ಅರಸೀಕೆರೆ: ವಿದ್ಯುತ್ ವಿತರಣಾ ವ್ಯವಸ್ಥೆಯಲ್ಲಿ ಖಾಸಗಿ ವಲಯದ ಹಸ್ತಕ್ಷೇಪ ಹೆಚ್ಚಾಗುತ್ತಿರುವುದು ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರಲಿದ್ದು, ರೈತರಿಗೆ ಸಿಗುತ್ತಿರುವ ಸೌಲಭ್ಯಗಳು ಭವಿಷ್ಯದಲ್ಲಿ ದುಬಾರಿಯಾಗುವ ಆತಂಕ ಎದುರಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರು ಆತಂಕ ವ್ಯಕ್ತಪಡಿಸಿದರು.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ರೈತ ಸಂಘದ ಕಾರ್ಯಾಧ್ಯಕ್ಷ ಬೋರನಕಪ್ಪಲು ಶಿವಲಿಂಗಪ್ಪ ಮಾತನಾಡಿ, ರಾಜ್ಯದಲ್ಲಿ 70 ಲಕ್ಷಕ್ಕೂ ಹೆಚ್ಚು ಪಂಪ್‌ಸೆಟ್‌ಗಳನ್ನು ಬಳಸಿಕೊಂಡು ರೈತರು ಕೊಳವೆಬಾವಿ ನೀರಿನ ಆಧಾರದ ಮೇಲೆ ಕೃಷಿ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ರೈತ ಕುಟುಂಬಗಳ ಬದುಕು ಕೃಷಿ ಹಾಗೂ ವಿದ್ಯುತ್ ಸರಬರಾಜಿನ ಮೇಲೆ ಅವಲಂಬಿತವಾಗಿದ್ದು, ವಿದ್ಯುತ್ ಕ್ಷೇತ್ರವನ್ನು ಖಾಸಗಿ ಸಂಸ್ಥೆಗಳಿಗೆ ಒಪ್ಪಿಸಿದರೆ ರೈತರು ಭವಿಷ್ಯದಲ್ಲಿ ಹೆಚ್ಚುವರಿ ಆರ್ಥಿಕ ಹೊರೆ ಎದುರಿಸಬೇಕಾಗುತ್ತದೆ ಎಂದು ಹೇಳಿದರು.ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕೆಪಿಟಿಸಿಎಲ್ ಅನ್ನು ಹಂತಹಂತವಾಗಿ ಖಾಸಗೀಕರಣದತ್ತ ಕೊಂಡೊಯ್ಯಲು ಪ್ರಯತ್ನಿಸುತ್ತಿದ್ದು, ಇದನ್ನು ರೈತ ಸಂಘ ಮತ್ತು ಹಸಿರು ಸೇನೆ ತೀವ್ರವಾಗಿ ವಿರೋಧಿಸಲಿದೆ. ಅಗತ್ಯವಿದ್ದರೆ ರಾಜ್ಯಾದ್ಯಂತ ಹೋರಾಟ ರೂಪಿಸಿ ಬೀದಿಗಿಳಿಯಲು ಹಿಂಜರಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ನೇತೃತ್ವದ ಸರ್ಕಾರದ ಅವಧಿಯಲ್ಲಿ ರೈತರ ತೀವ್ರ ವಿರೋಧದ ನಡುವೆಯೂ ವಿದ್ಯುತ್ ಮೀಟರ್ ಅಳವಡಿಕೆಗೆ ಮುಂದಾದ ಸಂದರ್ಭದಲ್ಲಿ, ಪ್ರೊಫೆಸರ್ ನಂಜುಂಡಸ್ವಾಮಿ ನೇತೃತ್ವದಲ್ಲಿ ರೈತರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಮೀಟರ್‌ಗಳನ್ನು ತಂದು ಹಾಕಿ ಪ್ರತಿಭಟನೆ ನಡೆಸಿದ್ದನ್ನು ಸರ್ಕಾರಗಳು ನೆನಪಿಸಿಕೊಳ್ಳಬೇಕು ಎಂದು ಹೇಳಿದರು.ರೈತ ಮುಖಂಡ ರವಿಕುಮಾರ್ ಮಾತನಾಡಿ, ದೇಶದ ಬೆನ್ನೆಲುಬಾಗಿರುವ ರೈತರ ಬದುಕು ಬಲಪಡಿಸುವ ಬದಲು ಸರ್ಕಾರಗಳು ಇತ್ತೀಚಿನ ವರ್ಷಗಳಲ್ಲಿ ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿರುವುದು ವಿಷಾದನೀಯ. ರೈತ ಸಮುದಾಯದ ಹಿತಾಸಕ್ತಿಗೆ ಧಕ್ಕೆಯಾದರೆ ರೈತ ಸಂಘ ಹಾಗೂ ಹಸಿರು ಸೇನೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟದ ಮಾರ್ಗವನ್ನು ಅನುಸರಿಸಲಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ತಾಲೂಕು ರೈತ ಸಂಘದ ಅಧ್ಯಕ್ಷ ಅಣ್ಣನಾಯಕನಹಳ್ಳಿ ಶಿವಮೂರ್ತಿ, ಕಾರ್ಯದರ್ಶಿ ಎಂ.ಪಿ. ಮಲ್ಲಿಕಾರ್ಜುನ್, ಕಾರೇಹಳ್ಳಿ ರವಿ, ಮುದ್ನಳ್ಳಿ ಮಂಜಣ್ಣ, ಸಿದ್ರಳ್ಳಿ ರಾಜಣ್ಣ, ಬೆಲವತ್ತೇಹಳ್ಳಿ ರಘು, ಬೋರನಕಪ್ಪಲು ರಮೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.