ಹನುಮಸಾಗರ ಪಟ್ಟಣದಲ್ಲಿ ಕೆರೆ ತುಂಬಿಸುವ ಯೋಜನೆ ಅನುಷ್ಠಾನದಲ್ಲಿ ಆಗುತ್ತಿರುವ ವಿಳಂಬ ನೀತಿ ಖಂಡಿಸಿ ಹಾಗೂ ಕುಷ್ಟಗಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮಂಗಳವಾರ ಪಟ್ಟಣದಲ್ಲಿ ರ‍್ಯಾಲಿ ನಡೆಸಲಾಯಿತು.

ಹನುಮಸಾಗರ: ಪಟ್ಟಣದಲ್ಲಿ ಕೆರೆ ತುಂಬಿಸುವ ಯೋಜನೆ ಅನುಷ್ಠಾನದಲ್ಲಿ ಆಗುತ್ತಿರುವ ವಿಳಂಬ ನೀತಿ ಖಂಡಿಸಿ ಹಾಗೂ ಕುಷ್ಟಗಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮಂಗಳವಾರ ಪಟ್ಟಣದಲ್ಲಿ ರ್ಯಾಲಿ ನಡೆಸಲಾಯಿತು.

ಪಟ್ಟಣದ ಗ್ರಾಮದೇವತೆ ದೇವಸ್ಥಾನದಲ್ಲಿ ಮಂಗಳವಾರ ಬೆಳಗ್ಗೆ 10.30ಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಲಾಯಿತು. ಬಳಿಕ ಗ್ರಾಮದೇವತೆ ದೇವಸ್ಥಾನದಿಂದ ನೂರಾರು ರೈತರು ಪ್ರತಿಭಟನಾ ಮೆರವಣಿಗೆ ಆರಂಭಿಸಿ, ಸರ್ಕಾರದ ವಿರುದ್ಧ ಹಾಗೂ ಕೆರೆ ತುಂಬಿಸುವ ಯೋಜನೆಯ ವಿಳಂಬದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದರು.

ಪ್ರತಿಭಟನಾಕಾರರು ಕನಕದಾಸ ವೃತ್ತ, ಭವಾನಿ ವೃತ್ತ, ಹಳೆ ಬಸ್ ನಿಲ್ದಾಣ ಹಾಗೂ ಗೂಳಿಬಸವೇಶ್ವರ ವೃತ್ತದ ಮೂಲಕ ಮೆರವಣಿಗೆ ನಡೆಸಿ, ಕೊನೆಗೆ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದರು. ಈ ವೇಳೆ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ್ದ ರೈತರು ಪ್ರತಿಭಟನೆಗೆ ಕೈಜೋಡಿಸಿ, ಸರ್ಕಾರ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ನೂರಾರು ರೈತರು ಪಾಲ್ಗೊಂಡಿದ್ದರಿಂದ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಕೆಲಕಾಲ ಜನದಟ್ಟಣೆ ಉಂಟಾಯಿತು. ರೈತರ ಹೋರಾಟಕ್ಕೆ ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ಬೆಂಬಲ ವ್ಯಕ್ತಪಡಿಸಿದರು.

ಬಂದ್‌ಗೆ ಬೆಂಬಲ, ಅಂಗಡಿ ಬಂದ್‌: ಕೆರೆ ತುಂಬಿಸುವ ಯೋಜನೆ ವಿಳಂಬ ಖಂಡಿಸಿ ಹಾಗೂ ಕುಷ್ಟಗಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕರೆ ನೀಡಿದ್ದ ಪ್ರತಿಭಟನೆ ಹಿನ್ನೆಲೆಯಲ್ಲಿ ಮಂಗಳವಾರ ಪಟ್ಟಣದಲ್ಲಿ ಬೆಳಗ್ಗೆ 10 ಗಂಟೆ ಬಳಿಕ ಬಹುತೇಕ ಅಂಗಡಿ-ಮುಂಗಟ್ಟುಗಳು ಬಂದ್ ಆಗಿದ್ದವು.

ದವಾಖಾನೆ, ಔಷಧ ಅಂಗಡಿ ಹಾಗೂ ತರಕಾರಿ ಅಂಗಡಿಗಳು ಎಂದಿನಂತೆ ತೆರೆದಿದ್ದವು. ಸಂಜೆ 4 ಗಂಟೆ ಬಳಿಕ ಬಹುತೇಕ ಅಂಗಡಿ-ಮುಂಗಟ್ಟುಗಳು ಪುನಃ ತೆರೆದವು. ಪ್ರತಿಭಟನೆಯಲ್ಲಿ ಹನುಮಸಾಗರ ಸೇರಿದಂತೆ ವಿವಿಧ ಗ್ರಾಮಗಳ ನೂರಾರು ರೈತರು ಭಾಗವಹಿಸಿದ್ದರು.