ಶ್ರೀರಂಗಪಟ್ಟಣ ಕುವೆಂಪು ವೃತ್ತದಲ್ಲಿ ಹಿರಿಯ ರೈತ ಹೋರಾಟಗಾರ ಕೆ.ಎಸ್.ನಂಜುಂಡೇಗೌಡ ನೇತೃತ್ವದಲ್ಲಿ ಕೈಯಲ್ಲಿ ಒಣಗಿದ ಕಬ್ಬಿನ ಜೊಲ್ಲೆ ಹಿಡಿದು ನೀರಾವರಿ ಇಲಾಖೆ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಬೆಳೆದು ನಿಂತಿರುವ ಬೆಳೆಗಳ ರಕ್ಷಣೆಗೆ ಕೆ.ಆರ್.ಸಾಗರ ಅಣೆಕಟ್ಟೆಯಿಂದ ತಕ್ಷಣವೇ ನಾಲೆಗಳಿಗೆ ನೀರು ಹರಿಸುವಂತೆ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಹಾಗೂ ಅಧಿಕಾರಿಗಳು ನೀರು ಹರಿಸದ ಕ್ರಮ ಖಂಡಿಸಿ ಭೂಮಿತಾಯಿ ಹೋರಾಟ ಸಮಿತಿ ಕಾರ್ಯಕರ್ತರು ಹಾಗೂ ರೈತರು ಬುಧವಾರ ಪಟ್ಟಣದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.ಪಟ್ಟಣದ ಕುವೆಂಪು ವೃತ್ತದಲ್ಲಿ ಹಿರಿಯ ರೈತ ಹೋರಾಟಗಾರ ಕೆ.ಎಸ್.ನಂಜುಂಡೇಗೌಡ ನೇತೃತ್ವದಲ್ಲಿ ಕೈಯಲ್ಲಿ ಒಣಗಿದ ಕಬ್ಬಿನ ಜೊಲ್ಲೆ ಹಿಡಿದು ನೀರಾವರಿ ಇಲಾಖೆ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಂತರ ಪಟ್ಟಣ ಬೀದಿಯಲ್ಲಿ ಅರೆಬೆತ್ತಲೆ ಮೆರವಣಿಗೆ ನಡೆಸಿ ತಕ್ಷಣವೇ ನಾಲೆಗಳಿಗೆ ನೀರು ಹರಿಸಿ ಬೆಳೆದ ಕಬ್ಬುಗಳ ಉಳಿಸಿ ಎಂದು ಆಗ್ರಹಿಸಿದರು.ಈ ವೇಳೆ ಮುಖಂಡ ಕೆ.ಎಸ್ ನಂಜುಂಡೇಗೌಡ ಮಾತನಾಡಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ಸಮಯದಲ್ಲಿ ರೈತರ ಪರ ನಿಲ್ಲದೆ ಗಡುಸಾಗಿ ಮಾತನಾಡಿ ರೈತರ ಬದುಕಿಗೆ ವಿಷ ಉಣಿಸುತ್ತಿದ್ದಾರೆ ಎಂದು ಕಿಡಿಕಾರಿದರು. ನೀರಿನ ಕೊರತೆಯಿಂದ ಕಬ್ಬು ಸೇರಿದಂತೆ ವಿವಿಧ ಬೆಳೆಗಳು ಒಣಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಕ್ಷಣವೇ ಕೆ.ಆರ್.ಸಾಗರ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸಿ ಬೆಳೆ ಉಳಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಇನ್ನು ಮುಂದೆ ಸರ್ಕಾರದ ಪ್ರತಿನಿಧಿಗಳ ಮನೆಗೆ ಲಗ್ಗೆ ಹಾಕಿ ಪ್ರತಿಭಟನೆ, ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಅಧ್ಯಕ್ಷ ಬಿ.ಸಿ ಕೃಷ್ಣೇಗೌಡ, ಕಾರ್ಯದರ್ಶಿ ಹುಂಡವಾಡಿ ಮಹದೇವು, ಖಜಾಂಚಿ ಮಹದೇವಪುರ ಕೃಷ್ಣ ಮುಖಂಡರಾದ ಮೇಳಾಪುರ ಜಯರಾಮು, ಮಂಜುನಾಥ್, ರಾಮಕೃಷ್ಣ, ರಾಮಚಂದ್ರು, ಕೃಷ್ಣ, ನಾಗರಾಜು, ವಿಷಕಂಠು ಸೇರಿದಂತೆ ಇತರ ರೈತರು ಇದ್ದರು.ಮಂಡ್ಯ ಬರ ಜಿಲ್ಲೆ ಘೋಷಣೆಗಾಗಿ ಇಂದು ಕರವೇ ಪ್ರತಿಭಟನೆ
ಮಂಡ್ಯ:ಮಂಡ್ಯವನ್ನು ಬರಪೀಡಿತ ಜಿಲ್ಲೆ ಎಂದು ಘೋಷಣೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿ ಜುಲೈ 16 ರಂದು ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಬೆಳಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಸಲಿರುವ ವೇದಿಕೆ ಕಾರ್ಯಕರ್ತರು ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸುವ ಜೊತೆಗೆ ಎಲ್ಲಾ ರೈತರಿಗೂ ಪರಿಹಾರ ಘೋಷಣೆ ಮಾಡಬೇಕು. ಇರುವ ಬೆಳೆಗಳನ್ನು ರಕ್ಷಿಸಲು ನಾಲೆಗಳಿಗೆ ನೀರು ಹರಿಸಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಜಿಲ್ಲಾಧ್ಯಕ್ಷ ಡಿ.ಎಸ್.ವೇಣು ತಿಳಿಸಿದ್ದಾರೆ.