ಕನ್ನಡಪ್ರಭ ವಾರ್ತೆ ಬೆಳಗಾವಿ ಮುಂಗಾರು ಕೈಕೊಟ್ಟು ಕೃಷಿ ಚಟುವಟಿಕೆಗಳು ಕುಂಠಿತಗೊಂಡಿರುವ ಹಿನ್ನೆಲೆಯಲ್ಲಿ ಬರ ಘೋಷಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಕೃಷಿಕ ಸಮಾಜದ ನೇತೃತ್ವದಲ್ಲಿ ರೈತರು ಸೋಮವಾರ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಮುಂಗಾರು ಕೈಕೊಟ್ಟು ಕೃಷಿ ಚಟುವಟಿಕೆಗಳು ಕುಂಠಿತಗೊಂಡಿರುವ ಹಿನ್ನೆಲೆಯಲ್ಲಿ ಬರ ಘೋಷಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಕೃಷಿಕ ಸಮಾಜದ ನೇತೃತ್ವದಲ್ಲಿ ರೈತರು ಸೋಮವಾರ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಳೆ ಕೊರತೆಯಿಂದ ಬೆಳೆಗಳು ಒಣಗುತ್ತಿದ್ದು, ತೀವ್ರ ಬರ ಪರಿಸ್ಥಿತಿ ಎದುರಾಗಿದ್ದರೂ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಮಾಜದ ಅಧ್ಯಕ್ಷ ಸಿದ್ಧಗೌಡ ಮೋದಗಿ ಮಾತನಾಡಿ, 2026-27ನೇ ಸಾಲಿನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕೂಡಲೇ ರೈತರ ಸಭೆ ಕರೆದು ಪರಿಸ್ಥಿತಿಯ ವಾಸ್ತವಿಕ ಚಿತ್ರಣ ಪಡೆದು ರಾಜ್ಯದಲ್ಲಿ ಬರ ಘೋಷಿಸಬೇಕು ಎಂದು ಒತ್ತಾಯಿಸಿದರು.

ರಾಷ್ಟ್ರೀಯ ಹಾಗೂ ರಾಜ್ಯ ಪ್ರಕೃತಿ ವಿಕೋಪ ಪರಿಹಾರ ಯೋಜನೆಗಳಡಿ ರೈತರಿಗೆ ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ಘೋಷಿಸಬೇಕು. ಬರ ಪರಿಸ್ಥಿತಿಯ ಜಂಟಿ ಸಮೀಕ್ಷೆಯನ್ನು ತಕ್ಷಣ ಕೈಗೊಂಡು ಬೆಳೆಹಾನಿಯ ವಾಸ್ತವಿಕ ಅಂದಾಜು ಮಾಡಬೇಕು ಎಂದು ಆಗ್ರಹಿಸಿದರು.

ಮಳೆ ಕೊರತೆಯ ಜತೆಗೆ ವಿದ್ಯುತ್ ಪೂರೈಕೆಯಲ್ಲಿನ ವ್ಯತ್ಯಯದಿಂದ ರೈತರ ಕೃಷಿ ಚಟುವಟಿಕೆಗಳಿಗೆ ತೀವ್ರ ತೊಂದರೆಯಾಗುತ್ತಿದೆ. ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ ಕನಿಷ್ಠ ಏಳು ಗಂಟೆ ನಿರಂತರ ತ್ರಿಫೇಸ್ ವಿದ್ಯುತ್ ಪೂರೈಸಬೇಕು. ಲೋಡ್ ಶೆಡ್ಡಿಂಗ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಕಬ್ಬು ಬೆಳೆಗಾರರ ಸಮಸ್ಯೆಯನ್ನು ತಕ್ಷಣ ಪರಿಹರಿಸಬೇಕು. ಎಫ್‌ಆರ್‌ಪಿ ಹಾಗೂ ಎಸ್‌ಐಪಿ ಅಡಿಯಲ್ಲಿ ಕಬ್ಬಿನ ದರ ನಿಗದಿಪಡಿಸಬೇಕು. 2025-26ನೇ ಸಾಲಿನಲ್ಲಿ ಸಕ್ಕರೆ ಕಾರ್ಖಾನೆಗಳು ರೈತರಿಗೆ ಪಾವತಿಸಬೇಕಿರುವ ಕಬ್ಬಿನ ಬಾಕಿ ಹಣವನ್ನು ಕೂಡಲೇ ಕೊಡಿಸಬೇಕು ಎಂದು ಸಿದ್ಧಗೌಡ ಮೋದಗಿ ಆಗ್ರಹಿಸಿದರು.

ಮಳೆ ಕೊರತೆಯಿಂದ ರೈತರು ಬೆಳೆ ನಷ್ಟದ ಆತಂಕದಲ್ಲಿದ್ದು, ಸರ್ಕಾರ ವಿಳಂಬ ಮಾಡದೆ ರೈತರ ನೆರವಿಗೆ ಧಾವಿಸಬೇಕು. ಬರ ಘೋಷಣೆ, ಪರಿಹಾರ, ಸಮರ್ಪಕ ವಿದ್ಯುತ್ ಪೂರೈಕೆ ಹಾಗೂ ಕಬ್ಬಿನ ಬಾಕಿ ಪಾವತಿ ಸೇರಿದಂತೆ ಎಲ್ಲ ಬೇಡಿಕೆಗಳನ್ನು ತುರ್ತಾಗಿ ಈಡೇರಿಸದಿದ್ದರೆ ಹೋರಾಟವನ್ನು ತೀವ್ರಗೊಳಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು