ಹನೂರು: ತಾಲೂಕಿನಾದ್ಯಂತ ತೀವ್ರ ಬರಗಾಲದಿಂದ ಗ್ರಾಮೀಣ ಪ್ರದೇಶಗಳಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಕೂಡಲೇ ಪರಿಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಸೋಮವಾರ ಹನೂರು ತಾಲೂಕು ಪಂಚಾಯಿತಿ ಕಚೇರಿ ಮುಂಭಾಗ ಕಾರ್ಯನಿರ್ವಹಣಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಪಳನಿಸ್ವಾಮಿ, ಹನೂರು ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಿದ್ದು, ಸಾರ್ವಜನಿಕರು ಪ್ರತಿನಿತ್ಯ ನೀರಿಗಾಗಿ ಪರದಾಡುವಂತಾಗಿದೆ ಎಂದು ಹೇಳಿದರು. ಬೇಸಿಗೆಯ ತೀವ್ರತೆಯಿಂದ ಅಂತರ್ಜಲ ಮಟ್ಟ ಕುಸಿದ ಪರಿಣಾಮ ಹಲವು ಗ್ರಾಮಗಳಲ್ಲಿ ಕೊಳವೆಬಾವಿಗಳು ಹಾಗೂ ಇತರೆ ಕುಡಿಯುವ ನೀರಿನ ಮೂಲಗಳು ಬತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ ಎಂದು ತಿಳಿಸಿದರು.ತಾಲೂಕು ಆಡಳಿತ ಯಾವುದೇ ವಿಳಂಬ ಮಾಡದೆ ಎಲ್ಲ ಗ್ರಾಮಗಳಿಗೂ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸುವ ಸೇರಿದಂತೆ ಅಗತ್ಯ ತುರ್ತು ಕ್ರಮಗಳನ್ನು ಕೈಗೊಂಡು ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದರು. ಜೊತೆಗೆ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ನೀರಿನ ಸಮಸ್ಯೆಯ ವಾಸ್ತವ ಸ್ಥಿತಿ ಪರಿಶೀಲಿಸಿ, ತಾತ್ಕಾಲಿಕ ಹಾಗೂ ಶಾಶ್ವತ ಪರಿಹಾರ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಕ್ತಿವೇಲು, ಪ್ರಧಾನ ಕಾರ್ಯದರ್ಶಿ ಗೋಪಾಲ್, ತಭಾಮಣಿ, ಪೂಂಗೂಡಿ, ವೇಲುಸ್ವಾಮಿ, ರಾಜುಗೌಡ, ಬಸವರಾಜು ಸೇರಿ ಸಂಘದ ಪದಾಧಿಕಾರಿಗಳು ಹಾಗೂ ರೈತರು ಭಾಗವಹಿಸಿದ್ದರು.