ಸಾರಾಂಶ
ಕನ್ನಡಪ್ರಭ ವಾರ್ತೆ ಹಾಸನ
ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ, ರೈತರ ಆತ್ಮಹತ್ಯೆ ತಡೆಗಟ್ಟಲು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗಿದ್ದು, ರೈತರ ನ್ಯಾಯಯುತ ಬೇಡಿಕೆಗಳನ್ನು ಈಡೇರದಿದ್ದಲ್ಲಿ ಮುಂದಿನ ದಿನಗಳಲ್ಲಿ ಡಿಸಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ಮಾಡುವುದಾಗಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎಚ್.ಕೆ. ರಘು ಎಚ್ಚರಿಸಿದರು.ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ಈ ಸರ್ಕಾರ ಬಂದು ಒಂದು ವರ್ಷದ ಅವಧಿಯಲ್ಲೇ ಪರಿಶಿಷ್ಟ ವರ್ಗಕ್ಕೆ ಮೀಸಲಿಟ್ಟಿದ್ದ ೧೮೭ ಕೋಟಿ ಹಣ ದುರುಪಯೋಗದ ಆರೋಪಕ್ಕೆ ಒಳಗಾಗಿದೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಲಂಗು ಲಗಾಮಿಲ್ಲದೇ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಭೂ ಮಾಫಿಯಗಳ ಅಕ್ರಮಗಳು ನಿರಂತರವಾಗಿ ಸಾಗುತ್ತಲೇ ಇವೆ. ರೈತರ ಆತ್ಮಹತ್ಯೆ ಸರಣಿ ಮುಂದುವರೆಯುತ್ತಲೇ ಇದೆ. ಈ ಸರ್ಕಾರಕ್ಕೆ ಎಚ್ಚರಿಕೆ ನೀಡಿ ರೈತಪರ ನೀತಿಗಳನ್ನು ರೂಪಿಸಲು ಹಾಗೂ ರೈತರ ಆತ್ಮಹತ್ಯೆ ತಡೆಗಟ್ಟಬೇಕೆಂಬುದು ನಮ್ಮ ಒತ್ತಾಯವಾಗಿದೆ ಎಂದರು. ರೈತರು ಕೃಷಿ ಪಂಪ್‌ಸೆಟ್‌ಗೆ ವಿದ್ಯುತ್ ಸಂಪರ್ಕ ಪಡೆಯಲು ಸ್ವತಃ ವೆಚ್ಚವನ್ನು ಭರಿಸಬೇಕೆಂದು ಸರ್ಕಾರ ತೀರ್ಮಾನಿಸಿದೆ. ಈ ತೀರ್ಮಾನವು ರೈತರಿಗೆ ಹೊರೆಯಾಗಿದ್ದು, ೨ ರಿಂದ ೩ ಲಕ್ಷ ರು. ದೊಡ್ಡ ಮೊತ್ತದ ವೆಚ್ಚವನ್ನು ರೈತರು ಭರಿಸಲು ಸಾಧ್ಯವಾಗುವುದಿಲ್ಲ. ಸರ್ಕಾರ ತೀರ್ಮಾನವನ್ನು ವಾಪಸ್ ಪಡೆದು ಹಿಂದಿನ ಪದ್ಧತಿಯನ್ನು ಮುಂದುವರಿಸಬೇಕು. ಚಳವಳಿಯಲ್ಲಿ ರೈತ ಕುಟುಂಬದವರು ಉಳಿಸಿಕೊಂಡಿರುವ ಗೃಹ ವಿದ್ಯುತ್ ಬಾಕಿಯನ್ನು ಮನ್ನಾ ಮಾಡಬೇಕು. ಕಳೆದ ವರ್ಷ ಏಪ್ರಿಲ್‌ನಿಂದ ಇದುವರೆಗೆ ೧೧೮೨ ರೈತರು ಆತ್ಮಹತ್ಯೆಗೆ ಒಳಗಾಗಿದ್ದಾರೆ. ಈ ಆತ್ಮಹತ್ಯೆಗಳಲ್ಲಿ ಯುವಕರು ಹೆಚ್ಚು ಒಳಗಾಗಿರುವುದು ಆತಂಕಕ್ಕೀಡು ಮಾಡಿದೆ. ಸರ್ಕಾರ ರೈತರ ಆತ್ಮಹತ್ಯೆ ತಡೆಗಟ್ಟಲು ರೈತಪರ ಕಾರ್ಯಕ್ರಮಗಳನ್ನು ರೂಪಿಸಿ. ರೈತ ಸಮುದಾಯಕ್ಕೆ ಆತ್ಮಸ್ಥೈರ್ಯ ತುಂಬಬೇಕು. ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಕೃಷಿ ಬೆಲೆ ಆಯೋಗವನ್ನು ಸಬಲೀಕರಣಗೊಳಿಸಬೇಕು. ರಾಜ್ಯ ಸರ್ಕಾರವೇ ಕೃಷಿ ಉತ್ಪನ್ನಗಳಿಗೆ ಎಂ.ಎಸ್.ಪಿ ನಿಗದಿ ಮಾಡಿ ಖರೀದಿಸಬೇಕು. ಹಿಂದೆಂದೂ ಕಂಡರಿಯದ ಬರಗಾಲವನ್ನು ರಾಜ್ಯ ಎದುರಿಸಿದೆ. ಇಂತಹ ಸಂದರ್ಭದಲ್ಲೂ ಬ್ಯಾಂಕುಗಳು ಸಾಲ ಬಾಕಿ ವಸೂಲಿಗಾಗಿ ರೈತರಿಗೆ ಕಿರುಕುಳ ನೀಡುತ್ತಿವೆ. ಇದನ್ನು ತಪ್ಪಿಸಿ ರೈತರ ರಕ್ಷಣೆಗೆ ಬರಬೇಕು ಎಂದು ಒತ್ತಾಯಿಸಿದರು. ರೈತರ ಎಲ್ಲಾ ಬೆಳೆಗಳಿಗೆ ಪ್ರಧಾನಮಂತ್ರಿ ಫಸಲ್‌ಭಿಮಾ ಯೋಜನೆಯನ್ನು ವಿಸ್ತರಿಸಿ ಗ್ರಾಮ ಮಟ್ಟದಲ್ಲಿ ಬೆಳೆಹಾನಿ ನಿರ್ಧರಿಸಬೇಕು. ವಿಮಾ ಕಂಪನಿಗಳು ಉಳಿಸಿಕೊಂಡಿರುವ ಬಾಕಿಯನ್ನು ರೈತರ ಖಾತೆ ಕೂಡಲೇ ಹಾಕಬೇಕು. ಫಸಲು ಪಹಣಿ ದುರಸ್ತಿ, ಪಕ್ಕಾ ಪೋಡು ಹದ್ದುಬಸ್ತು ಶುಲ್ಕ ದುಬಾರಿಯಾಗಿದ್ದು, ಆದನ್ನು ಕೂಡಲೇ ಇಳಿಸಿ ರೈತರಿಂದ ಖರೀದಿ ಕೇಂದ್ರದ ಮೂಲಕ ಜೋಳ, ರಾಗಿ ಇತ್ಯಾದಿ ಉತ್ಪನ್ನಗಳನ್ನು ಖರೀದಿ ಮಾಡಿದ್ದು, ಇನ್ನೂ ರೈತರಿಗೆ ಹಣ ಪಾವತಿಯಾಗಿಲ್ಲ. ಕೂಡಲೇ ಈ ಹಣವನ್ನು ರೈತರ ಖಾತೆಗೆ ಜಮಾ ಮಾಡಬೇಕು. ಬರ ಪರಿಹಾರದ ಹಣ, ವಿಮಾ ಪರಿಹಾರದ ಹಣವನ್ನೂ ಸಹ ಬ್ಯಾಂಕ್‌ನವರು ಸಾಲಕ್ಕಾಗಿ ಜಮಾ ಮಾಡಿಕೊಳ್ಳುತ್ತಿದ್ದಾರೆ. ಬ್ಯಾಂಕ್‌ನವರಿಗೆ ಸೂಕ್ತ ನಿರ್ದೇಶನಗಳನ್ನು ನೀಡಿ ಇದನ್ನು ತಪ್ಪಿಸಬೇಕು ಎಂದರು.
ಅರಣ್ಯ ಭೂಮಿ ಸಾಗುವಳಿ ಮಾಡುತ್ತಿರುವ ರೈತರಿಗೆ ಅರಣ್ಯ ಇಲಾಖೆ ಕಿರುಕುಳವನ್ನು ತಪ್ಪಿಸಿ ಸಾಗುವಳಿ ಮಾಡುತ್ತಿರುವ ಎಲ್ಲಾ ರೈತರಿಗೂ ಪಟ್ಟಾ ನೀಡಬೇಕು. ಕಾಡು ಪ್ರಾಣಿಗಳಿಂದ ಹಾಳಾದ ಆಸ್ತಿ, ಪ್ರಾಣ ಹಾನಿ, ನಷ್ಟವಾದ ಬೆಳೆಗಳಿಗೆ ವೈಜ್ಞಾನಿಕ ಪರಿಹಾರವನ್ನು ತುಂಬಿಕೊಡಬೇಕು ಮತ್ತು ರೈತರ ಜಮೀನಿನಲ್ಲಿ ಬೆಳೆಯುವ ಸಾಗುವಾನಿ ಕಡಿತ ಮತ್ತು ಸಾಗಾಣಿಕೆ ಪ್ರಕ್ರಿಯೆಯನ್ನು ಸರಳಗೊಳಿಸಲಿ. ಕಬ್ಬು ಬೆಳೆಗಾರರಿಗೆ ಕಾರ್ಖಾನೆಗಳು ಟನ್ ಒಂದಕ್ಕೆ ೧೫೦ ರೂ. ಪಾವತಿಸಬೇಕೆಂದು ಹಿಂದಿನ ಸರ್ಕಾರ ತೀರ್ಮಾನಿಸಿದ್ದು, ಇದಕ್ಕಿರುವ ತಾಂತ್ರಿಕ ತೊಂದರೆಗಳನ್ನು ಕೊಡಲೇ ನಿವಾರಿಸಿ ರೈತರಿಗೆ ಪಾವತಿಸಲು ಕ್ರಮ ಕೈಗೊಳ್ಳಬೇಕು. ನ್ಯಾಯಬೆಲೆ ಅಂಗಡಿಗಳಲ್ಲಿ ಕಾರ್ಡ್‌ಗೆ ೨ ಕೆಜಿ ಪಡಿತರವನ್ನು ಕಡಿಮೆ ನೀಡುತ್ತಾರೆ. ಮತ್ತು ಹೆಬ್ಬೆಟ್ಟು ಗುರುತು ಪಡೆಯಲು ಹತ್ತು ರೂಗಳನ್ನು ಪಡೆಯುತ್ತಿದ್ದು, ಸರ್ಕಾರಿ ವೈದ್ಯರು ನಿಗದಿತ ಸಮಯದಲ್ಲಿ ಕರ್ತವ್ಯ ನಿರ್ವಹಿಸುತ್ತಿಲ್ಲ ಮತ್ತು ಹೆಚ್ಚಾಗಿ ತಮ್ಮ ಖಾಸಗಿ ಕ್ಲಿನಿಕ್‌ಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ದೂರಿದರು. ಏನಾದರೂ ಸಮಸ್ಯೆಗಳ ಬಗ್ಗೆ ಗಮನಹರಿಸಿ ಕ್ರಮ ಕೈಗೊಳ್ಳದಿದ್ದರೇ ಡಿಸಿ ಕಚೇರಿ ಮುಂದೆ ಉಗ್ರವಾದ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಹಶೆಟ್ಟಿ, ಅರಸೀಕೆರೆ ತಾಲೂಕು ಅಧ್ಯಕ್ಷ ಶಿವಮೂರ್ತಿ, ಅರಕಲಗೂಡು ತಾಲೂಕು ಅಧ್ಯಕ್ಷ ದಿನೇಶ್ , ಹೊಳೆನರಸೀಪುರ ತಾಲೂಕು ಅಧ್ಯಕ್ಷ ಸೋಮಶೇಖರ್, ಜಿಲ್ಲಾ ಉಪಾಧ್ಯಕ್ಷ ವಾಜೀದ್ ಬೇಗ್ ಉಪಸ್ಥಿತರಿದ್ದರು.