ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಒತ್ತಾಯಿಸಿ ರೈತರ ಪ್ರತಿಭಟನೆ

| Published : Nov 19 2025, 01:30 AM IST

ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಒತ್ತಾಯಿಸಿ ರೈತರ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ವಿಜಯನಗರ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆದು ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ಹೊಸಪೇಟೆ: ವಿಜಯನಗರ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆದು ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ (ವಾಸುದೇವ ಮೇಟಿ ಬಣ)ಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ನಗರದ ಸಾಯಿಬಾಬಾ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.

ಈ ವೇಳೆ ರೈತ ಸಂಘದ ಜಿಲ್ಲಾಧ್ಯಕ್ಷ ಸಿ.ಎ. ಗಾಳೆಪ್ಪ ಮಾತನಾಡಿ, ಈ ಬಾರಿ ಜಿಲ್ಲೆಯಲ್ಲಿ ರೈತರು ಹೆಚ್ಚಿನ ಪ್ರಮಾಣದಲ್ಲಿ ಮೆಕ್ಕೆಜೋಳ ಬೆಳೆದಿದ್ದಾರೆ. ಆದರೆ, ರೈತರಿಗೆ ಉತ್ತಮ ಬೆಲೆ ದೊರೆಯುತ್ತಿಲ್ಲ. ಮಧ್ಯವರ್ತಿಗಳು ಖರೀದಿ ಮಾಡುತ್ತಿದ್ದಾರೆ. ದರ ವ್ಯತ್ಯಾಸ ಆಗುತ್ತಿದೆ. ಹಾಗಾಗಿ ಜಿಲ್ಲೆಯ ಎಲ್ಲ ತಾಲೂಕು ಮತ್ತು ಹೋಬಳಿ ಕೇಂದ್ರಗಳಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆದು ಪ್ರತಿ ಕ್ವಿಂಟಲ್‌ಗೆ ₹2700 ದರ ನೀಡಬೇಕು. ರೈತರ ಸಮಸ್ಯೆಗೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲೆಯಲ್ಲಿ ಕಳೆದ 50-60 ವರ್ಷಗಳಿಂದ ರೈತರು ಬಗರ್‌ ಹುಕುಂ ಸಾಗುವಳಿದಾರರಾಗಿ ಉಳುಮೆ ಮಾಡುತ್ತಿದ್ದಾರೆ. ಈ ರೈತರಿಗೆ ಪಟ್ಟಾ ನೀಡಬೇಕು. ರೈತರಿಗೆ ಜಮೀನಿನ ಹಕ್ಕುಪತ್ರಗಳನ್ನು ನೀಡಬೇಕು. ಬಡ ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಬೇಕು. ಜಿಲ್ಲಾಡಳಿತ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿ 5ರಿಂದ 6 ಲಕ್ಷ ಟನ್‌ ಕಬ್ಬು ರೈತರು ಬೆಳೆಯುತ್ತಿದ್ದಾರೆ. ರೈತರಿಗೆ ಪ್ರತಿ ಟನ್‌ ಕಬ್ಬಿಗೆ ₹3500 ದರ ನಿಗದಿ ಮಾಡಬೇಕು. ರೈತರನ್ನು ಸಂಕಷ್ಟದಿಂದ ಪಾರು ಮಾಡಬೇಕು. ರೈತರ ಸಂಕಷ್ಟಕ್ಕೆ ಸರ್ಕಾರ ಕೂಡಲೇ ಸ್ಪಂದಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿ ಟನ್‌ ಕಬ್ಬಿಗೆ ₹3500 ದರ ನೀಡಬೇಕು. ರೈತರ ಸಮಸ್ಯೆಗೆ ಸರ್ಕಾರ ಸ್ಪಂದಿಸಬೇಕು ಎಂದರು.

ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಮನವಿ ಸ್ವೀಕರಿಸಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

ರೈತ ಮುಖಂಡರಾದ ಮಂಜುನಾಥ, ಸಿ.ರೇಖಾ, ರತ್ನಮ್ಮ, ಕಲಾವತಿ, ಪರಶುರಾಮ, ಪ್ರಭು, ನಾಗಪ್ಪ, ಹುಲಿಗೆಮ್ಮ, ಹನುಮಕ್ಕ, ಮಂಜಮ್ಮ, ನಾಗಮ್ಮ, ರೇಣುಕಮ್ಮ, ಈರಮ್ಮ, ಬಸವರಾಜ, ನಾಗರಾಜ, ಅಂಜಿನಿ, ಸಣ್ಣಜ್ಜ, ಸುರೇಶ ಮತ್ತಿತರರಿದ್ದರು.