ರೈತರೇ ರಾಸಾಯನಿಕ ಮುಕ್ತ, ಸಾವಯವ ಕೃಷಿಗೆ ಮರಳಿ: ವಿ.ಎಸ್.ಅಶೋಕ್

| Published : Aug 11 2025, 12:30 AM IST

ಸಾರಾಂಶ

ರೈತರು ಕೃಷಿ ಅಧಿಕಾರಿಗಳು ಶಿಫಾರಸ್ಸು ಮಾಡಿರುವ ಸಮತೋಲನ ರಸಗೊಬ್ಬರ ಬಳಕೆ ಮಾಡಬೇಕು. ಜೊತೆಗೆ ಸಾವಯವ ಗೊಬ್ಬರ, ಹಸಿರೆಲೆ ಗೊಬ್ಬರ, ಕೊಟ್ಟಿಗೆ ಗೊಬ್ಬರ ಬಳಕೆಯನ್ನು ಹೆಚ್ಚಿಸಬೇಕು. ಈ ಮೂಲಕ ಆಹಾರದ ಗುಣಮಟ್ಟ ಕಾಪಾಡುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಆರೋಗ್ಯವಂತ ಸಮಾಜ ನಿಮಾಣಕ್ಕಾಗಿ ರೈತರು ರಾಸಾಯನಿಕ ಮುಕ್ತ ಸಾವಯವ ಕೃಷಿಗೆ ಮರಳುವಂತೆ ಕೃಷಿ ಇಲಾಖೆ ಜಿಲ್ಲಾ ಜಂಟಿ ನಿರ್ದೇಶಕ ವಿ.ಎಸ್.ಅಶೋಕ್ ಕರೆ ನೀಡಿದರು.

ಪಟ್ಟಣದ ಟಿಎಪಿಸಿಎಂಎಸ್ ಸಂಸ್ಥೆ ಎಸ್.ಎಂ.ಲಿಂಗಪ್ಪ ಸಹಕಾರ ಭವನದಲ್ಲಿ ತಾಲೂಕು ಕೃಷಿ ಇಲಾಖೆಯಿಂದ ನಡೆದ ರಸಗೊಬ್ಬರ ಹಾಗೂ ಕೀಟನಾಶಕಗಳ ಸಮರ್ಪಕ ನಿರ್ವಹಣೆ ಹಾಗೂ ಯೂರಿಯಾ ರಸಗೊಬ್ಬರವನ್ನು ಕೃಷಿಯೇತರ ಚಟುವಟಿಕೆಗಳ ಬಳಕೆಗೆ ತಡೆಗಟ್ಟುವ ಕುರಿತು ರೈತರಿಗೆ ಹಾಗೂ ರಸಗೊಬ್ಬರ ಮಾರಾಟಗಾರರಿಗೆ ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ಬೆಳೆಗಳಿಗೆ ರಸಗೊಬ್ಬರವನ್ನು ಅಗತ್ಯಕ್ಕಿಂತ ಹೆಚ್ಚು ಬಳಕೆ ಮಾಡಿದರೆ ಅದರಿಂದ ಬೆಳೆಯುವ ಆಹಾರವು ವಿಷಕಾರಕವಾಗಿ ಮನುಷನಿಗೆ ಕ್ಯಾನ್ಸರ್ ಸೇರಿದಂತೆ ಅನೇಕ ಮಾರಕ ರೋಗಗಳಿಗೆ ಕಾರಣವಾಗಲಿದೆ ಎಂದು ಎಚ್ಚರಿಸಿದರು.

ರೈತರು ಕೃಷಿ ಅಧಿಕಾರಿಗಳು ಶಿಫಾರಸ್ಸು ಮಾಡಿರುವ ಸಮತೋಲನ ರಸಗೊಬ್ಬರ ಬಳಕೆ ಮಾಡಬೇಕು. ಜೊತೆಗೆ ಸಾವಯವ ಗೊಬ್ಬರ, ಹಸಿರೆಲೆ ಗೊಬ್ಬರ, ಕೊಟ್ಟಿಗೆ ಗೊಬ್ಬರ ಬಳಕೆಯನ್ನು ಹೆಚ್ಚಿಸಬೇಕು. ಈ ಮೂಲಕ ಆಹಾರದ ಗುಣಮಟ್ಟ ಕಾಪಾಡುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ ತಡೆಗಟ್ಟಲು ಕೃಷಿ ಇಲಾಖೆ ಕಟ್ಟುನಿಟ್ಟಿನ ಕ್ರಮ ವಹಿಸಿದೆ. ತಾಲೂಕು ಆಡಳಿತ, ಪೊಲೀಸ್ ಇಲಾಖೆ, ಕೃಷಿ, ತೋಟಗಾರಿಕೆ, ಪಶುವೈದ್ಯ ಇಲಾಖೆಗಳ ಜಂಟಿ ಸಮಿತಿ ರಚನೆ ಮಾಡಿದೆ. ಯೂರಿಯಾವನ್ನು ಕೃಷಿಯೇತರ ಉದ್ದೇಶಕ್ಕೆ ಬಳಕೆ ಮಾಡಿದರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ತಹಸೀಲ್ದಾರ್ ಡಾ.ಎಸ್.ಯು.ಅಶೋಕ್ ಮಾತನಾಡಿ, ತಾಲೂಕಿನಲ್ಲಿ ಯೂರಿಯಾ ಸೇರಿದಂತೆ ಇತರೆ ರಸಗೊಬ್ಬರಗಳಿಗೆ ಯಾವುದೇ ಕೊರತೆಯಿಲ್ಲ. ರೈತರ ಬೇಡಿಕೆಗೆ ತಕ್ಕಂತೆ ರಸಗೊಬ್ಬರಗಳ ದಾಸ್ತಾನು ಇದೆ. ಇದನ್ನು ದುರ್ಬಳಕೆ ಮಾಡಿಕೊಂಡು ಮಂಡ್ಯ ಜಿಲ್ಲೆಯಲ್ಲಿ ಯಾರೂದರೂ ಕೃತಕ ಅಭಾವ ಸೃಷ್ಟಿಸಿದರೆ ಶಿಸ್ತು ಕ್ರಮ ಜರುಗಿಸಲಾಗುವುದು ರಸಗೊಬ್ಬರ ಅಂಗಡಿಗಳ ಮಾಲೀಕರಿಗೆ ಎಚ್ಚರಿಕೆ ನೀಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಕೃಷಿ ನಿರ್ದೇಶಕ ಸಂತೋಷ್ ಕುಮಾರ್, ಕೃಷಿ ತಾಂತ್ರಿಕ ಅಧಿಕಾರಿ ಶ್ರೀಧರ್, ತಾಲೂಕು ರೈತ ಸಂಘದ ಅಧ್ಯಕ್ಷ ಕಾರಿಗನಹಳ್ಳಿ ಪುಟ್ಟೇಗೌಡ, ಹೇಮಗಿರಿ ಸಕ್ಕರೆ ಕಾರ್ಖಾನೆ ಕಬ್ಬು ಅಭಿವೃದ್ಧಿ ಅಧಿಕಾರಿ ದತ್ತಾತ್ರೆಯ, ಟೌನ್ ಠಾಣೆ ಸಹಾಯಕ ಸಬ್ ಇನ್ಸ್ ಪೆಕ್ಟರ್ ಕುಮಾರ್, ಗ್ರಾಮಾಂತರ ಪೊಲೀಸ್ ಠಾಣೆ ಎಎಸ್ ಐ ಸೋಮಶೇಖರ್ ಸೇರಿದಂತೆ ತಾಲೂಕಿನ ರಸಗೊಬ್ಬರದ ಅಂಗಡಿಗಳ ಮಾಲೀಕರು, ಪ್ರಾಥಮಿಕ ಕೃಷಿ ಮತ್ತಿನ ಸಹಕಾರ ಸಂಘಗಳ ಕಾರ್ಯದರ್ಶಿಗಳು, ಪ್ರಗತಿಪರ ರೈತರು, ಸಾರ್ವಜನಿಕರು ಭಾಗವಹಿಸಿದ್ದರು.