಲ್ಲಿ ಶಿಕ್ಷಣದ ಜೊತೆಗೆ ನಾಯಕತ್ವದ ಗುಣ, ಸಂವಹನ ಕೌಶಲ್ಯ, ಆತ್ಮವಿಶ್ವಾಸ, ಶಿಸ್ತು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕು. ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರುವುದರ ಜೊತೆಗೆ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಲು ಸಹಕಾರಿಯಾಗುತ್ತವೆ. ವಿದ್ಯಾರ್ಥಿಗಳು ಲಭ್ಯವಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಗುರಿ ಸಾಧನೆಯತ್ತ ಸಾಗಬೇಕು ಎಂದು ಸಲಹೆ ನೀಡಿದರು.

ಹಾವೇರಿ ವಿಶ್ವವಿದ್ಯಾಲಯದ ಪ್ರೊ. ರೇಣುಕಾ ಮೇಟಿ ಮಾತನಾಡಿ, ಪದವಿ ಶಿಕ್ಷಣವು ಕೇವಲ ಪದವಿ ಪ್ರಮಾಣಪತ್ರ ಪಡೆಯುವುದಕ್ಕೆ ಸೀಮಿತವಾಗಬಾರದು. ವಿದ್ಯಾರ್ಥಿಗಳು ವಿಷಯಜ್ಞಾನವನ್ನು ವಿಸ್ತರಿಸಿಕೊಳ್ಳುವುದರ ಜೊತೆಗೆ ಪ್ರಸ್ತುತ ಸಮಾಜದ ಅಗತ್ಯಗಳಿಗೆ ತಕ್ಕಂತೆ ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು. ನಿರಂತರ ಅಧ್ಯಯನ, ಹೊಸ ವಿಷಯಗಳನ್ನು ಕಲಿಯುವ ಆಸಕ್ತಿ ಹಾಗೂ ಸಕಾರಾತ್ಮಕ ಚಿಂತನೆ ವಿದ್ಯಾರ್ಥಿಗಳ ಯಶಸ್ಸಿಗೆ ಬುನಾದಿಯಾಗುತ್ತವೆ ಎಂದು ತಿಳಿಸಿದರು.

ನಿವೃತ್ತ ಶಿಕ್ಷಕ ಸಿದ್ದರಾಜು ಸಿರಿಗೇರಿ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಸಾಧಿಸಲು ಶಿಸ್ತು, ಸಮಯಪಾಲನೆ, ಪರಿಶ್ರಮ ಹಾಗೂ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಗುರುಗಳು ನೀಡುವ ಮಾರ್ಗದರ್ಶನವನ್ನು ಪಾಲಿಸುವುದರ ಜೊತೆಗೆ ಪೋಷಕರ ನಿರೀಕ್ಷೆಗಳಿಗೆ ತಕ್ಕಂತೆ ನಡೆದುಕೊಳ್ಳಬೇಕು. ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ, ಸತತ ಪ್ರಯತ್ನದ ಮೂಲಕ ತಮ್ಮ ಗುರಿ ತಲುಪಬೇಕು ಎಂದು ಕಿವಿಮಾತು ಹೇಳಿದರು. ಇದೇ ಸಂದರ್ಭದಲ್ಲಿ ವಿವಿಧ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನಗಳನ್ನು ವಿತರಿಸಲಾಯಿತು. ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ‍್ಯ ಡಾ. ಪ್ರಶಾಂತ ಎನ್.ಎಸ್. ವಹಿಸಿದ್ದರು. ಅಂಬಾಲಾಲ್ ಜೈನ್, ಡಾ.ಎಸ್.ಎನ್. ನಿಡಗುಂದಿ, ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.