ರಾಜ್ಯದಲ್ಲಿ ಬರಗಾಲ ಇದೆ ಎಂಬುದನ್ನು ಈಗಾಗಲೇ ಸರ್ಕಾರ ಘೋಷಣೆ ಮಾಡಿದೆ. ಬೆಳೆ ಹಾಳಾಗಿದ್ದು ಸರ್ಕಾರ ರೈತರಿಗೆ ಬರ ಪರಿಹಾರ ನೀಡುತ್ತಿದೆ. ಇಂತಹ ಸಂದರ್ಭದಲ್ಲಿ ಮೈಕ್ರೋ ಫೈನಾನ್ಸ್ ಹಾಗೂ ಇತರ ಬ್ಯಾಂಕುಗಳು ರೈತರಿಂದ ಬಲವಂತವಾಗಿ ಹಣ ವಸೂಲಿ ಮಾಡುತ್ತಿದ್ದು ಈ ಬಗ್ಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕೆಂದು ರೈತ ಸಂಘದ ಪದಾಧಿಕಾರಿಗಳು ತಹಸೀಲ್ದಾರ್ ಗೆ ಮನವಿ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ಕುಣಿಗಲ್ ರಾಜ್ಯದಲ್ಲಿ ಬರಗಾಲ ಇದೆ ಎಂಬುದನ್ನು ಈಗಾಗಲೇ ಸರ್ಕಾರ ಘೋಷಣೆ ಮಾಡಿದೆ. ಬೆಳೆ ಹಾಳಾಗಿದ್ದು ಸರ್ಕಾರ ರೈತರಿಗೆ ಬರ ಪರಿಹಾರ ನೀಡುತ್ತಿದೆ. ಇಂತಹ ಸಂದರ್ಭದಲ್ಲಿ ಮೈಕ್ರೋ ಫೈನಾನ್ಸ್ ಹಾಗೂ ಇತರ ಬ್ಯಾಂಕುಗಳು ರೈತರಿಂದ ಬಲವಂತವಾಗಿ ಹಣ ವಸೂಲಿ ಮಾಡುತ್ತಿದ್ದು ಈ ಬಗ್ಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕೆಂದು ರೈತ ಸಂಘದ ಪದಾಧಿಕಾರಿಗಳು ತಹಸೀಲ್ದಾರ್ ಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಆನಂದ್ ಪಟೀಲ್ ಹುಲಿಕಟ್ಟೆ ಬ್ಯಾಂಕುಗಳು ಮತ್ತು ಮೈಕ್ರೋ ಫೈನಾನ್ಸ್ ಮರುಪಾವತಿ ಹೆಸರಿನಲ್ಲಿ ರೈತರಿಗೆ ನೋಟಿಸ್ ನೀಡುವುದು ಅವರ ಮನೆ ಬಳಿ ತೆರಳಿ ಬಲವಂತವಾಗಿ ಹಣವನ್ನು ವಸೂಲಿ ಮಾಡುವುದು ಆವಾಚ್ಯ ಶಬ್ದಗಳಿಂದ ನಿಂದಿಸುವುದು ಹಾಗೂ ಮಾನಸಿಕ ಕಿರುಕುಳ ನೀಡುತ್ತಿರುವ ಘಟನೆ ನಿರಂತರವಾಗಿ ನಡೆಯುತ್ತಿವೆ. ಈಗಾಗಲೇ ಕೃಷಿ ಚಟುವಟಿಕೆಯಲ್ಲಿ ನಷ್ಟ ಅನುಭವಿಸಿರುವ ರೈತ ಬ್ಯಾಂಕ್ ಹಾಗೂ ಮೈಕ್ರೋ ಫೈನಾನ್ಸ್ ನವರು ನೀಡುವ ಕಿರುಕುಳದಿಂದ ಬೇಸತ್ತು ಮಾನಸಿಕ ಒತ್ತಡ ಹೆಚ್ಚಾಗಿ ಪ್ರಾಣ ಹಾನಿಯಂತಹ ಕೆಲಸಗಳಿಗೆ ಮುಂದಾಗಬಹುದು ಎಂದು ಎಚ್ಚರಿಸಿದರು. ಕುಣಿಗಲ್ ತಾಲೂಕಿನಲ್ಲಿ ಇರುವಂತಹ ಮೈಕ್ರೋಫೈನಾನ್ಸ್ ಹಾಗೂ ಬ್ಯಾಂಕ್ ಮ್ಯಾನೇಜರ್ಗಳ ಸಭೆ ಕರೆದು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿ ಬಲವಂತವಾಗಿ ಹಣ ವಸೂಲಿ ಮಾಡದಂತೆ ಸೂಚಿಸಬೇಕೆಂದರು. ಈ ಸಂದರ್ಭದಲ್ಲಿ ಹಲವಾರು ರೈತರು ಹಾಗೂ ಸಂಘಟನೆಯ ಪದಾಧಿಕಾರಿಗಳು ಇದ್ದರು. ಮನವಿ ಸ್ವೀಕರಿಸಿ ಮಾತನಾಡಿದ ತಹಸೀಲ್ದಾರ್ ಕರಿಯಾ ನಾಯಕ್ ಈ ಸಂಬಂಧ ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದು ಜಿಲ್ಲಾಧಿಕಾರಿಗಳಿಗೆ ಸೂಕ್ತ ಕ್ರಮ ವಹಿಸಲು ಬರೆಯುವುದಾಗಿ ಭರವಸೆ ನೀಡಿದರು.