ಸಾರಾಂಶ
ಕನ್ನಡಪ್ರಭವಾರ್ತೆ ಶ್ರೀರಂಗಪಟ್ಟಣ
ಜನ-ಜಾನುವಾರುಗಳಿಗೆ ಕುಡಿಯಲು ಹಾಗೂ ಬೆಳೆದು ನಿಂತಿರುವ ರೈತರ ಬೆಳೆಗಳ ರಕ್ಷಣೆಗೆ ಕೆಆರ್‌ಎಸ್ ಅಣೆಕಟ್ಟೆ ವ್ಯಾಪ್ತಿಯ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು ಹರಿಸಲು ಒತ್ತಾಯಿಸಿ ರೈತರು ಕೆಆರ್‌ಎಸ್‌ನ ನೀರಾವರಿ ನಿಗಮ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.ಭೂಮಿ ತಾಯಿ ಹೋರಾಟ ಸಮಿತಿಯ ನಂಜುಂಡೇಗೌಡ ಹಾಗೂ ಸಮಿತಿ ಅಧ್ಯಕ್ಷ ಬಲ್ಲೇನಹಳ್ಳಿ ಕೃಷ್ಣೇಗೌಡ ನೇತತ್ವದಲ್ಲಿ ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ಕಚೇರಿ ಎದುರು ಧರಣಿ ನಡೆಸಿ, ನೀರಾವರಿ ಸಚಿವ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ, ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಂತರ ಕೆ.ಎಸ್. ನಂಜುಂಡೇಗೌಡ ಮಾತನಾಡಿ, ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶ ರೈತರು ನಿರಂತರವಾಗಿ ತೊಂದರೆ ಅನುಭವಿಸುತ್ತಿದ್ದೇವೆ. ಈ ಹಿಂದೆ ನಾಲೆಗಳಿಗೆ ಕಟ್ಟು ಪದ್ಧತಿಯಲ್ಲಿ ನೀರು ಬಿಡಲಾಗುತ್ತಿತ್ತು. ಆದರೆ, ಈ ಬಾರಿ ಕುಡಿಯಲು ನೀರಿಲ್ಲದೆ ಜನ-ಜಾನುವಾರುಗಳು ತೊಂದರೆ ಅನುಭವಿಸುವಚಿತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.ಕೊಳವೆ ಬಾವಿಗಳಲ್ಲಿ ಅಂತರ್ಜಲ ಬತ್ತಿಹೋಗಿವೆ, ಬೆಳೆದು ನಿಂತಿರುವ ಬೆಳೆಗಳು ಒಣಗಿ ಹೋಗುತ್ತಿವೆ ಕನಿಷ್ಠ ಪಕ್ಷ ತಿಂಗಳಿಗೊಮ್ಮೆ ನಾಲೆಗಳಿಗೆ ನೀರು ಹರಿಸಬೇಕು. ಇಲ್ಲದಿದ್ದರೆ ಜನತೆ ಸಂಕಷ್ಟಕ್ಕೆ ಸಿಲುಕಲ್ಲಿದ್ದಾರೆ ಎಂದು ಕಿಡಿಕಾರಿದರು.
ಸಮಿತಿ ಅಧ್ಯಕ್ಷ ಕೃಷ್ಣೇಗೌಡ ಮಾತನಾಡಿ, ನಾಲೆಗಳಿಗೆ ನೀರು ಹರಿಸದ ಹಿನ್ನೆಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯಲು ನೀರು ಇಲ್ಲದೆ ಸಮಸ್ಯೆಗಳು ಎದುರಾಗುತ್ತದೆ. ಅಲ್ಲದೇ, ಬೆಳೆದು ನಿಂತಿರುವ ಬೆಳೆಗಳು ಒಣಗುತ್ತಿವೆ. ಆದರೆ, ಸರ್ಕಾರ ಹಾಗೂ ಕಾವೇರಿ ನೀರಾವರಿ ನಿಗಮ ನಾಲೆಗಳಿಗೆ ನೀರು ಹರಿಸದೆ ರೈತರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಕಿಡಿಕಾರಿದರು.ರಾಜಧಾನಿ ಬೆಂಗಳೂರಿಗೆ, ಮೈಸೂರು ಹಾಗೂ ಮಂಡ್ಯ ಸೇರಿದಂತೆ ಇತರೆ ನಗರಗಳಿಗೆ ಕುಡಿಯುವ ನೀರಿಗೆ ಆದ್ಯತೆ ನೀಡುವ ಸರ್ಕಾರ ಕಾವೇರಿ ಅಚ್ಚುಕಟ್ಟು ಪ್ರದೇಶದ ಜನ- ಜಾನುವಾರಗಳ ಕುಡಿಯುವ ನೀರಿಗೆ ಆದ್ಯತೆ ನೀಡುತ್ತಿಲ್ಲ, ಕಾವೇರಿ ಜಲಾನಯನ ಪ್ರದೇಶದ ರೈತ ಸಮೂಹಕ್ಕೆ ಅನ್ಯಾಯ ಮಾಡುತ್ತಿದೆ, ಈ ಕೂಡಲೇ ನಾಲೆಗಳಿಗೆ ನೀರು ಹರಿಸಬೇಕು ಎಂದು ಒತ್ತಾಯಿಸಿದರು.
ಭೂಮಿತಾಯಿ ಹೋರಾಟ ಸಮಿತಿ ಕಾರ್ಯದರ್ಶಿ ಎಂ.ವಿ ಕಷ್ಣ, ದರ್ಶನ್, ಪುಟ್ಟ ಮಾದು, ವಿಷಕಂಠು, ಸುನೀಲ್, ರವಿಲಕ್ಷ್ಮಣ, ಶಿವಣ್ಣ, ಮಹಾಲಿಂಗು, ಕಡತನಾಳು ಶ್ರೀಧರ್ ಸೇರಿದಂತೆ ಇತರರು ಭಾಗವಹಿಸಿದ್ದರು.