ಭಟ್ಕಳ: ಮುರ್ಡೇಶ್ವರ ದೇವಸ್ಥಾನದ ಹೆಸರನ್ನು ದುರುಪಯೋಗಪಡಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ "ಶ್ರೀ ಮುರುಡೇಶ್ವರ ಅದೃಷ್ಟ ಡ್ರಾ " ಹೆಸರಿನಲ್ಲಿ ನಕಲಿ ಲಾಟರಿ ಟಿಕೆಟ್‌ಗಳನ್ನು ಮಾರಾಟ ಮಾಡಿ ಸಾರ್ವಜನಿಕರಿಗೆ ವಂಚನೆ ಎಸಗಿದ ಪ್ರಕರಣದಲ್ಲಿ ಆರೋಪಿಯನ್ನು ಮುರ್ಡೇಶ್ವರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೀದರ ಜಿಲ್ಲೆಯ ಬಾಲ್ಕಿ ತಾಲೂಕಿನ ಸಾಲಖನಗಾಂವ ನಿವಾಸಿ ನರಸಿಂಗ್ ವೆಂಕಟರಾವ್ ತಗರಖೇಡೆ (೩೨) ಎಂದು ಗುರುತಿಸಲಾಗಿದೆ.

ಆರೋಪಿ ಮುರ್ಡೇಶ್ವರ ದೇವಸ್ಥಾನದ ಭಾವಚಿತ್ರವನ್ನು ಬಳಸಿಕೊಂಡು "ಶ್ರೀ ಮುರುಡೇಶ್ವರ ಅದೃಷ್ಟ ಡ್ರಾ " ಎಂಬ ಹೆಸರಿನ ನಕಲಿ ಕರಪತ್ರಗಳನ್ನು ಸೃಷ್ಟಿಸಿದ್ದಲ್ಲದೆ, ನಕಲಿ ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಮ್ ಖಾತೆಗಳ ಮೂಲಕ ಲಕ್ಕಿ ಡ್ರಾ ನಡೆಯುತ್ತಿದೆ ಎಂದು ಸುಳ್ಳು ಪ್ರಚಾರ ನಡೆಸಿ, ಸಾರ್ವಜನಿಕರಿಂದ ಹಣ ಪಡೆದು ವಂಚಿಸುದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಮುರ್ಡೇಶ್ವರ ದೇವಸ್ಥಾನದ ವ್ಯವಸ್ಥಾಪಕ ಮಂಜುನಾಥ ಮದನ ಶೆಟ್ಟಿ ಅವರು ೨೦೨೫ರ ಆ. ೬ರಂದು ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಳೆದ ಒಂದು ವರ್ಷದಿಂದ ತನಿಖೆ ನಡೆಸುತ್ತಿದ್ದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎನ್.ಎಂ., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ ಜಿ., ಡಿವೈಎಸ್ಪಿ ಗಿರೀಶ ಬಿ. ಹಾಗೂ ಸಿಪಿಐ ಜಗದೀಶ ಹಂಚಿನಾಳ ಮಾರ್ಗದರ್ಶನದಲ್ಲಿ ಪಿಎಸ್‌ಐ ಹಣಮಂತ ಬಿರಾದಾರ ಮತ್ತು ಪಿಎಸ್‌ಐ ಲೋಕನಾಥ ರಾಥೋಡ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.


ತಂಡವು ರಾಜಸ್ಥಾನ, ಮಹಾರಾಷ್ಟ್ರ ಹಾಗೂ ಬೀದರ ಜಿಲ್ಲೆಗಳಲ್ಲಿ ಆರೋಪಿಯ ಸುಳಿವು ಪತ್ತೆಹಚ್ಚಿ ನಿರಂತರ ಕಾರ್ಯಾಚರಣೆ ನಡೆಸಿ ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ೧೫ ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣದ ಕುರಿತು ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಹೆಚ್ಚಿನ ತನಿಖೆ ಮುಂದುವರಿದಿದೆ.