ಅಲ್ಪಸಂಖ್ಯಾತ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ಒದಗಿಸಿ: ನಲಿನ್ ಅತುಲ್

| Published : Feb 13 2024, 12:48 AM IST

ಸಾರಾಂಶ

ಪ್ರತಿ ಇಲಾಖೆಗಳಲ್ಲಿ ಅಲ್ಪಸಂಖ್ಯಾತ ಫಲಾನುಭವಿಗಳಿಗಾಗಿ ಇರುವ ಯೋಜನೆಗಳನ್ನು ಪಟ್ಟಿ ಮಾಡಿ, ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರನ್ನು ಯೋಜನೆ ವ್ಯಾಪ್ತಿಗೆ ತಂದು ಸರ್ಕಾರದ ಸೌಲಭ್ಯ ಒದಗಿಸಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ನಲಿನ್‌ ಅತುಲ್‌ ಸೂಚನೆ ನೀಡಿದ್ದಾರೆ.

ಕೊಪ್ಪಳ: ಪ್ರತಿ ಇಲಾಖೆಗಳಲ್ಲಿ ಅಲ್ಪಸಂಖ್ಯಾತ ಫಲಾನುಭವಿಗಳಿಗಾಗಿ ಇರುವ ಯೋಜನೆಗಳನ್ನು ಪಟ್ಟಿ ಮಾಡಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸಲ್ಲಿಸಿ, ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅಧಿಕಾರಿಗಳಿಗೆ ಸೂಚಿಸಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಪ್ರತಿ ಇಲಾಖೆಯಲ್ಲಿ ಇರುವ ಹಲವಾರು ಯೋಜನೆಗಳಲ್ಲಿ ಅಲ್ಪಸಂಖ್ಯಾತ ಫಲಾನುಭವಿಗಳಿಗೂ ಅವಕಾಶವಿರುತ್ತದೆ. ಆದರೆ ಬಹಳಷ್ಟು ಫಲಾನುಭವಿಗಳಿಗೆ ಯಾವ ಇಲಾಖೆಯ ಯೋಜನೆ ತಮಗೆ ಅನ್ವಯವಾಗುತ್ತದೆ ಎಂಬುದರ ಕುರಿತು ತಿಳಿವಳಿಕೆ ಇರುವುದಿಲ್ಲ. ಆದ್ದರಿಂದ ಇಲಾಖಾ ಮುಖ್ಯಸ್ಥರು ಫಲಾನುಭವಿಗಳನ್ನು ಗುರುತಿಸುವ ಕೆಲಸ ಮಾಡಬೇಕು. ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರನ್ನು ಯೋಜನೆ ವ್ಯಾಪ್ತಿಗೆ ತಂದು ಸರ್ಕಾರದ ಸೌಲಭ್ಯ ಒದಗಿಸಬೇಕು. ಆದ್ದರಿಂದ ಎಲ್ಲ ಇಲಾಖಾ ಮುಖ್ಯಸ್ಥರು ತಮ್ಮ ಇಲಾಖೆಯಲ್ಲಿನ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಿರುವ ಯೋಜನೆಗಳು ಹಾಗೂ ಫಲಾನುಭವಿಗಳ ಪಟ್ಟಿಯನ್ನು ಸಲ್ಲಿಸಿ. ಇದರಿಂದ ಜಿಲ್ಲೆಯ ಒಟ್ಟಾರೆ ಫಲಾನುಭವಿಗಳು ಹಾಗೂ ಅವರಿಗೆ ದೊರೆಯುತ್ತಿರುವ ಯೋಜನೆಗಳ ಸೌಲಭ್ಯಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಅನುಕೂಲವಾಗುತ್ತದೆ ಎಂದರು.

ತೋಟಗಾರಿಕೆ, ಕೃಷಿ, ಪಶು ಪಾಲನೆ ಮತ್ತು ಪಶು ವೈದ್ಯಕೀಯ, ರೇಷ್ಮೆ ಇಲಾಖೆ, ಮೀನುಗಾರಿಕೆ ಇಲಾಖೆಗಳಲ್ಲಿರುವ ಬಹುತೇಕ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಫಲಾನುಭವಿಗಳು ಒಳಪಡುತ್ತಾರೆ. ಫ್ರೂಟ್ ತಂತ್ರಾಂಶದಲ್ಲಿ ಪ್ರವರ್ಗವಾರು ಫಲಾನುಭವಿಗಳ ಪಟ್ಟಿ ದೊರೆಯುತ್ತದೆ. ಅವುಗಳ ಆಧಾರದಲ್ಲಿ ಇಲಾಖೆಯ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಫಲಾನುಭವಿಗಳನ್ನು ಗುರುತಿಸಿ, ಯೋಜನೆಯ ಲಾಭ ಒದಗಿಸಿ ಎಂದು ಹೇಳಿದರು.

ಪ್ರತಿ ಸಭೆಯ ನಂತರ ಸಿದ್ದಪಡಿಸುವ ನಡಾವಳಿಗಳಲ್ಲಿ ಸಭೆಯಲ್ಲಿ ಸೂಚಿಸಿದ, ನಿರ್ಧರಿಸಿದ ಅಂಶಗಳ ಪಾಲನೆ ಕುರಿತು ಸಂಬಂಧಿಸಿದ ಇಲಾಖಾ ಮುಖ್ಯಸ್ಥರು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಅನುಪಾಲನಾ ವರದಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಯಾವುದೇ ಮಾಹಿತಿ ನೀಡದೆ ಸಭೆಗೆ ಗೈರು ಹಾಜರಾಗುವ ಅಧಿಕಾರಿಗಳಿಗೆ ನೋಟಿಸ್ ನೀಡಬೇಕು ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಸುರೇಶ್ ಕೋಕರೆ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.