ಸಾರಾಂಶ
ಕನ್ನಡಪ್ರಭವಾರ್ತೆ ಹೊಸದುರ್ಗ
2025-26ನೇ ಸಾಲಿನ ಪೂರ್ವ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯವು ಜು.1ರಿಂದ ಹೊಸದುರ್ಗ ತಾಲೂಕಿನಾದ್ಯಂತ ಆರಂಭವಾಗಿದ್ದು ಸರ್ಕಾರದ ಆದೇಶದ ಅನುಸಾರ ಈ ಬಾರಿಯ ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರು ಸ್ವತಃ ತಾವೇ ತಮ್ಮ ಜಮೀನಿನಲ್ಲಿ ತಾವು ಬೆಳೆದ ವಿವರವನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸಿ.ಎಸ್ ಈಶ ತಿಳಿಸಿದ್ದಾರೆ.ರೈತರು ತಮ್ಮ ಮೊಬೈಲ್‌ನಲ್ಲಿ ಗೂಗಲ್ ಪ್ಲೇ-ಸ್ಟೋರ್‌ನಲ್ಲಿ ಮುಂಗಾರು ರೈತರ ಬೆಳೆ ಸಮೀಕ್ಷೆ-2025 ಎಂಬ ಆಪ್ ಡೌನ್ ಲೋಡ್ ಮಾಡಿ ಕೊಂಡು ಇ ಕೆವೈಸಿ ಮೂಲಕ ಮಾಸ್ಟರ್ ವಿವರ ಹಾಗೂ ಪಹಣಿಯನ್ನು ಡೌನ್ಲೋಡ್ ಮಾಡಿಕೊಂಡು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಯ ವಿವರವನ್ನು ನಮೂದಿಸಿ ಪ್ರತಿ ಬೆಳೆಯ 3 ಛಾಯಾಚಿತ್ರಗಳನ್ನು ತೆಗೆದು ಅಪ್ಲೋಡ್ ಮಾಡಬೇಕು ಹೀಗೆ ಅಪ್ಲೋಡ್ ಮಾಡಲಾದ ಮಾಹಿತಿಯನ್ನು ಪ್ರತಿ ಗ್ರಾಮಕ್ಕೆ ನೇಮಿಸಲಾದ ಸರ್ಕಾರಿ ಅಧಿಕಾರಿಗಳು (ಮೇಲ್ವೀಚಾರಕರು) ಪರಿಶೀಲಿಸಿ ಅನುಮೋದಿಸಿತ್ತಾರೆ.
ರೈತರು ತಾವೇ ಸ್ವತಃ ಬೆಳೆ ಸಮೀಕ್ಷೆ ಮಾಡಿಕೊಳ್ಳಲು ಕಷ್ಟ ಸಾಧ್ಯವಾದಲ್ಲಿ ತಮ್ಮ ತಮ್ಮ ಗ್ರಾಮಗಳಿಗೆ ನಿಯೋಜನೆಗೊಂಡಿರುವ ಖಾಸಗಿ ನಿವಾಸಿಗಳ ಮೂಲಕ ಬೆಳೆ ಸಮೀಕ್ಷೆ ಮಾಡಿಸಿಕೊಳ್ಳಲು ತಿಳಿಸಿದೆ. ಹಾಗೂ ಪ್ರತಿ ಗ್ರಾಮಗಳಿಗೆ ಖಾಸಗಿ ನಿವಾಸಿಗಳ ಬೆಳೆ ಸಮೀಕ್ಷೆಯನ್ನು ಮೇಲ್ವೀಚಾರಣಾ ಅಧಿಕಾರಿಗಳಾಗಿ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಗಳು, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಅಧಿಕಾರಿಗಳು ಬೆಳೆ ಸಮೀಕ್ಷೆಯ ಮೇಲ್ವಿಚಾರಣಾ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದು, ಹೆಚ್ಚಿನ ಮಾಹಿತಿಗಾಗಿ ಸದರಿ ಅಧಿಕಾರಿಗಳನ್ನು ಭೇಟಿ ಮಾಡಿ ನಿಗಧಿತ ಅವಧಿಯೊಳಗೆ ಬೆಳೆ ಸಮೀಕ್ಷೆ ದಾಖಲೀಕರಣ ಮಾಡಿಕೊಳ್ಳಲು ಕೋರಿದೆ.ಮೇಲ್ಕಂಡ ಅಂಶಗಳನ್ನು ಗಮನದಲ್ಲಿರಿಸಿಕೊಂಡು ತಾಲೂಕಿನ ರೈತ ಬಾಂಧವರು ಸದರಿ ಅವಕಾಶದ ಸದುಪಯೋಗ ಪಡೆದುಕೊಂಡು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರವನ್ನು ತಾವೇ ಸರ್ಕಾರಕ್ಕೆ ನಿಗಧಿತ ಸಮಯದೊಳಗೆ ಬೆಳೆ ಸಮೀಕ್ಷೆಯಲ್ಲಿ ದಾಖಲು ಮಾಡಲು ಈ ಮೂಲಕ ಕೋರಲಾಗಿದೆ. ರೈತರು ಈಗಾಗಲೇ ಬಿತ್ತನೆ ಮಾಡಿರುವ ಬೆಳೆಗಳಿಗೆ ಜು.31 ರೊಳಗೆ ಬೆಳೆ ವಿಮೆ ಮಾಡಿಸಿಕೊಳ್ಳಲು ವಿನಂತಿಸಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ, ಕೃಷಿ, ತೋಟಗಾರಿಕೆ, ಕಂದಾಯ ಹಾಗೂ ರೇಷ್ಮೇ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಲು ತಿಳಿಸಿದೆ.