ಸಾರಾಂಶ
ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅವರ ಭೂಪಸಂದ್ರದ ನಿವಾಸದ ಮುಂದೆ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ನೂರಾರು ರೈತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಬೆಂಗಳೂರು
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು (ಕೆಐಎಡಿಬಿ) ಬಲವಂತವಾಗಿ ಭೂಸ್ವಾಧೀನ ನಡೆಸುತ್ತಿದೆ ಎಂದು ಆರೋಪಿಸಿ ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅವರ ಭೂಪಸಂದ್ರದ ನಿವಾಸದ ಮುಂದೆ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ನೂರಾರು ರೈತರು ಶುಕ್ರವಾರ ಪ್ರತಿಭಟನೆ ನಡೆಸಿದರು.ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೆಐಎಡಿಬಿಯು ಬಲವಂತದ ಹಾಗೂ ಅವೈಜ್ಞಾನಿಕ ಭೂಸ್ವಾಧೀನ ಪ್ರಕ್ರಿಯೆ ಮಾಡಲು ಮುಂದಾಗಿದ್ದು ತಕ್ಷಣ ಇದನ್ನು ಕೈಬಿಡಬೇಕು. ಈಗಾಗಲೇ ಚನ್ನರಾಯಪಟ್ಟಣ ನಾಡ ಕಚೇರಿ ಎದುರು ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ 901 ದಿನಕ್ಕೆ ಕಾಲಿಟ್ಟಿದ್ದರೂ ಸಚಿವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಜನವಾದಿ ಮಹಿಳಾ ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿ, ರೈತ ಮುಖಂಡರಾದ ಚಂದ್ರ ತೇಜಸ್ವಿ, ಎನ್.ಪ್ರಭಾ ಬೆಳವಂಗಲ, ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಪ್ರಮುಖರಾದ ಕಾರಹಳ್ಳಿ ಶ್ರೀನಿವಾಸ್, ನಂಜಪ್ಪ, ಪ್ರಮೋದ್, ರಮೇಶ್, ಗೋಪಿ, ಅಶ್ವಥಪ್ಪ, ಮಾರೇಗೌಡ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು ಬೇಡಿಕೆ ಈಡೇರದೆ ಪ್ರತಿಭಟನಾ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ಪಟ್ಟು ಹಿಡಿದರು.ನಾಡಿದ್ದು ಸಿಎಂ ಜೊತೆ ಸಭೆ
ಸೆ.23ರಂದು ಮಧ್ಯಾಹ್ನ 3 ಗಂಟೆಗೆ ರೈತರ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಭೆ ಆಯೋಜಿಸುವುದಾಗಿ ಸಚಿವ ಮುನಿಯಪ್ಪ ಅವರು ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ.
-ಟಿ.ಯಶವಂತ, ರಾಜ್ಯ ಪ್ರಧಾನ ಕಾರ್ಯದರ್ಶಿ, ರೈತ ಸಂಘ.