ಸಾರಾಂಶ
ಜಿಲ್ಲಾಡಳಿತ ಭವನದ ಪ್ರವೇಶ ದ್ವಾರದ ಬಳಿಯೇ ರೈತರು ಅಡುಗೆ ಸಿದ್ಧಪಡಿಸಿ ಊಟ ಮಾಡಿದರು.
ಕನ್ನಡಪ್ರಭ ವಾರ್ತೆ ಹಾವೇರಿ
ಬರಗಾಲದಿಂದ ಬೆಳೆ ಕಳೆದುಕೊಂಡಿರುವ ರೈತರಿಗೆ ಎಕರೆಗೆ ₹೨೫ ಸಾವಿರ ಪರಿಹಾರ, ಬೆಳೆ ವಿಮೆ, ಹೊಸ ವಿದ್ಯುತ್ ಸಂಪರ್ಕ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದಿಂದ ಜಿಲ್ಲಾಡಳಿತ ಭವನದ ಎದುರು ಆರಂಭಗೊಂಡಿರುವ ಅಹೋರಾತ್ರಿ ಧರಣಿ ಮುಂದುವರಿದಿದ್ದು, ೩ನೇ ದಿನಕ್ಕೆ ಕಾಲಿಟ್ಟಿದೆ.ಜಿಲ್ಲಾಡಳಿತ ಭವನದ ಪ್ರವೇಶ ದ್ವಾರದ ಬಳಿಯೇ ರೈತರು ಅಡುಗೆ ಸಿದ್ಧಪಡಿಸಿ ಊಟ ಮಾಡಿದರು. ಎರಡನೇ ದಿನದ ಹೋರಾಟದಲ್ಲಿ ಹಾವೇರಿ ತಾಲೂಕಿನ ರೈತರು ಪಾಲ್ಗೊಂಡು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.
ಈ ವೇಳೆ ರೈತ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ಮಾತನಾಡಿ, ಬೆಳೆ ನಾಶಗೊಂಡು ರೈತರು ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದರಿಂದ ಪರಿಹಾರ ಕೇಳಿದರೆ ಕೇಂದ್ರದ ಕಡೆ ರಾಜ್ಯ, ರಾಜ್ಯದ ಕಡೆ ಕೇಂದ್ರ ಸರ್ಕಾರ ಬೆರಳು, ತೋರಿಸುತ್ತಾ ಕಾಲಹರಣ ಮಾಡುತ್ತಿವೆ. ಮುಂಗಾರು, ಹಿಂಗಾರು ಹಂಗಾಮಿನಲ್ಲಿ ಮಳೆ ಕೈಕೊಟ್ಟಿದ್ದರಿಂದ ಬೆಳೆಬಾರದಂತಾಗಿ ಮನನೊಂದು ರೈತರು ಆತ್ಮಹತ್ಯೆ ದಾರಿ ಹಿಡಿಯುವಂತಾಗಿದೆ. ಬರಗಾಲ ಎಂದು ಘೋಷಿಸಿ ೩ ತಿಂಗಳಾದರೂ ಎಚ್ಚೆತ್ತುಕೊಳ್ಳದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ನಡೆಯು ನಾಚಿಕೆ ಪಡುವಂತಾಗಿದೆ. ಕೂಡಲೇ ಎಚ್ಚೆತ್ತುಕೊಂಡು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ನಿಯಮದಡಿ ಪ್ರತಿ ಎಕರೆಗೆ ₹೨೫ ಸಾವಿರ ಬೆಳೆ ನಷ್ಟ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದರು.ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿದರು.
ರೈತ ಮುಖಂಡರಾದ ಮಾಲತೇಶ ಪೂಜಾರ, ಗಂಗಣ್ಣ ಎಲಿ, ಭುವನೇಶ್ವರ ಶಿಡ್ಲಾಪೂರ, ಶಿವಬಸಪ್ಪ ಗೋವಿ, ಮಹಮ್ಮದ್‌ಗೌಸ ಪಾಟೀಲ, ರುದ್ರಗೌಡ ಕಾಡನಗೌಡ್ರ, ದಿಳ್ಳೆಪ್ಪ ಮಣ್ಣೂರ, ಶಿವಯೋಗಿ ಹೊಸಗೌಡ್ರ, ರಾಜು ತರ್ಲಗಟ್ಟ, ಮುತ್ತಣ್ಣ ಗುಡಗೇರಿ, ಚನ್ನಪ್ಪ ಮರಡೂರ, ಮಾಲತೇಶ ಬಾರ್ಕೆರ, ಮಂಜು ಸಿದ್ದನಗೌಡ್ರ ಇತರರು ಪಾಲ್ಗೊಂಡಿದ್ದರು.