ಕಬ್ಬಿಗೆ ₹5500 ದರನಿಗದಿಗೊಳಿಸಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಶನಿವಾರ ಕರೆ ನೀಡಿದ್ದ ಕರ್ನಾಟಕ ಬಂದ್ ಕರೆಗೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಜಿಲ್ಲೆಯ ವಿವಿಧೆಡೆ ರಾಷ್ಟ್ರೀಯ, ರಾಜ್ಯ ಹೆದ್ದಾರಿ ಹಾಗೂ ರಸ್ತೆಗಳನ್ನು ತಡೆದು ಪ್ರತಿಭಟನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಕಬ್ಬಿಗೆ ₹5500 ದರನಿಗದಿಗೊಳಿಸಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಶನಿವಾರ ಕರೆ ನೀಡಿದ್ದ ಕರ್ನಾಟಕ ಬಂದ್ ಕರೆಗೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಜಿಲ್ಲೆಯ ವಿವಿಧೆಡೆ ರಾಷ್ಟ್ರೀಯ, ರಾಜ್ಯ ಹೆದ್ದಾರಿ ಹಾಗೂ ರಸ್ತೆಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಹಲವು ನಗರ, ಪಟ್ಟಣಗಳಲ್ಲಿ ಅಂಗಡಿ-ಮುಂಗಟ್ಟು ಬಂದ್ ಮಾಡಲಾಗಿತ್ತು. ವಾಹನ ಸಂಚಾರ ಸಂಪೂರ್ಣ ಬಂದ್ ಆಗಿತ್ತು.ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ್ದರಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು. ರಸ್ತೆಗಳ ಮೇಲೆ ಅಲ್ಲಲ್ಲಿ ಮುಳ್ಳಿನ ಕಂಟಿಗಳನ್ನು ಹಾಕಿ ರೈತರು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಲೋಕಾಪುರ, ಕುಳಗೇರಿ ಕ್ರಾಸ್, ಚಿಕ್ಕಲಗಿ ಕ್ರಾಸ್, ಹೊಸೂರ ಕ್ರಾಸ್, ಜಮಖಂಡಿ, ಬನಹಟ್ಟಿ, ತೇರದಾಳ, ಹಿರೇಮಾಗಿ ಕ್ರಾಸ್, ಕೆರೂರ, ಬೀಳಗಿ, ಮಹಾಲಿಂಗಪುರ, ಮುಧೋಳ, ಗದ್ದನಕೇರಿ ಕ್ರಾಸ್, ಇಳಕಲ್ ಭಾಗದಲ್ಲಿ ರಸ್ತೆಗಳನ್ನು ಬಂದ್ ಮಾಡಲಾಗಿತ್ತು. ಅಹಿತಕರ ಘಟನೆಗಳು ಜರುಗದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.