ಕನ್ನಡಪ್ರಭ ವಾರ್ತೆ ಹಾಸನ

ರಾಜ್ಯದಲ್ಲಿ ರೈತರ ಭೂಮಿ, ಬದುಕು ಮತ್ತು ಕೃಷಿ ಹಕ್ಕುಗಳ ರಕ್ಷಣೆಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತೊಮ್ಮೆ ಹೋರಾಟದ ಕಹಳೆ ಮೊಳಗಿಸಿದ್ದು, ಜೂನ್ ೫ರಂದು ಚಿಕ್ಕಬಳ್ಳಾಪುರದಲ್ಲಿ ಬೃಹತ್ ಬೈಕ್ ರ್‍ಯಾಲಿ ಹಾಗೂ ವಿಧಾನಸೌಧ ಮುತ್ತಿಗೆ ಹಮ್ಮಿಕೊಂಡಿದ್ದು, ಈ ನಿಟ್ಟಿನಲ್ಲಿ ಹಾಸನ ಜಿಲ್ಲೆಯ ವಿವಿಧ ಭಾಗಗಳಿಂದ ಬುಧವಾರದಂದು ನೂರಾರು ಜನ ರೈತರು ರೈಲಿನ ಮೂಲಕ ಪ್ರಯಾಣ ಬೆಳೆಸಿದರು.

ಇದೇ ವೇಳೆ ರೈತ ಸಂಘದ ಜಿಲ್ಲಾಧ್ಯಕ್ಷ ಬಾಬು ಮಾತನಾಡಿ, ೮೧ ದಿನಗಳಿಂದ ನಡೆಯುತ್ತಿರುವ ನಿರಂತರ ಧರಣಿ ಹೋರಾಟದ ಮುಂದುವರಿದ ಭಾಗವಾಗಿ ಈ ಪ್ರತಿಭಟನೆ ರೂಪುಗೊಂಡಿದ್ದು, ಜೂನ್ ೫ರ ಶುಕ್ರವಾರದಂದು ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ವಿಧಾನಸೌಧ ಮುತ್ತಿಗೆ ಕಾರ್ಯಕ್ರಮ ನಡೆಯಲಿದೆ. ಹಾಸನ ಜಿಲ್ಲೆಯಿಂದ ರೈತರು ಹಾಸನ ರೈಲ್ವೆ ನಿಲ್ದಾಣದಿಂದ ಚಿಕ್ಕಬಳ್ಳಾಪುರದತ್ತ ಪ್ರಯಾಣ ಬೆಳೆಸಿದ್ದಾರೆ ಎಂದರು. ರಾಜ್ಯ ಸರ್ಕಾರ ಕೈಗಾರಿಕಾ ಅಭಿವೃದ್ಧಿಯ ಹೆಸರಿನಲ್ಲಿ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುತ್ತಿರುವ ಕ್ರಮ ರೈತ ಸಮುದಾಯವನ್ನು ಸಂಕಷ್ಟಕ್ಕೆ ತಳ್ಳುತ್ತಿದೆ ಎಂದು ಆರೋಪಿಸಿದರು. ಕಳೆದ ಎರಡು ದಶಕಗಳಲ್ಲಿ ಕೈಗಾರಿಕೆಗಳಿಗಾಗಿ ಲಕ್ಷಾಂತರ ಎಕರೆ ಭೂಮಿ ಸ್ವಾಧೀನಪಡಿಸಿಕೊಂಡಿದ್ದರೂ, ಅದರಲ್ಲಿ ಬಹುಪಾಲು ಭೂಮಿ ಕೈಗಾರಿಕಾ ಉದ್ದೇಶಕ್ಕೆ ಬಳಕೆಯಾಗದೆ ಖಾಲಿಯೇ ಉಳಿದಿದೆ. ಈ ಪ್ರಕ್ರಿಯೆ ರೈತರ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಕೃಷಿ ಆಧಾರಿತ ಗ್ರಾಮೀಣ ಆರ್ಥಿಕ ವ್ಯವಸ್ಥೆಯನ್ನು ಕುಸಿಯುವಂತೆ ಮಾಡುತ್ತಿದೆ ಎಂದು ದೂರಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿಯ ೧೩ ಗ್ರಾಮಗಳ ಸುಮಾರು ೨,೮೨೩ ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಭೂಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ರೈತರ ಆತಂಕಕ್ಕೆ ಕಾರಣವಾಗಿದೆ. ಈ ಪ್ರದೇಶದಲ್ಲಿ ಹೂವು, ಹಣ್ಣು, ತರಕಾರಿ, ಸೊಪ್ಪು, ಮಾವು, ಗೋಡಂಬಿ, ಶುಂಠಿ, ತೆಂಗು, ಅಡಿಕೆ ಹಾಗೂ ರೇಷ್ಮೆ ಬೆಳೆಗಳನ್ನು ಬೆಳೆಯಲಾಗುತ್ತಿದ್ದು, ಸಾವಿರಾರು ಕುಟುಂಬಗಳು ಕೃಷಿಯನ್ನೇ ನಂಬಿಕೊಂಡು ಬದುಕು ಸಾಗಿಸುತ್ತಿವೆ. ಇಂತಹ ಭೂಮಿಯನ್ನು ಕೈಗಾರಿಕೆಗಳಿಗೆ ನೀಡುವುದು ಕೃಷಿ ಮತ್ತು ಆಹಾರ ಭದ್ರತೆಗೆ ದೊಡ್ಡ ಹೊಡೆತವಾಗಲಿದೆ ಎಂದರು. ರೈತರ ಹಿತಾಸಕ್ತಿಗೆ ಧಕ್ಕೆ ತರುವ ಯಾವುದೇ ತಿದ್ದುಪಡಿಗಳನ್ನು ಸರ್ಕಾರ ಹಿಂಪಡೆಯಬೇಕು. ರೈತರ ಒಪ್ಪಿಗೆ ಇಲ್ಲದೆ ಭೂಸ್ವಾಧೀನ ಪ್ರಕ್ರಿಯೆ ಕೈಗೊಳ್ಳಬಾರದು ಎಂಬುದು ಹೋರಾಟದ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.

ಪ್ರಮುಖ ಹಕ್ಕೊತ್ತಾಯಗಳು: ಹೋರಾಟದ ಮೂಲಕ ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಮಂಡಿಸಲಾಗುತ್ತಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಗರ್ ಹುಕ್ಕುಂ ಸಾಗುವಳಿದಾರರಿಗೆ ಹಕ್ಕುಪತ್ರ ಮಂಜೂರು ಮಾಡಬೇಕು. ರಾಷ್ಟ್ರೀಕೃತ ಬ್ಯಾಂಕ್ಗಳು ರೈತರಿಗೆ ಸಾಲ ವಸೂಲಾತಿ ನೋಟಿಸ್ ನೀಡುವುದನ್ನು ನಿಲ್ಲಿಸಿ ಮಾನವೀಯ ದೃಷ್ಟಿಕೋನದಿಂದ ನಡೆದುಕೊಳ್ಳಬೇಕು. ಬಿತ್ತನೆ ಹಂಗಾಮಿನ ಸಂದರ್ಭದಲ್ಲಿ ಗೊಬ್ಬರ ಹಾಗೂ ಗುಣಮಟ್ಟದ ಬೀಜಗಳ ಕೊರತೆ ಉಂಟಾಗದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ ಕನಿಷ್ಠ ೧೫ ಗಂಟೆಗಳ ನಿರಂತರ ಮತ್ತು ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದರು. ಇದರ ಜೊತೆಗೆ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿ, ಬೆಳೆ ನಷ್ಟಕ್ಕೆ ಸಮರ್ಪಕ ಪರಿಹಾರ, ನೀರಾವರಿ ಯೋಜನೆಗಳ ಅನುಷ್ಠಾನ, ರೈತರಿಗೆ ಸಾಮಾಜಿಕ ಭದ್ರತೆ ಹಾಗೂ ಕೃಷಿ ಭೂಮಿಯ ರಕ್ಷಣೆಗೆ ಸ್ಪಷ್ಟ ನೀತಿ ರೂಪಿಸುವಂತೆ ಆಗ್ರಹಿಸಿದರು. ಚಿಕ್ಕಬಳ್ಳಾಪುರದ ಜಿಲ್ಲಾಧಿಕಾರಿ ಕಚೇರಿಯಿಂದ ಆರಂಭವಾಗಲಿರುವ ಬೃಹತ್ ಬೈಕ್ ರ್ಯಾಲಿಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸುಮಾರು ೧೦ ಸಾವಿರಕ್ಕೂ ಹೆಚ್ಚು ರೈತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ನಂತರ ವಿಧಾನಸೌಧದತ್ತ ಮೆರವಣಿಗೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಬೇಡಿಕೆಗಳಿಗೆ ಸ್ಪಂದನೆ ದೊರೆಯದಿದ್ದರೆ ರಾಜ್ಯಾದ್ಯಂತ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆಯನ್ನು ನೀಡಿದರು. ರೈತರ ಭೂಮಿ, ಬದುಕು ಮತ್ತು ಕೃಷಿಯ ಭವಿಷ್ಯವನ್ನು ಉಳಿಸುವ ಹೋರಾಟ ಇದಾಗಿದ್ದು, ಪಕ್ಷಾತೀತವಾಗಿ ರೈತ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡರು ಮನವಿ ಮಾಡಿದರು.