ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ರಾಜ್ಯ ಸರ್ಕಾರ ಹಾಲಿನ ಖರೀದಿ ದರ ಕನಿಷ್ಠ ₹10 ಹೆಚ್ಚಳ ಮಾಡಬೇಕು. ಪ್ರಸ್ತುತ ಇರುವ ಖರೀದಿ ದರವನ್ನು ಪರಿಷ್ಕರಿಸಿ ₹45ಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿ ದೊಡ್ಡಬಳ್ಳಾಪುರ ತಾಲೂಕಿನ ರೈತರು, ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಮತ್ತು ಹಾಲು ಉತ್ಪಾದಕರ ಸಹಕಾರ ಸಂಘಗಳ ನೇತೃತ್ವದಲ್ಲಿ ಗುರುವಾರ ಬೀದಿಗಿಳಿದು ಹೋರಾಟ ನಡೆಸಿದ್ದು, ರಾಸುಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ದೊಡ್ಡಬಳ್ಳಾಪುರದಿಂದ ಬೈಕ್‌ ಯಾತ್ರೆ ನಡೆಸಿದ ಬಳಿಕ, ಪಾದಯಾತ್ರೆಯಲ್ಲಿ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ರೈತರು ಪ್ರತಿಭಟನೆ ನಡೆಸಿ, ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಬೇಕು ಎಂದು ಹಕ್ಕೊತ್ತಾಯ ಮಾಡಿದರು.

ಈ ವೇಳೆ ಮಾತನಾಡಿದ ಬಮೂಲ್ ನಿರ್ದೇಶಕ ಬಿ.ಸಿ.ಆನಂದ್‌ಕುಮಾರ್‌, ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು ಗಮನಿಸಿ, ಸರ್ಕಾರ ರೈತರಿಂದ ಖರೀದಿಸುವ ಪ್ರತಿ ಲೀಟರ್ ಹಾಲಿಗೆ ಕನಿಷ್ಠ ₹10 ಪ್ರೋತ್ಸಾಹ ಧನ ಹೆಚ್ಚಳ ಮಾಡಬೇಕು. ಹೈನುಗಾರಿಕೆ ನಡೆಸುವ ರೈತರು ಉತ್ಪಾದನಾ ವೆಚ್ಚ ಹೆಚ್ಚಳದಿಂದ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ರಸಗೊಬ್ಬರಗಳ ಬೆಲೆ ಏರಿಕೆ ಹಾಗೂ ಅಭಾವದ ಪರಿಸ್ಥಿತಿ ರೈತರ ಮೇಲಿನ ಹೊರೆ ಮತ್ತಷ್ಟು ಹೆಚ್ಚಿಸಿದೆ ಎಂದರು.

ಹಿಂದಿನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಬಿ.ಎಸ್. ಯಡಿಯೂರಪ್ಪ ಅವರು ಹಾಲಿನ ಪ್ರೋತ್ಸಾಹಧನ ಹೆಚ್ಚಿಸಿ ರೈತರಿಗೆ ನೆರವಾಗಿದ್ದರು. ಈಗಲೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರೈತರ ಹಿತದೃಷ್ಟಿಯಿಂದ ಪ್ರೋತ್ಸಾಹಧನ ಹೆಚ್ಚಿಸಬೇಕು. ಅವರು ಮನವಿಗೆ ಸ್ಪಂದಿಸುವ ವಿಶ್ವಾಸವಿದೆ. ಇಲ್ಲವಾದರೆ ರೈತ ಸಂಘಟನೆಗಳ ನೇತೃತ್ವದಲ್ಲಿ ರಾಜ್ಯವ್ಯಾಪಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.


ತಾಲೂಕು ಜೆಡಿಎಸ್‌ ಅಧ್ಯಕ್ಷ ಹರೀಶ್‌ಗೌಡ ಮಾತನಾಡಿ, ರಾಜ್ಯದ ಗ್ರಾಮೀಣ ಭಾಗದಲ್ಲಿ ಶೇ.80ಕ್ಕೂ ಹೆಚ್ಚು ಮಹಿಳೆಯರು ಹೈನುಗಾರಿಕೆಯನ್ನು ಅವಲಂಬಿಸಿ ಕುಟುಂಬ ನಿರ್ವಹಿಸುತ್ತಿದ್ದು, ಲಕ್ಷಾಂತರ ರೈತರು ಇದೇ ವೃತ್ತಿಯಿಂದ ಜೀವನ ಸಾಗಿಸುತ್ತಿದ್ದಾರೆ. ಬರದ ಛಾಯೆ ಕಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ತನ್ನ ಪ್ರಣಾಳಿಕೆಗೆ ಅನುಗುಣವಾಗಿ ಹಾಲಿನ ಪ್ರೋತ್ಸಾಹಧನ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಕೊರೋನಾ ಸಂಕಷ್ಟದ ಸಮಯದಲ್ಲಿಯೂ ರೈತರು ಹಾಲಿನ ಪೂರೈಕೆಯನ್ನು ನಿರಂತರವಾಗಿ ನಡೆಸಿ ಸರ್ಕಾರ ಹಾಗೂ ಜನರ ಬೆನ್ನಿಗೆ ನಿಂತಿದ್ದರು ಎಂಬುದನ್ನು ಸರ್ಕಾರ ಮರೆಯಬಾರದು ಎಂದು ಹೇಳಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ನಾಗಸಂದ್ರ ಪ್ರಸನ್ನ ಮಾತನಾಡಿದರು.

ಎಪಿಎಂಸಿ ಮಾಜಿ ಅಧ್ಯಕ್ಷ ತಿ.ರಂಗರಾಜು, ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮುತ್ತೇಗೌಡ, ತಾಲೂಕು ಅಧ್ಯಕ್ಷ ಹನುಮೇಗೌಡ, ಪ್ರಧಾನ ಕಾರ್ಯದರ್ಶಿ ಸತೀಶ್, ಕನ್ನಡ ಪಕ್ಷದ ರಾಜ್ಯ ಮುಖಂಡ ಸಂಜೀವನಾಯಕ್, ಎಂಪಿಸಿಎಸ್ ಸಂಘಗಳ ನೌಕರರ ಸಂಘದ ಅಧ್ಯಕ್ಷ ರವೀಂದ್ರ, ಮುಖಂಡರಾದ ಮುನಿರಾಮೇಗೌಡ, ಪುಟ್ಟಬಸವರಾಜು, ಹಸನ್‌ಘಟ್ಟ ರವಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.