ಸಾರಾಂಶ
ಪ್ರಾಥಮಿಕ ಶಾಲೆಯ ಕೊನೆಯ ಹಂತ ಏಳನೇ ತರಗತಿಯು ವಿದ್ಯಾರ್ಥಿ ಜೀವನದಲ್ಲಿ ಮೊದಲಮೆಟ್ಟಿಲಾಗುತ್ತದೆ ಎಂದು ಗಣ್ಯರು ಅಭಿಪ್ರಾಯಪಟ್ಟರು.
ಕನ್ನಡಪ್ರಭ ವಾರ್ತೆ ಶನಿವಾರಸಂತೆ
ಪ್ರಾಥಮಿಕ ಶಾಲೆಯ ಕೊನೆಯ ಹಂತ ಏಳನೆ ತರಗತಿಯು ವಿದ್ಯಾರ್ಥಿ ಜೀವನದಲ್ಲಿ ಮೊದಲ ಮೆಟ್ಟಿಲಾಗುತ್ತದೆ ಎಂದು ದುಂಡಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಎಚ್.ಆರ್.ಮಲ್ಲೇಶ್ ಅಭಿಪ್ರಾಯ ಪಟ್ಟರು.ಅವರು ಬ್ಯಾಡಗೊಟ್ಟ ಗ್ರಾ.ಪಂ.ವ್ಯಾಪ್ತಿಯ ಬೆಂಬಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2024-25ನೇ ಶೈಕ್ಷಣಿಕ ಸಾಲಿನ ಏಳನೇ ತರಗತಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ವಿದ್ಯಾರ್ಥಿ ಜೀವನದಲ್ಲಿ ಪ್ರಾಥಮಿಕ ವಿದ್ಯಾಭ್ಯಾಸವು ಶಿಕ್ಷಣದ ಮೊದಲ ಮೆಟ್ಟಿಲಾಗಿರುವುದರಿಂದ ಪ್ರೌಢಶಾಲಾ ಹಂತಕ್ಕೆ ಶಿಕ್ಷಣ ಪಡೆಯಲು ಹೋಗುವ ವಿದ್ಯಾರ್ಥಿಗಳು ಪ್ರಾಥಮಿಕ ಶಾಲೆಯಲ್ಲಿ ಕಲಿತ ಸಂಸ್ಕಾರ, ವಿನಯತೆಯಲ್ಲಿ ಮುಂದುವರೆಸಿಕೊಂಡು ಹೋಗಬೇಕು. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಪ್ರಾಥಮಿಕ ಶಾಲಾ ಹಂತದಲ್ಲಿ ಕಲಿಸಿದ ಗುರುಗಳನ್ನು ಸ್ಮರಿಸಬೇಕು. ಈ ಮೂಲಕ ವಿದ್ಯಾರ್ಥಿಗಳು ಮುಂದೆ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಬೇಕು ಎಂದು ಸಲಹೆ ನೀಡಿದರು.ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಡಿ.ಎಲ್.ಮೂರ್ತಿ, ಮಾನವೀಯತೆ, ಸಂಸ್ಕಾರಗಳಂತಹ ಮೌಲ್ಯಗಳು ಪ್ರಾಥಮಿಕ ಶಾಲಾ ಹಂತದಲ್ಲಿ ವಿದ್ಯಾರ್ಥಿಗಳು ಕಲಿಯುತ್ತಾರೆ. ವಿಶೇಷವಾಗಿ ಸರ್ಕಾರಿ ಶಾಲೆಯ ಪ್ರಾಥಮಿಕ ಶಾಲಾ ಹಂತದ ವಿದ್ಯಾರ್ಥಿಗಳಲ್ಲಿ ಗುರುಭಕ್ತಿಯನ್ನು ಕಲಿಯುತ್ತಾರೆ. ಈ ನಿಟ್ಟಿನಲ್ಲಿ ಪ್ರಾಥಮಿಕ ಶಾಲಾ ಹಂತದ ಕಿರಿಯ ವಿದ್ಯಾರ್ಥಿಗಳು ಹಿರಿಯ ವಿದ್ಯಾರ್ಥಿಗಳ ಗುರುಭಕ್ತಿಯನ್ನು ಅನುಸರಿಸುವಂತೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಸಹ ಶಿಕ್ಷಕಿ ಬಿ.ಕೆ.ಕುಸುಮ, ಅತಿಥಿ ಶಿಕ್ಷಕಿ ಎಚ್.ಆರ್.ರಶ್ಮಿತ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭ ಹಿರಿಯ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.