ಕಬ್ಬಿನ ಬೆಲೆ ಹಾಗೂ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಮ್ಮಿಕೊಂಡಿರುವ "ಹುಬ್ಬಳ್ಳಿ ಚಲೋ " ಪಾದಯಾತ್ರೆ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಹುಬ್ಬಳ್ಳಿ:

ಕಬ್ಬಿನ ಬೆಲೆ ಹಾಗೂ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಮ್ಮಿಕೊಂಡಿರುವ "ಹುಬ್ಬಳ್ಳಿ ಚಲೋ " ಪಾದಯಾತ್ರೆ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಈ ಹಿನ್ನೆಲೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ನಿವಾಸ ಹಾಗೂ ಕಚೇರಿ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್‌ನಿಂದ ರೈತರು ಬುಧವಾರ ಸಂಜೆಯಿಂದಲೇ ಬೃಹತ್ ಸಂಖ್ಯೆಯಲ್ಲಿ ಹುಬ್ಬಳ್ಳಿಯತ್ತ ಪಾದಯಾತ್ರೆ ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಶ್ವಾಪುರದ ಮಯೂರಿ ಎಸ್ಟೇಟ್‌ನಲ್ಲಿರುವ ಸಚಿವರ ನಿವಾಸವನ್ನು ಪೊಲೀಸ್ ಭದ್ರಕೋಟೆಯನ್ನಾಗಿ ಮಾಡಲಾಗಿದೆ. ನಿವಾಸಕ್ಕೆ ತೆರಳುವ ಸರ್ವೋದಯ ವೃತ್ತ, ರಮೇಶ ಭವನ ಹಾಗೂ ಶಾಂಡಿಲ್ಯಾಶ್ರಮದ ಬಳಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ನಿವಾಸದ ಎದುರು ಮತ್ತು ಸಂಪರ್ಕ ರಸ್ತೆಗಳ ಎರಡೂ ಬದಿಗಳಲ್ಲಿ 10 ಅಡಿ ಎತ್ತರದ ಕಬ್ಬಿಣದ ಗ್ರಿಲ್‌ಗಳನ್ನು ಅಳವಡಿಸಿ ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.

ಚಿಟಗುಪ್ಪಿ ಆಸ್ಪತ್ರೆ ಆವರಣದಲ್ಲಿರುವ ಸಚಿವರ ಕಚೇರಿ ಬಳಿಯೂ ಬ್ಯಾರಿಕೇಡ್‌ಗಳನ್ನು ಹಾಕಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮಯೂರಿ ಎಸ್ಟೇಟ್‌ ಕಡೆಗೆ ಸಂಚರಿಸುವ ವಾಹನಗಳು ಹಾಗೂ ಜನರನ್ನು ವಿಚಾರಣೆ ನಡೆಸಿ ಪೊಲೀಸರು ಕಳುಹಿಸುತ್ತಿದ್ದಾರೆ. ಇದರಿಂದ ಸ್ಥಳೀಯ ನಿವಾಸಿಗಳ ಸಂಚಾರಕ್ಕೆ ತೊಂದರೆಯಾಗಿದ್ದು, ಆಟೋ ಸಂಚಾರವೂ ಅಸ್ತವ್ಯಸ್ತಗೊಂಡಿದೆ.

ಇನ್ನು, ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣ, ರೈಲು ನಿಲ್ದಾಣ ಹಾಗೂ ಬಸ್ ನಿಲ್ದಾಣಗಳಲ್ಲೂ ಭದ್ರತೆ ಹೆಚ್ಚಿಸಲಾಗಿದೆ. ನವರಾತ್ರಿ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವುದರಿಂದ ನಿಲ್ದಾಣಗಳ ಮುಖ್ಯದ್ವಾರಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.