ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯನಿರ್ವಹಿಸುತ್ತಿಲ್ಲ ಎಂಬ ದೂರುಗಳಿದ್ದು, ಅಂತಹ ಘಟಕಗಳನ್ನು ತಕ್ಷಣ ಪರಿಶೀಲಿಸಿ ದುರಸ್ತಿಗೊಳಿಸಬೇಕು.
ಹೊಸಪೇಟೆ: ಜಿಲ್ಲೆಯಲ್ಲಿ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಜತೆಗೆ ಬರ ಪರಿಹಾರ ವಿತರಣೆಯಲ್ಲಿ ಯಾವುದೇ ರೈತರಿಗೆ ಅನ್ಯಾಯವಾಗದಂತೆ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಅರ್ಹ ಫಲಾನುಭವಿಗಳಿಗೆ ನಿಯಮಾನುಸಾರ ಹಾಗೂ ಪಾರದರ್ಶಕವಾಗಿ ಪರಿಹಾರ ತಲುಪಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಜಿಲ್ಲಾ ಬರ ನಿರ್ವಹಣೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯನಿರ್ವಹಿಸುತ್ತಿಲ್ಲ ಎಂಬ ದೂರುಗಳಿದ್ದು, ಅಂತಹ ಘಟಕಗಳನ್ನು ತಕ್ಷಣ ಪರಿಶೀಲಿಸಿ ದುರಸ್ತಿಗೊಳಿಸಬೇಕು. ಪ್ರತಿ ಗ್ರಾಮ ಪಂಚಾಯಿತಿಗೆ ಶುದ್ಧ ನೀರಿನ ಘಟಕಗಳ ನಿರ್ವಹಣೆಗಾಗಿ ತಲಾ ₹ 36000 ಬಿಡುಗಡೆ ಮಾಡಲಾಗಿದೆ. ಆದರೆ ಪಂಚಾಯಿತಿಯಿಂದ ದುರಸ್ತಿ ಹೆಸರಿನಲ್ಲಿ ಅನುದಾನ ದುರ್ಬಳಕೆಯಾದರೆ ಸಹಿಸುವುದಿಲ್ಲ. ಇಂತಹ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಕಂಡು ಬಂದರೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಏಜೆನ್ಸಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.ಕಳೆದ ವರ್ಷಕ್ಕೆ ಹೋಲಿಸಿದರೆ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ 7 ಮೀಟರ್ ಕುಸಿದಿದ್ದು, ಹರಪನಹಳ್ಳಿ, ಕೊಟ್ಟೂರು ಹಾಗೂ ಹಗರಿಬೊಮ್ಮನಹಳ್ಳಿ ತಾಲೂಕುಗಳಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ 153 ಗ್ರಾಮಗಳನ್ನು ಸಮಸ್ಯಾತ್ಮಕ ಗ್ರಾಮಗಳೆಂದು ಗುರುತಿಸಲಾಗಿದೆ. ಬರದ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಈಗಿನಿಂದಲೇ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಲಭ್ಯವಿರುವ ₹ 9 ಕೋಟಿ ಅನುದಾನವನ್ನು ಅಗತ್ಯಕ್ಕೆ ಅನುಗುಣವಾಗಿ ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಪ್ರಸ್ತುತ 37 ವಾರಗಳಿಗೆ ಸಾಕಾಗುವಷ್ಟು ಮೇವು ಲಭ್ಯವಿದೆ. ಆದರೂ ಕೂಡ್ಲಿಗಿ ತಾಲೂಕಿನಲ್ಲಿ ದೇವರ ಎತ್ತುಗಳ ಸಂಖ್ಯೆ ಹೆಚ್ಚಿರುವುದರಿಂದ ಮೇವಿನ ಕೊರತೆ ಉಂಟಾಗುತ್ತಿದೆ ಎಂಬ ದೂರುಗಳಿವೆ. ಈ ಸಮಸ್ಯೆ ನಿವಾರಿಸಲು ಜಿಲ್ಲೆಯಲ್ಲಿ ಲಭ್ಯವಿರುವ ಸರ್ಕಾರಿ ಜಮೀನುಗಳನ್ನು ಗುರುತಿಸಿ, ಕೊಳವೆಬಾವಿ ಕೊರೆಸುವ ಮೂಲಕ ಮೇವು ಬಿತ್ತನೆಗೆ ಕ್ರಮಕೈಗೊಳ್ಳಬೇಕು. ಪಾಳುಬಿದ್ದಿರುವ ಸರ್ಕಾರಿ ಜಮೀನುಗಳನ್ನು ಮೇವು ಬೆಳೆಯಲು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಜಿಲ್ಲೆಯಲ್ಲಿ ಬೆಳೆಯುವ ಮೇವನ್ನು ಬೇರೆ ಜಿಲ್ಲೆಗಳಿಗೆ ಸಾಗಿಸುವುದನ್ನು ನಿಯಂತ್ರಿಸುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಸ್ಥಳೀಯವಾಗಿ ಲಭ್ಯವಿರುವ ಮೇವನ್ನು ಜಿಲ್ಲೆಯ ಜಾನುವಾರುಗಳ ಅಗತ್ಯಕ್ಕೆ ಬಳಸಿಕೊಳ್ಳಲು ಕ್ರಮವಹಿಸಬೇಕು, ಇಲ್ಲಿನ ಬೇಡಿಕೆ ಕಡಿಮೆ ಇದ್ದಲ್ಲಿ ಬೇರೆ ಜಿಲ್ಲೆಗೆ ನೀಡಬಹುದು ಎಂದರು.ಮೆಕ್ಕೆಜೋಳವನ್ನು ಪಡಿತರ ವಿತರಣಾ ವ್ಯವಸ್ಥೆಯ ವ್ಯಾಪ್ತಿಗೆ ತರುವ ಜತೆಗೆ ಸೂಕ್ತ ಬೆಂಬಲ ಬೆಲೆ ನಿಗದಿಪಡಿಸಿದರೆ ರೈತರಿಗೆ ಅನುಕೂಲವಾಗಲಿದೆ. ಆಡಳಿತಾತ್ಮಕವಾಗಿ ಯಾವುದೇ ಸಮಸ್ಯೆಗಳು ಎದುರಾದಲ್ಲಿ ಮೇಲಧಿಕಾರಿಗಳ ಸಲಹೆ ಮತ್ತು ಮಾರ್ಗದರ್ಶನ ಪಡೆದು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಎಲ್ಲ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ತಂಡವಾಗಿ ಕೆಲಸ ಮಾಡುವ ಮೂಲಕ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸಿದ್ಧರಾಗಬೇಕು ಎಂದು ಸಚಿವರು ತಿಳಿಸಿದರು.
ಜಿಲ್ಲೆಯಲ್ಲಿ ತೀವ್ರ ಬರಗಾಲ ಆವರಿಸಿದ್ದರೂ, ರೈತರು ಕೆಲವು ಪ್ರದೇಶಗಳಲ್ಲಿ ಅಕ್ಕಪಕ್ಕದ ಕೊಳವೆಬಾವಿಗಳ ಮೂಲಕ ನೀರು ಹಾಯಿಸಿ ಬೆಳೆ ಬೆಳೆದಿದ್ದಾರೆ. ಇದನ್ನೇ ನೆಪವಾಗಿಟ್ಟುಕೊಂಡು ಅಂತಹ ಪ್ರದೇಶದ ರೈತರನ್ನು ಬರ ಪರಿಹಾರದಿಂದ ಕೈಬಿಡಬಾರದು. ಒಂದು ವೇಳೆ ಕೈಬಿಟ್ಟರೆ ರೈತ ಕುಟುಂಬಗಳಿಗೆ ಅನ್ಯಾಯವಾಗುವ ಸಾಧ್ಯತೆಯಿದೆ ಎಂದು ಶಾಸಕರಾದ ಕೃಷ್ಣನಾಯಕ ಮತ್ತು ಕೆ. ನೇಮಿರಾಜ ನಾಯ್ಕ ಆತಂಕ ವ್ಯಕ್ತಪಡಿಸಿದರು.ಸಭೆಯಲ್ಲಿ ಶಾಸಕರಾದ ಎಚ್.ಆರ್. ಗವಿಯಪ್ಪ, ಕೆ. ನೇಮಿರಾಜ ನಾಯ್ಕ, ಕೃಷ್ಣ ನಾಯಕ, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಪಂ ಸಿಇಒ ಗರಿಮಾ ಪನ್ವಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.