ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿ
ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ನೂರನೇ ವರ್ಷಾಚರಣೆ ಕಾರ್ಯಕ್ರಮಕ್ಕೆ ಮಹಾತ್ಮ ಗಾಂಧೀಜಿಗೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಧರಣಿ ಸತ್ಯಾಗ್ರಹ ನಡೆಸಿದರು.ಚಳಗಾಲದ ಅಧಿವೇಶನದ ಸಂದರ್ಭದಲ್ಲಿ ರೈತರ ಜ್ವಲಂತ ಸಮಸ್ಯೆಗಳ 24 ಅಂಶಗಳ ಬೇಡಿಕೆ ಈಡೇರಿಸುವಂತೆ ಮನವಿ ಸಲ್ಲಿಸಲಾಗಿತ್ತು. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ರಾಜ್ಯ ಸರ್ಕಾರದಿಂದ ಯಾವುದೇ ರೀತಿಯ ಸಕಾರಾತ್ಮಕ ಸ್ಪಂದನೆ ದೊರೆತಿಲ್ಲ. ಹಾಗಾಗಿ, ಇದರ ಮುಂದುವರಿದ ಭಾಗವಾಗಿ ನಾವು ಮತ್ತೆ ಹೋರಾಟ ಹಮ್ಮಿಕೊಂಡಿದ್ದೇವೆ. ಕೂಡಲೇ ಮುಖ್ಯಮಂತ್ರಿಗಳು ರೈತರ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮವನ್ನು ಸರ್ಕಾರಿ ಕಾರ್ಯಕ್ರಮವೆಂದು ಪರಿಗಣಿಸದೆ ಕೆಲವು ಭ್ರಷ್ಟ ರಾಜಕಾರಣಿಗಳ ಕಾರ್ಯಕ್ರಮವೇನೋ ಎಂದು ರೈತರು ಹಾಗೂ ಸಾರ್ವಜನಿಕರಿಗೆ ಅನಿಸುತ್ತಿದೆ. ಕಾರಣ ಮಹಾತ್ಮ ಗಾಂಧೀಜಿಯವರು ರಾಷ್ಟ್ರಪಿತರೇ ಹೊರತು ಕಾಂಗ್ರೆಸ್ ಪಿತರಲ್ಲ. ಈ ಕಾರ್ಯಕ್ರಮದಲ್ಲಿ ಸರ್ಕಾರ ಗಾಂಧೀಜಿಯವರ ಸರಳತೆ ಮರೆತು ಸಾರ್ವಜನಿಕರ ತೆರಿಗೆ ಹಣವನ್ನು ಅಧಿವೇಶನ ಹಾಗೂ ಈ ಕಾರ್ಯಕ್ರಮಕ್ಕೆ ಸುಮಾರು ₹50 ಕೋಟಿಗಿಂತಲೂ ಅಧಿಕ ಹಣವನ್ನು ವ್ಯಯ ಮಾಡುತ್ತಿದೆ ಎಂದು ರೈತರು ಆರೋಪಿಸಿದರು.ಬೆಳಗಾವಿ ಜಿಲ್ಲಾಡಳಿತ ಮತ್ತು ರಾಜ್ಯದ ಗೃಹ ಇಲಾಖೆಯನ್ನು ಬೇಕಾಬಿಟ್ಟಿಯಾಗಿ ತಮ್ಮ ಅನುಕೂಲಕ್ಕಾಗಿ ಬಳಸುತ್ತಿದೆ. ಈ ಎಲ್ಲ ವಿಷಯಗಳನ್ನು ಮನದಲ್ಲಿಟ್ಟುಕೊಂಡು ಗಾಂಧೀಜಿಯವರಿಗೆ ಪೂಜೆಯ ಮೂಲಕ ಗೌರವ ತೋರಿ, ಅಹಿಂಸಾತ್ಮಕ ತತ್ವ ಪಾಲಿಸಿಕೊಂಡು ಶಾಂತಿಯುತವಾಗಿ ಪ್ರತಿಭಟನೆ ಮಾಡಿದ್ದೇವೆ. ಸರ್ಕಾರ ಕೂಡಲೇ ರೈತರ ಜ್ವಲಂತ ಸಮಸ್ಯೆ ಪರಿಹರಿಸಬೇಕು ಎಂದು ಆಗ್ರಹಿಸಿದರು.
ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ರೈತರು ನಡೆಸಿರುವ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ರೈತರ ಬೇಡಿಕೆಗಳ ಕುರಿತು ಚರ್ಚೆ ನಡೆಸಿದರು.ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಚುನಪ್ಪ ಪೂಜೇರಿ, ಪ್ರಕಾಶ ನಾಯಕ, ಸುರೇಶ ಪರಗಣ್ಣವರ, ಸಂಗಮೇಶ ಸಗರ, ರಾಜು ಮೊವಾರ, ಕಿಶನ್ ನಂದಿ ಇತರರು ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.