ಸಾರಾಂಶ
ಕನ್ನಡಪ್ರಭ ವಾರ್ತೆ ಹನೂರು
ಕಳೆದ ಒಂದು ವಾರದಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಗ್ರಾಮ ಆಡಳಿತಾಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟವಾದಿ ಮುಷ್ಕರಕ್ಕೆ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ಬೆಂಬಲ ನೀಡಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.ಹನೂರು ಪಟ್ಟಣದ ತಹಸೀಲ್ದಾರ್ ಕಚೇರಿ ಸಮೀಪ ಕಳೆದ ಒಂದು ವಾರದಿಂದ ನಡೆಯುತ್ತಿರುವ ಅನಿರ್ದಿಷ್ಟ ಮುಷ್ಕರಕ್ಕೆ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಗೌಡೇ ಗೌಡ ,ತಾಲೂಕು ಅಧ್ಯಕ್ಷ ಅಮ್ಜದ್ ಖಾನ್ ಸೇರಿದಂತೆ ರೈತ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿ ಹೋರಾಟಕ್ಕೆ ಬೆಂಬಲ ಸೂಚಿಸಿದರು.ಜಿಲ್ಲಾ ಉಪಾಧ್ಯಕ್ಷ ಗೌಡೇಗೌಡ ಮಾತನಾಡಿ, ರಾಜ್ಯ ಸರ್ಕಾರ ಕಂದಾಯ ಇಲಾಖೆ ಯೋಜನೆಯಡಿ ಯಾವುದೇ ಒಂದು ಹೊಸ ಕಾರ್ಯಕ್ರಮ ಅನುಷ್ಠಾನಕ್ಕೆ ತಂದರೂ ಅದನ್ನು ಯಶಸ್ವಿಮಾಡುವಲ್ಲಿ ಗ್ರಾಮ ಆಡಳಿತಾಧಿಕಾರಿಗಳ ಪಾತ್ರ ಪ್ರಮುಖವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಇವರ ಬೇಡಿಕೆಗಳನ್ನು ಕೂಡಲೇ ಬಗೆಹರಿಸಬೇಕು. ಅಧಿಕಾರಿಗಳು ನ್ಯಾಯಯುತವಾಗಿ ಅವರ ಬೇಡಿಕೆಗಳನ್ನು ಕೇಳುತ್ತಿದ್ದಾರೆ. ಕೇಂದ್ರ ಸ್ಥಾನದಲ್ಲಿ ಕರ್ತವ್ಯ ನಿರ್ವಹಿಸಲು ಸುಸಜ್ಜಿತ ಕಚೇರಿ ಗುಣಮಟ್ಟದ ಪೀಠೋಪಕರಣ ಬರುವಂತಹ ರೈತರಿಗೆ ಹಾಗೂ ಸಾರ್ವಜನಿಕರಿಗೆ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಹಾಗೂ ಸರ್ಕಾರದ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ನಿಟ್ಟಿನಲ್ಲಿ ಗುಣಮಟ್ಟದ ಮೊಬೈಲ್ ಫೋನ್ ಲ್ಯಾಪ್ಟಾಪ್ ಪ್ರಿಂಟರ್ ಹಾಗೂ ಸ್ಕ್ಯಾನರ್ ಗಳನ್ನು ಕೇಳುತ್ತಿದ್ದಾರೆ. ಇವುಗಳನ್ನು ಪೂರೈಸಲು ಸರ್ಕಾರ ಮೀನಮೇಷ ಮಾಡುತ್ತಿರುವುದು ಸರಿಯಲ್ಲ. ಸರ್ಕಾರ ಅಥವಾ ಕಂದಾಯ ಸಚಿವರು ಮಧ್ಯ ಪ್ರವೇಶಿಸಿ ಅವರ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.
ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಅಧ್ಯಕ್ಷ ಶೇಷಣ್ಣ ಮಾತನಾಡಿ, ನಾವು ಕಳೆದ ತಿಂಗಳು ವಿವಿಧ ಬೇಡಿಕೆ ಈಡೇರಿಸುವಂತೆ ಪ್ರತಿಭಟನೆ ಮಾಡಿದ್ದ ಸಂದರ್ಭದಲ್ಲಿ ಕಂದಾಯ ಸಚಿವರು ನಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರು. ಆದರೆ ಇದುವರೆಗೂ ಯಾವುದೇ ಕ್ರಮ ವಹಿಸದೆ ಇರುವುದರಿಂದ ಎರಡನೇ ಹಂತದಲ್ಲಿ ಕಳೆದ ಎಂಟು ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದೇವೆ. ಆದ್ದರಿಂದ ಸಚಿವರು ನಮ್ಮ ನಾಯಕ ಬೇಡಿಕೆಯನ್ನು ಅತೀ ಶೀಘ್ರದಲ್ಲಿ ಈಡೇರಿಸಬೇಕು ಇಲ್ಲದಿದ್ದರೆ ನಮ್ಮ ಹೋರಾಟ ಅನಿರ್ದಿಷ್ಟಾವಧಿವರೆಗೂ ಮುಂದುವರಿಸುತ್ತೇವೆ ಎಂದರು.ಈ ವೇಳೆ ಗ್ರಾಮ ಆಡಳಿತಾಧಿಕಾರಿಗಳಾದ ಕಾರ್ತಿಕ್, ಮಾರುತಿ, ರಮೇಶ್, ಪುನೀತ್, ಹೇಮಾ, ಸೌಮ್ಯ, ಕಾವ್ಯ, ಅನಿಲ್ ಸುರೇಶ್ ಹಾಗೂ ರೈತ ಮುಖಂಡರುಗಳು ಹಾಜರಿದ್ದರು.