ಇತ್ತೀಚೆಗೆ ರೈತ ಮುಖಂಡರೊಂದಿಗೆ ಮುಖ್ಯಮಂತ್ರಿ ನಡೆಸಿದ ಸಭೆಯಲ್ಲಿ ಯಾವುದೇ ಅಂತಿಮ ತೀರ್ಮಾನ ಕೈಗೊಳ್ಳದ ಹಿನ್ನೆಲೆಯಲ್ಲಿ ರೈತ ಸಂಘಟನೆಗಳ ಸಮನ್ವಯ ಸಮಿತಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿದೆ. ಇದರಂತೆ ರಾಜ್ಯದ ಎಲ್ಲ ಸಕ್ಕರೆ ಕಾರ್ಖಾನೆಗಳಿಗೆ ಮುತ್ತಿಗೆ ಹಾಕಿ ಗೋದಾಮುಗಳಿಗೆ ಬೀಗ ಹಾಕಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (ಎಂ.ಎಸ್.ಪಿ.) ಹೆಚ್ಚಳಕ್ಕೆ ಆಗ್ರಹಿಸಿ ಚಾಮುಂಡೇಶ್ವರಿ ಕಾರ್ಖಾನೆ ಸಕ್ಕರೆ ಗೋದಾಮಿಗೆ ಬೀಗ ಹಾಕಿ ರೈತರು ಪ್ರತಿಭಟನೆ ನಡೆಸಿದರು.

ರಾಜ್ಯ ರೈತ ಸಂಘ ಹಾಗೂ ಕಬ್ಬು ಬೆಳೆಗಾರರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬೆಳಗಾವಿಯಲ್ಲಿ ತೀವ್ರಗೊಂಡಿರುವ ಹೋರಾಟವನ್ನು ಬೆಂಬಲಿಸಿ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿದ ರೈತರು ನಂತರ ಗೋದಾಮಿಗೆ ಬೀಗ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘದ ಮೈಸೂರು ವಿಭಾಗೀಯ ಕಾರ್ಯದರ್ಶಿ ಬೋರಾಪುರ ಶಂಕರೇಗೌಡ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಬ್ಬು ಬೆಳೆಗಾರರ ನ್ಯಾಯಯುತ ಬೇಡಿಕೆಗಳಿಗೆ ಸ್ಪಂದಿಸದಿರುವುದು ರೈತರಲ್ಲಿ ಅಸಮಾಧಾನ ಮೂಡಿಸಿದೆ. ಸಕ್ಕರೆ ಕನಿಷ್ಠ ಮಾರಾಟ ಬೆಲೆ ಹೆಚ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವವರೆಗೂ ಕಾರ್ಖಾನೆಗಳಿಂದ ಸಕ್ಕರೆ ಮಾರಾಟ ಮಾಡಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.

ಇತ್ತೀಚೆಗೆ ರೈತ ಮುಖಂಡರೊಂದಿಗೆ ಮುಖ್ಯಮಂತ್ರಿ ನಡೆಸಿದ ಸಭೆಯಲ್ಲಿ ಯಾವುದೇ ಅಂತಿಮ ತೀರ್ಮಾನ ಕೈಗೊಳ್ಳದ ಹಿನ್ನೆಲೆಯಲ್ಲಿ ರೈತ ಸಂಘಟನೆಗಳ ಸಮನ್ವಯ ಸಮಿತಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿದೆ. ಇದರಂತೆ ರಾಜ್ಯದ ಎಲ್ಲ ಸಕ್ಕರೆ ಕಾರ್ಖಾನೆಗಳಿಗೆ ಮುತ್ತಿಗೆ ಹಾಕಿ ಗೋದಾಮುಗಳಿಗೆ ಬೀಗ ಹಾಕಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದು ತಿಳಿಸಿದರು.

ಕಳೆದ ಒಂದೂವರೆ ತಿಂಗಳಿನಿಂದ ರಾಜ್ಯದ ಕಬ್ಬು ಬೆಳೆಗಾರರು ಸಕ್ಕರೆಯ ಪ್ರಸ್ತುತ ಕನಿಷ್ಠ ಮಾರಾಟ ಬೆಲೆ ಪ್ರತಿ ಕೆ.ಜಿಗೆ ₹31ರಿಂದ ₹60ಕ್ಕೆ ಹೆಚ್ಚಿಸಬೇಕೆಂದು ನಿರಂತರ ಹೋರಾಟ ನಡೆಸುತ್ತಿದ್ದಾರೆ. ಕಬ್ಬು ಕೃಷಿ ಉತ್ಪಾದನಾ ವೆಚ್ಚ, ಕಾರ್ಮಿಕರ ಕೂಲಿ, ಗೊಬ್ಬರ ಹಾಗೂ ಇತರೆ ಕೃಷಿ ಸಾಮಗ್ರಿಗಳ ಬೆಲೆ ಹೆಚ್ಚಾಗುತ್ತಿರುವ ಹಿನ್ನೆಲೆ ಸಕ್ಕರೆ ಎಂ.ಎಸ್.ಪಿ. ಹೆಚ್ಚಳ ಅತ್ಯಗತ್ಯವಾಗಿದೆ ಎಂದು ಆಗ್ರಹಿಸಿದರು.

ರೈತರ ಬೇಡಿಕೆಗೆ ಸರ್ಕಾರಗಳು ಸೂಕ್ತ ಸ್ಪಂದನೆ ನೀಡದಿರುವುದು ಕಬ್ಬು ಬೆಳೆಗಾರರ ಆಕ್ರೋಶಕ್ಕೆ ಕಾರಣವಾಗಿದೆ. ರೈತರಿಗೆ ನ್ಯಾಯಯುತ ಬೆಲೆ ದೊರೆಯುವವರೆಗೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಜೆ.ಎ.ಶೇಖರ್, ಜಿಲ್ಲಾ ಕಾರ್ಯದರ್ಶಿ ಜಿ.ಎಸ್.ಲಿಂಗರಾಜು, ಜಿಲ್ಲಾ ಖಜಾಂಚಿ ರವಿಕುಮಾರ್, ತಾಲೂಕು ಅಧ್ಯಕ್ಷ ಉಮೇಶ್, ಕಾರ್ಯದರ್ಶಿ ವಿನೋದ್ ಬಾಬು, ಮಳವಳ್ಳಿ ತಾಲೂಕು ಅಧ್ಯಕ್ಷ ಶಿವರುದ್ರ, ಭಾರತೀನಗರ ಅಧ್ಯಕ್ಷ ಸಿದ್ದರಾಜು, ಕಾರ್ಯದರ್ಶಿ ದಯಾನಂದ್, ದೇಶಿಗೌಡ, ನಾಗಪ್ಪ, ಬೋರೇಗೌಡ, ಪಟೇಲ್ ಬೋರೇಗೌಡ, ಮಹದೇವ, ಟಿ.ಕೆ. ಸತೀಶ್ ಸೇರಿ ನೂರಾರು ರೈತರು ಹಾಗೂ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಿದ್ದರು.