ರಾಜ್ಯದಲ್ಲಿ ರೈತರು ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರ ಬದುಕನ್ನು ದುಸ್ತರ ಮಾಡುತ್ತಿದೆ.

ಕನ್ನಡಪ್ರಭ ವಾರ್ತೆ ರಾಮನಗರ

ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಗತ್ಯ ವಸ್ತುಗಳ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಛತ್ರಿ ಹಿಡಿದುಕೊಂಡು ಮಂಗಳವಾರ ವಿನೂತನ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸೇರಿದ ಪದಾಧಿಕಾರಿಗಳು ಛತ್ರಿ ಹಿಡಿದುಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರಾಜ್ಯದಲ್ಲಿ ರೈತರು ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರ ಬದುಕನ್ನು ದುಸ್ತರ ಮಾಡುತ್ತಿದೆ. ಅಗತ್ಯ ವಸ್ತುಗಳ ಬೆಲೆಗಳನ್ನು ಏರಿಸುವ ಮೂಲಕ ಜನ ವಿರೋಧಿ ಆಡಳಿತ ನಡೆಸುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ. ಮಲ್ಲಯ್ಯ ಮಾತನಾಡಿ, ಗ್ರಾಮೀಣ ಗೃಹ ಬಳಕೆ ಮತ್ತು ರೈತರ ಐ.ಪಿ. ಸೆಟ್‌ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸುವ ಸರ್ಕಾರದ ನಿರ್ಧಾರವನ್ನು ಕೂಡಲೇ ಕೈ ಬಿಡಬೇಕು. ಐ.ಪಿ. ಸೆಟ್ ಗಳಿಗೆ ಸಂಪರ್ಕ ಪಡೆಯಲು ಸಂಪೂರ್ಣ ವೆಚ್ಚವನ್ನು ರೈತರು ಭರಿಸುವುದನ್ನು ನಿಲ್ಲಿಸಿ ಹಿಂದಿನಂತೆ ಯಥಾಸ್ಥಿತಿಗೆ ತರಬೇಕು ಎಂದು ಒತ್ತಾಯಿಸಿದರು.

ವಿದ್ಯುತ್ ದರ 1 ಯುನಿಟ್ ಗೆ 36 ಪೈಸೆ ಏರಿಸಿರುವುದನ್ನು ತಕ್ಷಣ ಕೈಬಿಡಬೇಕು. ರೈತರಿಗೆ ನಿರಂತರ 7 ತಾಸು ಗುಣಮಟ್ಟದ 3 ಪೇಸ್ ವಿದ್ಯುತ್ ಸರಬರಾಜು ಮಾಡಬೇಕು. ಏರಿಸಿರುವ ಹಾಲಿನ ದರವನ್ನು ರೈತರಿಗೆ ಕೊಡಬೇಕು ಎಂದು ಆಗ್ರಹಿಸಿದರು.

ಜಿಲ್ಲೆಯ ರೈತರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಜಿಲ್ಲಾಧಿಕಾರಿಗಳು ಸಭೆ ಕರೆದು ಪರಿಹರಿಸುತ್ತಿಲ್ಲ. ಜಿಲ್ಲಾಧಿಕಾರಿಗಳು ಕೂಡಲೇ ರೈತರ ಸಭೆ ಕರೆದು ರೈತರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ರೈತರಿಗೆ ಬರಬೇಕಾದ ಬರ ಪರಿಹಾರ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ರಾಜ್ಯ ರೈತ ಸಂಘದ ಯುವ ಕಾರ್ಯದರ್ಶಿ ಚೀಲೂರು ಮುನಿರಾಜು ಮಾತನಾಡಿ, ಸರ್ವೆ ಮತ್ತು ರೆವಿನ್ಯೂ ಇಲಾಖೆಗಳಲ್ಲಿ ಸೇವೆಗಳ ದರವನ್ನು ಹೆಚ್ಚಳ ಮಾಡಿರುವುದನ್ನು ಕೂಡಲೇ ಕಡಿಮೆ ಮಾಡಬೇಕು. ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಲಂಚಗುಳಿತನಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯ ಮಾಡಿದರು.

ಜಿಲ್ಲಾಧಿಕಾರಿ ವಿರುದ್ಧ ಛತ್ರಿ ಚಳವಳಿ:

ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅದ್ಯಕ್ಷ ಕುಮಾರಸ್ವಾಮಿ ಮಾತನಾಡಿ, ರೈತ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ಮಾಡಲು ನಿಷೇಧಾಜ್ಞೆ ಹೇರಿರುವುದರಿಂದ, ನಾವು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಛತ್ರಿಗಳನ್ನು ಹಿಡಿದುಕೊಂಡು ಛತ್ರಿ ಚಳುವಳಿ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಜನ ವಿರೋಧಿ, ರೈತ ವಿರೋಧಿ ಹಾಗೂ ದಲಿತ ವಿರೋಧಿಯಾಗಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾಧಿಕಾರಿಯವರನ್ನು ಸರ್ಕಾರ ಕೂಡಲೇ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು.

ಕಚೇರಿಯೊಳಗೆ ಬಿಡದ ಪೊಲೀಸರು :

ರೈತ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ತೆರಳಿ ಪ್ರತಿಭಟನೆ ನಡೆಸಲು ಮುಂದಾದಾಗ, ಪೊಲೀಸರು ಪ್ರತಿಭಟನಾಕಾರರನ್ನು ಜಿಲ್ಲಾಧಿಕಾರಿ ದ್ವಾರದಲ್ಲಿಯೇ ತಡೆದರು.

ಈ ಸಂದರ್ಭದಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಪೊಲೀಸಿನವರು ಜಿಲ್ಲಾಧಿಕಾರಿಗೆ ಸಪೊಟ್ ಮಾಡುತ್ತಿರುವುದು ಸರಿಯಲ್ಲ, ಪ್ರತಿಭಟನೆ ಮಾಡಲು ನಮ್ಮನ್ನು ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಿಡಬೇಕು ಎಂದು ಪ್ರತಿಭಟನಾಕಾರರು ಒಳಗೆ ನುಗ್ಗಲು ಮುಂದಾದರು.

ಜಿಲ್ಲಾಧಿಕಾರಿಗಳು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸದಂತೆ 144 ಸೆಕ್ಷನ್ ಜಾರಿ ಮಾಡಿದ್ದಾರೆ. ನಾವು ಯಾರ ಪರವೂ ಅಲ್ಲ, ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ ಎಂದು ಪೊಲೀಸಿನವರು ಪ್ರತಿಭಟನಾಕಾರರಿಗೆ ಮನವರಿಕೆ ಮಾಡಿಕೊಟ್ಟರು.

ಪ್ರತಿಭಟನೆಯಲ್ಲಿ ರೈತ ಸಂಘದ ಪದಾಧಿಕಾರಿಗಳಾದ ಎಚ್.ಸಿ. ಕೃಷ್ಣಯ್ಯ, ತಿಮ್ಮೇಗೌಡ, ಎನ್. ವೆಂಕಟೇಶ, ಮರೀಗೌಡ, ಶಿವಪ್ಪ, ಮುಖಂಡ ವಾಸು ಮತ್ತಿತರರು ಭಾಗವಹಿಸಿದ್ದರು.

---------

15ಕೆಆರ್ ಎಂಎನ್ 2,3.ಜೆಪಿಜಿ

2.ರಾಮನಗರ ಜಿಲ್ಲಾಧಿಕಾರಿ ಕಚೇರಿ ಎದುರು ರೈತ ಸಂಘದ ಪದಾಧಿಕಾರಿಗಳು ಛತ್ರಿ ಹಿಡಿದುಕೊಂಡು ಪ್ರತಿಭಟನೆ ನಡೆಸಿದರು.

3.ರಾಮನಗರ ಜಿಲ್ಲಾಧಿಕಾರಿ ಕಚೇರಿ ದ್ವಾರದಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು.

----