ಕಕಜವೇ ಕಾವೇರಿ ಹೋರಾಟಕ್ಕೆ ರೈತ ಸಂಘ ಬೆಂಬಲ
KannadaprabhaNewsNetwork | Published : Oct 16 2023, 01:46 AM IST
ಕಕಜವೇ ಕಾವೇರಿ ಹೋರಾಟಕ್ಕೆ ರೈತ ಸಂಘ ಬೆಂಬಲ
ಸಾರಾಂಶ
ಚನ್ನಪಟ್ಟಣ: ಕಾವೇರಿ ನೀರು ಹಂಚಿಕೆಗೆ ಸಂಕಷ್ಟ ಸೂತ್ರ ರಚಿಸುವಂತೆ ಹಾಗೂ ಮೇಕೆದಾಟು ಯೋಜನೆಗೆ ಅಡಿಕಲ್ಲು ಹಾಕುವಂತೆ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ನಡೆಸುತ್ತಿರುವ 100 ದಿನಗಳ ಪ್ರತಿಜ್ಞೆಯ ಹೋರಾಟಕ್ಕೆ ರಾಜ್ಯ ರೈತ ಸಂಘ ಬೆಂಬಲ ವ್ಯಕ್ತಪಡಿಸಿ 11ನೇ ದಿನದ ಪ್ರತಿಭಟನೆಯಲ್ಲಿ ಭಾಗಿಯಾಗಿತ್ತು.
ಚನ್ನಪಟ್ಟಣ: ಕಾವೇರಿ ನೀರು ಹಂಚಿಕೆಗೆ ಸಂಕಷ್ಟ ಸೂತ್ರ ರಚಿಸುವಂತೆ ಹಾಗೂ ಮೇಕೆದಾಟು ಯೋಜನೆಗೆ ಅಡಿಕಲ್ಲು ಹಾಕುವಂತೆ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ನಡೆಸುತ್ತಿರುವ 100 ದಿನಗಳ ಪ್ರತಿಜ್ಞೆಯ ಹೋರಾಟಕ್ಕೆ ರಾಜ್ಯ ರೈತ ಸಂಘ ಬೆಂಬಲ ವ್ಯಕ್ತಪಡಿಸಿ 11ನೇ ದಿನದ ಪ್ರತಿಭಟನೆಯಲ್ಲಿ ಭಾಗಿಯಾಗಿತ್ತು. ನಗರದ ಅಂಚೆ ಕಚೇರಿ ರಸ್ತೆಯ ಕಾವೇರಿ ಸರ್ಕಲ್‌ನಲ್ಲಿ ಕಕಜವೇ ಹಮ್ಮಿಕೊಂಡಿರುವ ಪ್ರತಿನಿತ್ಯ ಒಂದು ತಾಸು ಪ್ರತಿಭಟನೆಯಲ್ಲಿ ಭಾಗಿಯಾದ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿದರು. ರಾಜ್ಯ ರೈತ ಸಂಘದ ವಿಭಾಗೀಯ ಉಪಾಧ್ಯಕ್ಷ ಆಣಿಗೆರೆ ಕೆ.ಮಲ್ಲಯ್ಯ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನೀರಿನ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯ ಮಾಡುತ್ತಲೇ ಬರುತ್ತಿವೆ. ನ್ಯಾಯಾಧೀಕರಣ ವಾಸ್ತವ ಸ್ಥಿತಿ ಅರಿಯದೆ ತೀರ್ಪು ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಸಂಕಷ್ಟ ಸೂತ್ರ ರಚನೆ ಆಗಬೇಕು ಮತ್ತು ಮೇಕೆದಾಟು ಯೋಜನೆ ಆರಂಭ ಮಾಡಬೇಕು ಎಂದು ಆಗ್ರಹಿಸಿದರು. ತಾಲೂಕು ರೈತ ಸಂಘದ ಅಧ್ಯಕ್ಷ ರಾಮೇಗೌಡ ಮಾತನಾಡಿ, ರಾಜ್ಯ ರೈತರ ಹಿತ ಕಡೆಗಣಿಸಿ ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದೆ. ಮೇಕೆದಾಟು ವಿಚಾರವನ್ನು ಮುಂದಿಟ್ಟುಕೊಂಡು ಹೋರಾಟ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಯೋಜನೆಯ ಬಗ್ಗೆ ಚಕಾರವನ್ನೇ ಎತ್ತುತ್ತಿಲ್ಲ. ರಾಜಕೀಯ ಪಕ್ಷಗಳಿಗೆ ರಾಜ್ಯದ ಹಿತಕ್ಕಿಂತ ತಮ್ಮ ಸ್ವಾರ್ಥವೇ ಮುಖ್ಯ ಎಂದು ಕಿಡಿಕಾರಿದರು. ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶಗೌಡ ಮಾತನಾಡಿ, ಕಾವೇರಿ ನೀರಿನ ವಿವಾದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ದೃಷ್ಟಿಯಿಂದ ನಿರಂತರ ಹೋರಾಟ ಕೈಗೆತ್ತಿಕೊಳ್ಳಲಾಗಿದೆ. ಎಲ್ಲರೂ ಸೇರಿ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವ ಕೆಲಸ ಮಾಡೋಣ. ಅಗತ್ಯ ಬಿದ್ದರೆ ದೆಹಲಿಯವರೆಗೆ ಹೋಗಿ ಹೋರಾಟ ಮಾಡೋಣ ಎಂದು ಕರೆ ನೀಡಿದರು. ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕನ್ನಸಂದ್ರ ರಾಜು, ವೇದಿಕೆಯ ಜಿಲ್ಲಾಧ್ಯಕ್ಷ ಯೋಗೇಶ್‌ಗೌಡ, ಜಿಲ್ಲಾ ಗೌರವ ಅಧ್ಯಕ್ಷ ಪುಟ್ಟಸ್ವಾಮಿ, ರೈತ ಸಂಘದ ಕಾರ್ಯದರ್ಶಿ ನಾಗರಾಜು, ತಿಮ್ಮೇಗೌಡ ಗೌಡಗೆರೆ, ಕೋದಂಡರಾಮು, ರಾಮಕೃಷ್ಣಯ್ಯ ಬೈರಾಪಟ್ಟಣ, ಎಂ.ಬೋರೇಗೌಡ, ಶ್ಯಾಮ್, ಸಿದ್ದಪ್ಪಾಜಿ ಇತರರಿದ್ದರು. ಪೊಟೋ೧೫ಸಿಪಿಟ೧: ಕಸ್ತೂರಿ ಕರ್ನಾಟಕ ಜನಪರ ವೇದಿಕೆ ನಡೆಸುತ್ತಿರುವ 100 ದಿನಗಳ ಪ್ರತಿಜ್ಞೆಯ ಹೋರಾಟದಲ್ಲಿ ರೈತ ಸಂಘದ ಮುಖಂಡರು ಭಾಗಿಯಾಗಿದ್ದರು.