ಕೇಂದ್ರ ಸರ್ಕಾರ ನೀಡಿದ ಭರವಸೆಯಂತೆ ಡಾ.ಎಂ.ಎಸ್. ಸ್ವಾಮಿನಾಥನ್ ವರದಿ ಜಾರಿ ಮಾಡಿ, ಕನಿಷ್ಠ ಬೆಂಬಲ ಬೆಲೆಯನ್ನು ಖಾತ್ರಿಗೊಳಿಸಬೇಕು. ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಹೇಳಿದ ರೀತಿ ರೈತ ವಿರೋಧಿ ಮೂರು ಕಾಯ್ದೆಗಳನ್ನು ವಾಪಸ್‌ ಪಡೆಯಬೇಕು ಎಂದು ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ ಮಂಡ್ಯ

ಹೆಚ್ಚಳ ಮಾಡಿರುವ ರಸಗೊಬ್ಬರ ಬೆಲೆಯನ್ನು ವಾಪಸ್‌ ಪಡೆದು ರಿಯಾಯಿತಿ ದರದಲ್ಲಿ ಗೊಬ್ಬರ ಒದಗಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ರಾಜ್ಯ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನಾ ಧರಣಿ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿದ ರೈತ ಸಂಘದ ಕಾರ್ಯಕರ್ತರು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಒಕ್ಕೂಟ ಸರ್ಕಾರ ರಸಗೊಬ್ಬರದ ಬೆಲೆಯನ್ನು ವಾಪಸ್ಸು ಪಡೆದು ರಸಗೊಬ್ಬರಗಳ ಮೇಲಿನ ಸಹಾಯಧನವನ್ನು ಹೆಚ್ಚಿಸಬೇಕು. ರೈತರಿಗೆ ರಿಯಾಯಿತಿ ದರದಲ್ಲಿ ಗೊಬ್ಬರ ಒದಗಿಸಬೇಕು. ಕಡ್ಡಾಯ ಲಿಂಕ್ ಪದ್ಧತಿಯನ್ನು ಕೈಬಿಟ್ಟು ರೈತರು ಕೇಳಿದ ಗೊಬ್ಬರವನ್ನೇ ಪೂರೈಸಬೇಕು ಎಂದು ಒತ್ತಾಯಿಸಿದರು.

ಒಕ್ಕೂಟ ಸರ್ಕಾರ ಮತ್ತು ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ಹಿಂಪಡೆಯಬೇಕು. ರಿಯಾಯಿತಿ ದರದಲ್ಲಿ ಕೃಷಿ ಚಟುವಟಿಕೆಗೆ ಡೀಸೆಲ್ ಪೂರೈಸುವಂತೆ ಆಗ್ರಹಿಸಿದರು.

ಕೇಂದ್ರ ಸರ್ಕಾರ ನೀಡಿದ ಭರವಸೆಯಂತೆ ಡಾ.ಎಂ.ಎಸ್. ಸ್ವಾಮಿನಾಥನ್ ವರದಿ ಜಾರಿ ಮಾಡಿ, ಕನಿಷ್ಠ ಬೆಂಬಲ ಬೆಲೆಯನ್ನು ಖಾತ್ರಿಗೊಳಿಸಬೇಕು. ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಹೇಳಿದ ರೀತಿ ರೈತ ವಿರೋಧಿ ಮೂರು ಕಾಯ್ದೆಗಳನ್ನು ವಾಪಸ್‌ ಪಡೆಯಬೇಕು ಎಂದು ಒತ್ತಾಯಿಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್. ಕೆಂಪೂಗೌಡ, ವಿಭಾಗೀಯ ಉಪಾಧ್ಯಕ್ಷ ಬೋರಾಪುರ ಶಂಕರೇಗೌಡ, ಮುಖಂಡರಾದ ರವಿಕುಮಾರ್, ಕೆ.ಟಿ. ಗೋವಿಂದೇಗೌಡ, ಎಂ.ಎಸ್. ವಿಜಯಕುಮಾರ್, ಪಿ.ನಾಗರಾಜು, ಲತಾಶಂಕರ್, ರೂಪಾ, ಎಂ.ಎಸ್. ಸಿದ್ದೇಗೌಡ, ವೈ.ಪಿ. ಮಂಜುನಾಥ್, ಜವರೇಗೌಡ, ನವೀನ್‌ಕುಮಾರ್, ಶಿವಕುಮಾರ್ ಸೇರಿ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.