ಕನ್ನಡಪ್ರಭ ವಾರ್ತೆ ಹಿರಿಯೂರು

ಚಿತ್ರದುರ್ಗ ಜಿಲ್ಲೆಯ ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಖುದ್ದು ಪರಿಶೀಲಿಸಿ ಕೇಂದ್ರ ಸರ್ಕಾರಕ್ಕೆ ನೈಜ ವರದಿ ಸಲ್ಲಿಸಲಾಗುವುದೆಂದು ಸಚಿವ ಟಿ.ರಘುಮೂರ್ತಿ ಹೇಳಿದರು.

ಹಿರಿಯೂರು ತಾಲೂಕಿನ ಆನೆಸಿದ್ರಿ ಗ್ರಾಮದ ವ್ಯಾಪ್ತಿಯಲ್ಲಿ ರೈತ ಜಯರಾಮಯ್ಯ ಅವರ ಜಮೀನಿಗೆ ಬುಧವಾರ ಭೇಟಿ ನೀಡಿ, ಬೆಳೆ ಹಾಗೂ ಕೃಷಿ ಭೂಮಿಯನ್ನು ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಹಿರಿಯೂರು ತಾಲೂಕಿನಲ್ಲಿ ಈ ಬಾರಿ ತೀವ್ರ ಮಳೆ ಕೊರತೆಯಾಗಿದ್ದು, ಕೇವಲ ಶೇ.11ರಷ್ಟು ಮಾತ್ರ ಬಿತ್ತನೆಯಾಗಿದೆ. ಮಳೆ ಅಭಾವ ಹಾಗೂ ಬರ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ರೈತರ ಪರವಾಗಿ ನಿಲ್ಲಲಿದೆ ಎಂದರು.

ರಾಜ್ಯದ ಹಲವೆಡೆ ಭೀಕರ ಬರಗಾಲ ಎದುರಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ನಮ್ಮ ಜಿಲ್ಲೆಯಲ್ಲೂ ಮಳೆ ಕೊರತೆಯಿಂದಾಗಿ ತೀವ್ರ ಬರ ಆವರಿಸಿದೆ. ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಬೆಂಗಳೂರು ವಿಭಾಗ ಮಟ್ಟದ ಸಭೆಯಲ್ಲಿ ಬರ ಪರಿಸ್ಥಿತಿ ಎದುರಿಸಲು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ ಎಂದರು.

ಮುಖ್ಯಮಂತ್ರಿಗಳ ನಿರ್ದೇಶನದಂತೆ ಬರ ಪರಿಸ್ಥಿತಿ ಕುರಿತು ಪರಿಶೀಲಿಸಲು ಪ್ರವಾಸ ಕೈಗೊಳ್ಳುತ್ತಿದ್ದೇನೆ. ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ಸಚಿವರಿಗೆ ಬರ ನಿರ್ವಹಣೆ ಜವಾಬ್ದಾರಿಯನ್ನು ಹಂಚಿದ್ದಾರೆ. ಅಧಿಕಾರಿಗಳು ಸಿದ್ಧಪಡಿಸಿದ ವರದಿಗಳನ್ನು ಪರಿಶೀಲಿಸುವುದಲ್ಲದೆ, ಸ್ವತಃ ಸ್ಥಳಕ್ಕೆ ಭೇಟಿ ನೀಡಿ ಕಂದಾಯ ಮತ್ತು ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ನೈಜ ಪರಿಸ್ಥಿತಿಯ ವರದಿ ತಯಾರಿಸಲಾಗುವುದು. ಈ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ, ಬರಪೀಡಿತ ಪ್ರದೇಶವೆಂದು ಘೋಷಿಸಲು ಕ್ರಮ ಕೈಗೊಳ್ಳಲಾಗುವುದು. ಜವನಗೊಂಡನಹಳ್ಳಿ ಹೋಬಳಿಯಲ್ಲಿ ಕುಡಿಯುವ ನೀರಿನ ಪೂರೈಕೆ ಹಾಗೂ ಬಿತ್ತನೆಯಾಗದ ಪ್ರದೇಶಗಳನ್ನು ವೀಕ್ಷಿಸಲಾಗಿದೆ ಎಂದರು.


ಫಸಲ್ ಭೀಮಾ ಯೋಜನೆಯ ನೋಂದಣಿ ಗಡುವನ್ನು ಮುಂದುವರಿಸಲು ಮುಖ್ಯಮಂತ್ರಿಗಳು ಕೇಂದ್ರ ಕೃಷಿ ಸಚಿವರಿಗೆ ಈಗಾಗಲೇ ಪತ್ರ ಬರೆದಿದ್ದಾರೆ. ಅಲ್ಲದೆ, ರಾಗಿ ಬಿತ್ತನೆಗೆ ಇನ್ನು ಕಾಲಾವಕಾಶವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ’ ಎಂದು ಸಚಿವ ರಘುಮೂರ್ತಿ ಸ್ಪಷ್ಟಪಡಿಸಿದರು.

ಜಿಲ್ಲೆಯಲ್ಲಿ ಒಟ್ಟು 3 ಲಕ್ಷಕ್ಕೂ ಹೆಚ್ಚು ರೈತರಿದ್ದು ಬೆಳೆ ವಿಮೆ ನೊಂದಣಿಗೆ ಅಭಿಯಾನ ನಡೆಸಿ ಜಾಗೃತಿ ಮೂಡಿಸಲಾಗಿದೆ. ಇದರ ಪರಿಣಾಮವಾಗಿ ಚಿತ್ರದುರ್ಗ ಜಿಲ್ಲೆಯೊಂದರಲ್ಲೇ ಸುಮಾರು 2.30 ಲಕ್ಷ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಂಡಿದ್ದಾರೆ. ಇದರಿಂದ ಬರ ಎದುರಿಸಲು ರೈತರಿಗೆ ನೆರವಾಗಲಿದೆ . ಕುಡಿಯುವ ನೀರಿನ ಅಭಾವವಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ರಘುಮೂರ್ತಿ ತಿಳಿಸಿದರು.

ಹಿರಿಯೂರು ತಾಲೂಕಿನಲ್ಲಿ ಶೇ.11ರಷ್ಟು ಮಾತ್ರ ಬಿತ್ತನೆಯಾಗಿದ್ದು, ಜಿಲ್ಲೆಯಲ್ಲಿ ಶೇ.80ಕ್ಕೂ ಹೆಚ್ಚು ಪ್ರದೇಶದಲ್ಲಿ ಬಿತ್ತನೆಯೇ ಆಗಿಲ್ಲ. ಬಿತ್ತನೆ ಮಾಡದಿರುವ ರೈತರಿಗೆ ಶೇ 25ರಷ್ಟು ಬಿತ್ತನೆ ವೈಫಲ್ಯ ಹಾಗೂ ಬಿತ್ತನೆ ಮಾಡಿ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಫಸಲ್ ಭೀಮಾ ಯೋಜನೆಯಡಿ ಪರಿಹಾರ ಕೊಡಿಸಲು ಸರ್ಕಾರ ಬದ್ಧವಾಗಿದೆ. ಭೀಮಾ ಯೋಜನೆಗೆ ಅರ್ಜಿ ಸಲ್ಲಿಸುವ ಗಡುವನ್ನು ವಿಸ್ತರಿಸುವಂತೆ ಕೇಂದ್ರ ಕೃಷಿ ಸಚಿವಾಲಯಕ್ಕೆ ಪತ್ರ ಬರೆಯಲಾಗಿದೆ ಎಂದು ಸಚಿವರು ತಿಳಿಸಿದರು.

ಜೆ.ಜಿ ಹಳ್ಳಿ ಕುಡಿಯುವ ನೀರಿನ ಯೋಜನೆಗೆ ಈಗಾಗಲೇ ರೂ.244 ಕೋಟಿ ಬಿಡುಗಡೆ ಮಾಡಲಾಗಿದೆ. ಸಣ್ಣ ನೀರಾವರಿ ಇಲಾಖೆ ಮೂಲಕ 16 ಕೆರೆಗಳಿಗೆ ನೀರು ತುಂಬಿಸಲು ಶೀಘ್ರವೇ ಟೆಂಡರ್ ಕರೆಯಲಾಗುವುದು ಎಂದು ಸಚಿವ ಟಿ.ರಘುಮೂರ್ತಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್, ತೋಟಗಾರಿಕೆ ಜಂಟಿ ನಿರ್ದೇಶಕಿ ಸವಿತಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.