ಕನ್ನಡಪ್ರಭ ವಾರ್ತೆ ಮಳವಳ್ಳಿ
ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ನೀರು ನಿಯಂತ್ರಣ ಮಂಡಳಿ ನೀಡಿರುವ ಆದೇಶ ಖಂಡಿಸಿ ರಾಜ್ಯ ರೈತ ಸಂಘದ ಕಾರ್ಯಕರ್ತರು ಗುರುವಾರ ಪಟ್ಟಣದಲ್ಲಿ ರಸ್ತೆತಡೆದು ಪ್ರತಿಭಟನೆ ನಡೆಸಿದರು.ಪಟ್ಟಣದ ಅನಂತ್ ರಾಂ ವೃತ್ತದ ಬಳಿ ಮಾನವ ಸರಪಳಿ ನಿರ್ಮಿಸಿ ರಾಜ್ಯ ಹೆದ್ದಾರಿ ತಡೆದು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ತಮಿಳುನಾಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ನೀರು ಬಿಡುಗಡೆ ಮಾಡದಂತೆ ಆಗ್ರಹಿಸಿದರು.
ತಾಲೂಕು ಘಟಕದ ಅಧ್ಯಕ್ಷ ಹಿಟ್ಟನಹಳ್ಳಿ ಶಿವರುದ್ರ ಮಾತನಾಡಿ, ರಾಜ್ಯದಲ್ಲಿ ತೀವ್ರ ಬರಗಾಲ ಕಾಡುತ್ತಿದೆ. ಸಂಕಷ್ಟದ ಪರಿಸ್ಥಿತಿ ಅರಿಯದೇ ಸಮಿತಿ 15 ದಿನಗಳ ಕಾಲ ಪ್ರತಿನಿತ್ಯ 3500 ಕ್ಯುಸೆಕ್ ನೀರು ಹರಿಸುವಂತೆ ನೀಡಿರುವ ಆದೇಶ ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಈ ಆದೇಶ ರೈತರ ಪಾಲಿಗೆ ಮರಣಶಾಸನವಾಗಿದೆ. ಪ್ರಾಧಿಕಾರದ ಅವಿವೇಕಿತನ ನಿರ್ಧಾರದಿಂದ ರೈತರು ಬೀದಿಗೆ ಇಳಿದು ಹೋರಾಟ ನಡೆಸಬೇಕಾಗಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೃಢ ತೀರ್ಮಾನ ತೆಗೆದುಕೊಂಡು ನೀರು ಹರಿಸಬಾರದು ಎಂದು ಆಗ್ರಹಿಸಿದರು.
ರೈತ ಸಂಘದ ರಾಜ್ಯ ವಿಭಾಗೀಯ ಉಪಾಧ್ಯಕ್ಷ ಬೋರಾಪುರ ಶಂಕರೇಗೌಡ ಮಾತನಾಡಿ, ರಾಜ್ಯವನ್ನು ಕಾಡುತ್ತಿರುವ ಬರಗಾಲದ ಸಂದರ್ಭದಲ್ಲಿ ಕೆಆರ್ ಎಸ್ ಜಲಾಶಯದಿಂದ ತಮಿಳುನಾಡಿಗೆ ಪ್ರತಿನಿತ್ಯ 3500 ಕ್ಯುಸೆಕ್ ನೀರು ಹರಿಸುವಂತೆ ಆದೇಶ ನೀಡಿರುವುದು ಅವೈಜ್ಞಾನಿಕವಾಗಿದೆ ಎಂದು ಕಿಡಿಕಾರಿದರು.
ರಾಜ್ಯ ಸರ್ಕಾರ ಪ್ರಾಧಿಕಾರ ಮುಂದೆ ಪ್ರಬಲ ವಾದ ಮಂಡಿಸಬೇಕು. ಯಾವುದೇ ಕಾರಣಕ್ಕೂ ನೀರು ಬಿಡುಗಡೆ ಮಾಡಬಾರದು. ನೀರು ಬಿಟ್ಟರೆ ಹೋರಾಟದ ಸ್ವರೂಪ ಬದಲಾಗಿದೆ ಎಂದು ಎಚ್ಚರಿಕೆ ನೀಡಿದರು.
ಮಳೆ ಇಲ್ಲದೆ ಬೆಳೆಗಳು ಒಣಗಿ ರೈತರು ಸಾಕಷ್ಟು ನಷ್ಕಕ್ಕೊಳಗಾಗಿದ್ದಾರೆ. ಸರ್ಕಾರ ರಾಜ್ಯದ ವಾಸ್ತವ ಸ್ಥಿತಿ ಮನವರಿಕೆ ಮಾಡಬೇಕು. ಬೆಳೆ ನಷ್ಟವಾಗಿರುವ ರೈತರಿಗೆ ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿಧಿಯಿಂದ ಎಕರೆಗೆ 50 ಸಾವಿರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.ಪ್ರತಿಫಭಟನೆಯಲ್ಲಿ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ರಘು ಎಂ.ಗೌಡ, ಉಪಾಧ್ಯಕ್ಷರಾದ ಲಿಂಗೇಗೌಡ, ನಾಗರಾಜು, ಮುಖಂಡರಾದ ಭಾನುಪ್ರಕಾಶ್, ಯಡಗಹಳ್ಳಿ ರಾಮೇಗೌಡ, ನಿಂಗೇಗೌಡ, ಶಿವಕುಮಾರ್, ಅಶೋಕ್, ಈರೇಗೌಡ, ಶಿವರಾಜ್ ಅರಸು ಪಾಲ್ಗೊಂಡಿದ್ದರು.