ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗ ಕೊಡಿಸಲು ವಿಫಲ: ಆಕ್ರೋಶ

| Published : Sep 05 2024, 12:33 AM IST

ಸಾರಾಂಶ

ಜಿಲ್ಲಾಧಿಕಾರಿ ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾ ಕೈಗಾರಿಕೆಗಳ ಕೇಂದ್ರದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿ ರಚಿಸಿದ್ದರು. ಈ ಸಮಿತಿಯ ಶಿಫರಾಸಿನಂತೆ ಉದ್ಯೋಗ ನೀಡಬೇಕೆಂದು ಕೆಲವು ಕೈಗಾರಿಕೆಗಳಿಗೆ ಕೆಐಎಡಿಬಿ ಅಧಿಕಾರಿಗಳು ಪತ್ರವನ್ನು ನೀಡಿದ್ದಾರೆ. ಆದರೆ ಈ ಪತ್ರಗಳಿಗೆ ಕಾರ್ಖಾನೆಗಳು ಸ್ಪಂದಿಸುತ್ತಿಲ್ಲ.

ಕನ್ನಡಪ್ರಭ ವಾರ್ತೆ ಮೈಸೂರು

ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗ ಕೊಡಿಸಲು ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆಐಎಡಿಬಿ ವಿಫಲವಾಗಿದೆ ಎಂದು ಆರೋಪಿಸಿ ಕೆಂಪಿಸಿದ್ದನಹುಂಡಿ ರೈತರು ಕೆಐಎಡಿಬಿ ಮುಂಭಾಗದಲ್ಲಿ ಬುಧವಾರದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದರು.

ವರುಣ ಕ್ಷೇತ್ರದ ಕೆಂಪಿಸಿದ್ದನಹುಂಡಿ ಗ್ರಾಮದ ರೈತರ ಭೂಮಿಯನ್ನು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗಾಗಿ ಭೂ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆದರೆ ರೈತರ ಕುಟುಂಬದ ಸದಸ್ಯರಿಗೆ ಕಾರ್ಖಾನೆಗಳಲ್ಲಿ ಕಾಯಂ ಕೆಲಸ ನೀಡದೆ ಸತಾಯಿಸುತ್ತಿದ್ದು. ರೈತರ ಹಲವಾರು ಹೋರಾಟದ ನಂತರ, ಜಿಲ್ಲಾಧಿಕಾರಿ ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾ ಕೈಗಾರಿಕೆಗಳ ಕೇಂದ್ರದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿ ರಚಿಸಿದ್ದರು. ಈ ಸಮಿತಿಯ ಶಿಫರಾಸಿನಂತೆ ಉದ್ಯೋಗ ನೀಡಬೇಕೆಂದು ಕೆಲವು ಕೈಗಾರಿಕೆಗಳಿಗೆ ಕೆಐಎಡಿಬಿ ಅಧಿಕಾರಿಗಳು ಪತ್ರವನ್ನು ನೀಡಿದ್ದಾರೆ. ಆದರೆ ಈ ಪತ್ರಗಳಿಗೆ ಕಾರ್ಖಾನೆಗಳು ಸ್ಪಂದಿಸುತ್ತಿಲ್ಲ ಎಂದು ಅವರು ದೂರಿದರು.

ಹೀಗಾಗಿ, ತಮ್ಮ ಬೇಡಿಕೆ ಈಡೇರಿಸಬೇಕು ಆಗ್ರಹಿಸಿ ಕಳೆದ ಆ.29 ರಂದು ಕೆಐಎಡಿಬಿಯ ಕಚೇರಿಯ ಮುಂದೆ ಅನಿರ್ಧಿಷ್ಟಾವಧಿ ಹೋರಾಟ ಆರಂಭಿಸಲಾಗಿತ್ತು. ಪ್ರತಿಭಟನಾ ಸ್ಥಳಕ್ಕೆ ಬಂದ ಕೆಐಎಡಿಬಿಯ ಅಧಿಕಾರಿಗಳು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ರೈತರಿಗೆ ಕೆಲಸ ನೀಡಬೇಕಿರುವ ಕಾರ್ಖಾನೆಗಳ ಪ್ರತಿನಿಧಿಗಳ ಸಭೆಯನ್ನು ನಡೆಸಿ ಉದ್ಯೋಗ ಕೊಡಿಸುವುದಾಗಿ ತಿಳಿಸಿದ್ದರು. ಹೀಗಾಗಿ, ಪ್ರತಿಭಟನೆಯನ್ನು ವಾಪಾಸ್ ತೆಗೆದುಕೊಳ್ಳಲು ನಿರ್ಧರಿಸಲಾಗಿತ್ತು. ಆದರೆ ಸಭೆಯಲ್ಲಿ ಭೂಮಿ ನೀಡಿದ ರೈತರ ಮಕ್ಕಳಿಗೆ ಉದ್ಯೋಗ ನೀಡುವ ಬಗ್ಗೆ ಯಾವುದೇ ತಿರ್ಮಾನವಾಗಲಿಲ್ಲ. ಹೀಗಾಗಿ ಮತ್ತೆ ಅನಿರ್ದಿಷ್ಟಾವಧಿ ಹೋರಾಟವನ್ನು ರೈತರು ಆರಂಭಿಸಿದ್ದಾರೆ.

ರೈತ ಮುಖಂಡರಾದ ಬೊಕ್ಕಹಳ್ಳಿ ನಂಜುಂಡಸ್ವಾಮಿ, ಎಚ್.ಎಂ. ಬಸವರಾಜು, ಉಮೇಶ್, ಮಂಜು, ರವಿ, ಮಧು, ಹೂವಮ್ಮ, ಮಂಜುಳಾ, ಶಿವಮ್ಮ, ನಾಗಮ್ಮ ಮೊದಲಾದವರು ಇದ್ದರು.

ಸುಪ್ರೀಂಕೋರ್ಟ್ ತೀರ್ಪಿನಂತೆ ಒಳ ಮೀಸಲಾತಿ ಅನುಷ್ಠಾನಗೊಳಿಸಲು ಆಗ್ರಹಿಸಿ 9 ರಂದು ದಸಂಸ ಪ್ರತಿಭಟನೆಕನ್ನಡಪ್ರಭ ವಾರ್ತೆ ಮೈಸೂರು

ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ನೀಡುವಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಸೆ.9ರ ಬೆಳಗ್ಗೆ 11ಕ್ಕೆ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ದಸಂಸ ರಾಜ್ಯಾಧ್ಯಕ್ಷ ಎನ್. ಮೂರ್ತಿ ತಿಳಿಸಿದರು.ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಮೆರವಣಿಗೆ ಮೂಲಕ ತೆರಳಿ ಆಯಾ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗುವುದು. ಜೊತೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಿಂದ ಮುಖ್ಯಮಂತ್ರಿಗಳ ನಿವಾಸಕ್ಕೆ ರ್ಯಾಲಿ ನಡೆಸಿ ಒಳ ಮೀಸಲಾತಿ ಅನುಷ್ಠಾನಕ್ಕೆ ಒತ್ತಾಯಿಸಲಾಗುವುದು ಎಂದರು.

ಪರಿಶಿಷ್ಟರ ಮೀಸಲಾತಿ ಪರಿಶಿಷ್ಟ ಜನಾಂಗದ 101 ಜಾತಿಗಳಲ್ಲಿ ಸಮನಾಗಿ ಹಂಚಿಕೆಯಾಗಿಲ್ಲ ಎಂಬ ಆತಂಕ ಹಾಗೂ ಅಸಹನೆಯಿಂದ 30 ದಶಕಗಳಿಂದ ರಾಜ್ಯಾದ್ಯಂತ ನಿರಂತರವಾಗಿ ಹೋರಾಟಗಳು ನಡೆಯುತ್ತಿವೆ. ಹೋರಾಟದಲ್ಲಿ ಹಲವಾರು ಹೋರಾಟಗಾರರು ಜೀವ, ಜೀವನ ಕಳೆದುಕೊಂಡಿದ್ದಾರೆ ಎಂದು ಅವರು ಹೇಳಿದರು.ಪರಿಶಿಷ್ಟರ ಮೀಸಲಾತಿ ವರ್ಗೀಕರಣ ಮಾಡಲು ಕರ್ನಾಟಕ, ಆಂಧ್ರ, ಪಂಜಾಬ್ ಸೇರಿದಂತೆ ಹಲವು ರಾಜ್ಯಗಳಲ್ಲಿ ನಡೆದ ಹೋರಾಟಗಳ ಹಿನ್ನೆಲೆಯಲ್ಲಿ ಹತ್ತಾರು ರಾಜ್ಯ ಸರ್ಕಾರಗಳು ರಚಿಸಿದ ಆಯೋಗಗಳು ನೀಡಿದ ವರದಿಗಳನ್ನು ಪರಿಶೀಲಿಸಿದ ಸುಪ್ರೀಂಕೋರ್ಟ್ ನ 7 ನ್ಯಾಯಾಧೀಶರ ಸಂವಿಧಾನ ಪೀಠವು ಆ.1 ರಂದು ಐತಿಹಾಸಿಕ ತೀರ್ಪು ನೀಡಿ, ಈ ವಿವಾದಕ್ಕೆ ತೆರೆ ಎಳೆದಿದೆ. ಹೀಗಾಗಿ, ರಾಜ್ಯ ಸರಕಾರ ಒಳ ಮೀಸಲಾತಿ ಅನುಷ್ಠಾನಗೊಳಿಸಿ ನ್ಯಾಯ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.

ಮುಖ್ಯಮಂತ್ರಿಗಳು ಸಚಿವ ಸಂಪುಟ ಸಭೆ ನಡೆಸಿ ನ್ಯಾ.ಎ.ಜೆ. ಸದಾಶಿವ ಅವರ ಆಯೋಗದ ವರದಿಯಂತೆ ಪರಿಶಿಷ್ಟರ ಮೀಸಲಾತಿ ವರ್ಗೀಕರಣ ಅನುಷ್ಠಾನ ಮಾಡಲು ಆಗ್ರಹಿಸಿದೆ. ವಿಳಂಬ ಮಾಡಿದಲ್ಲಿ ಮುಂಬರುವ ವಿಧಾನಸಭಾ ಉಪ ಚುನಾವಣೆಯನ್ನು ಬಹುಜನರು ಬಹಿಷ್ಕರಿಸುತ್ತಾರೆ ಎಂದು ಅವರು ಎಚ್ಚರಿಸಿದರು.ದಸಂಸ ರಾಜ್ಯ ನಿರ್ದೇಶಕ ಬೈಲಹೊನ್ನಯ್ಯ, ಜಿಲ್ಲಾಧ್ಯಕ್ಷ ಶಂಕರ್, ಸಲಹೆಗಾರ ವಿ. ನಾಗರಾಜು, ತಾಲೂಕು ಅಧ್ಯಕ್ಷರಾದ ಸ್ವಾಮಿ, ಬಲ್ಲಯ್ಯ, ರವೀಶ್, ಸಿದ್ದಪ್ಪ, ಗಿರೀಶ್ ಕುಮಾರ್ ಮೊದಲಾದವರು ಇದ್ದರು.