ಸಾರಾಂಶ
ಜಗಳೂರು ತಾಲೂಕಿನ ವಿವಿಧೆಡೆ ರೈತರ ಜಮೀನುಗಳಿಗೆ ಭೇಟಿ । ರಾಗಿ, ಮೆಕ್ಕೆಜೋಳ, ನವಣೆ ಬೆಳೆ ವೀಕ್ಷಿಸಿದ ಅಧಿಕಾರಿಗಳು
ಕನ್ನಡಪ್ರಭ ವಾರ್ತೆ ದಾವಣಗೆರೆಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿ ಪರಿಶೀಲಿಸಲು ಕೇಂದ್ರ ಬರ ಅಧ್ಯಯನ ತಂಡ ಶನಿವಾರ ಜಗಳೂರು ತಾಲೂಕಿನ ದೊಣ್ಣೆಹಳ್ಳಿಗೆ ಭೇಟಿ ನೀಡಿತು.
ಕೇಂದ್ರ ಜಲಶಕ್ತಿ ಆಯೋಗದ ನಿರ್ದೇಶಕ ವಿ.ಅಶೋಕ್ ಕುಮಾರ್, ಎಂ.ಎನ್.ಸಿ.ಎಫ್.ಸಿ ಉಪ ನಿರ್ದೇಶಕ ಕರಣ್ ಚೌಧರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪಕಾರ್ಯದರ್ಶಿ ಸಂಗೀತ್ ಕುಮಾರ್ ಹಾಗೂ ರಾಜ್ಯ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದ ಹಿರಿಯ ಸಲಹೆಗಾರ ಡಾ. ಶ್ರೀನಿವಾಸ ರೆಡ್ಡಿ ಒಳಗೊಂಡ ಕೇಂದ್ರ ಬರ ಅಧ್ಯಯನ ತಂಡವನ್ನು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಸುರೇಶ್ ಇಟ್ನಾಳ್ ಸ್ವಾಗತಿಸಿದರು.ಕೇಂದ್ರ ಜಲಶಕ್ತಿ ಆಯೋಗದ ನಿರ್ದೇಶಕ ವಿ.ಅಶೋಕ್ ಕುಮಾರ್ ನೇತೃತ್ವದ ತಂಡವು ಜಗಳೂರು ತಾಲೂಕಿನ ವಿವಿಧೆಡೆ ರೈತರ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ರೈತರು ಮತ್ತು ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದುಕೊಂಡಿತು.
ಬರದ ತೀವ್ರತೆ ಮನವರಿಕೆ:ಬರಪೀಡಿತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಲು ಕೇಂದ್ರ ಬರ ಅಧ್ಯಯನ ತಂಡವು ಮೊದಲಿಗೆ ಜಗಳೂರು ತಾಲೂಕಿನ ದೊಣ್ಣೆಹಳ್ಳಿ ಗ್ರಾಮದ ರೈತ ಮಹಿಳೆ ಜಯಮ್ಮ ಬೆಳೆದ 4 ಎಕರೆ ರಾಗಿ, ಸೋಮಶೇಖರ್ 1.39 ಎಕರೆಯಲ್ಲಿ ಬೆಳೆದಿರುವ ರಾಗಿ, ತಿಪ್ಪೇರುದ್ರಪ್ಪ 3 ಎಕರೆ ಮೆಕ್ಕೆಜೋಳ ಬೆಳೆ ವೀಕ್ಷಿಸಿ ನಂತರ ಶಾಂತಮ್ಮ ಬೆಳೆದ ನವಣೆ ವೀಕ್ಷಿಸಿತು. ರೈತರು ಹಾಗೂ ಅಧಿಕಾರಿಗಳು ಮಳೆ ಕೊರತೆಯಿಂದ ಬೆಳೆ ಹಾನಿಯಾದ ಬಗ್ಗೆ ಪೈರುಗಳ ತೋರಿಸಿ, ಬರದ ತೀವ್ರತೆಯ ಬಗ್ಗೆ ಮನವರಿಕೆ ಮಾಡಿದರು. ರೈತರು ಮುಂಗಾರು ಮಳೆ ಇಲ್ಲದೆ ಬೆಳೆ ಹಾನಿ ಹಾಗೂ ಉಂಟಾದ ನಷ್ಟದ ಬಗ್ಗೆ ತಮ್ಮ ಅಳಲು ತೋಡಿಕೊಂಡು, ಬೆಳೆ ನಷ್ಟ ಪರಿಹಾರಕ್ಕೆ ರೈತರು ಮನವಿ ಮಾಡಿದರು.
ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಮಾತನಾಡಿ, ಕೇಂದ್ರ ಬರ ಅಧ್ಯಯನ ತಂಡ ಜಗಳೂರು ತಾಲೂಕಿನ ವಿವಿಧೆಡೆ ರೈತರ ಜಮೀನುಗಳಿಗೆ ಭೇಟಿ ನೀಡಿ, ಬರ ಪರಿಶೀಲನೆ ನಡೆಸಲಾಗಿದೆ ಎಂದರು. ಜಿಲ್ಲೆಯಲ್ಲಿ ಶೇ.93ರಷ್ಟು ಬಿತ್ತನೆಯಾಗಿದ್ದು, ತೀವ್ರ ಬರ ಪರಿಸ್ಥಿತಿ ಕಾರಣದಿಂದ ಜಿಲ್ಲೆಯ ಎಲ್ಲಾ 6 ತಾಲೂಕುಗಳ ಬರ ಪೀಡಿತ ತಾಲೂಕುಗಳು ಎಂದು ರಾಜ್ಯ ಸರ್ಕಾರ ಘೋಷಿಸಿದ್ದು, ಅದರಂತೆ ಜಂಟಿ ಸಮೀಕ್ಷೆ ನಡೆಸಿ 1.57 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ಎನ್‍ಡಿಆರ್‌ಎಫ್ ಮಾರ್ಗಸೂಚಿಯಂತೆ ಸಬ್ಸಿಡಿ ನೀಡಲು ವರದಿ ಸಲ್ಲಿಸಿದ್ದು, ಬರ ಪರಿಸ್ಥಿತಿ ಪರಿಶೀಲಿಸಿ, ವಿಸ್ತೃತ ವರದಿ ನೀಡಲು ಕೇಂದ್ರ ಬರ ಅಧ್ಯಯನ ತಂಡ ಆಗಮಿಸಿದೆ.ಈ ತಂಡವು ರಾಗಿ ಮತ್ತು ಮೆಕ್ಕೆಜೋಳ ಬೆಳೆದ ರೈತರ ಜಮೀನುಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದೆ. ಇನ್ನೂ ಹಲವು ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಿಸಲಿದೆ. ಕೇಂದ್ರ ಸರ್ಕಾರ ಪರಿಹಾರ ನೀಡಿದ ತಕ್ಷಣ ಎಲ್ಲ ರೈತರಿಗೆ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಸುರೇಶ್ ಇಟ್ನಾಳ್, ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ, ತೋಟಗಾರಿಕೆ ಇಲಾಖೆ, ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಸೇರಿ ವಿವಿಧ ಇಲಾಖೆ ಅಧಿಕಾರಿಗಳಿದ್ದರು.ವಿಮೆ ಪರಿಹಾರ ವಿತರಣೆಗೆ ಕ್ರಮ
ದಾವಣಗೆರೆ ಜಿಲ್ಲೆಯಲ್ಲಿ 2.27 ಲಕ್ಷ ಹೆಕ್ಟೇರ್ ಪೈಕಿ 1.57 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ. ವಿಮಾ ಕಂಪನಿಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸಿ ಕಟ್ಟುನಿಟ್ಟಿನ ಕ್ರಮ ಕೈಗೊಂಡು 47 ಸಾವಿರ ರೈತರಿಗೂ ಬೆಳೆ ವಿಮೆ ಪರಿಹಾರ ವಿತರಣೆಗೆ ಕ್ರಮ ವಹಿಸಲಾಗುವುದು.ಡಾ.ಎಂ.ವಿ.ವೆಂಕಟೇಶ್, ಜಿಲ್ಲಾಧಿಕಾರಿಬರ ಪರಿಸ್ಥಿತಿಯ ವಾಸ್ತವ ವರದಿ ಸರ್ಕಾರಕ್ಕೆ ಸಲ್ಲಿಕೆ
* ಕೇಂದ್ರ ಜಲಶಕ್ತಿ ಆಯೋಗ ನಿರ್ದೇಶಕ ವಿ.ಅಶೋಕ್ ಕುಮಾರ್ ಮಾಹಿತಿದಾವಣಗೆರೆ: ಜಿಲ್ಲೆಯ ಬರ ಪರಿಸ್ಥಿತಿಯ ವಾಸ್ತವ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಕೇಂದ್ರ ಬರ ಅಧ್ಯಯನ ಮೂರನೇ ತಂಡದ ನೇತೃತ್ವವಹಿಸಿರುವ ಕೇಂದ್ರ ಜಲಶಕ್ತಿ ಆಯೋಗದ ನಿರ್ದೇಶಕ ವಿ.ಅಶೋಕ್ ಕುಮಾರ್ ಹೇಳಿದರು.
ಜಿಲ್ಲೆಯ ಜಗಳೂರು ತಾಲೂಕಿನ ವಿವಿಧೆಡೆ ರೈತರ ಜಮೀನುಗಳಿಗೆ ಭೇಟಿ ನೀಡಿ, ಮಳೆ ಕೊರತೆಯಿಂದ ಉಂಟಾದ ಬೆಳೆ ಹಾನಿ ವೀಕ್ಷಿಸಿ ನಂತರ ಮಾಧ್ಯಮದರೊಂದಿಗೆ ಮಾತನಾಡಿ ಜಿಲ್ಲೆಯ ವಿವಿಧೆಡೆ ರೈತರ ಜಮೀನುಗಳಿಗೆ ಭೇಟಿ ನೀಡಿ, ಬರ ಪರಿಸ್ಥಿತಿ ಕುರಿತು ಸಂವಾದ ನಡೆಸಿ, ಮಾಹಿತಿ ಪಡೆಯಲಾಗುತ್ತಿದೆ. ಜೊತೆಗೆ ಜಿಲ್ಲಾಡಳಿತವೂ ಬರದ ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದೆ ಎಂದು ತಿಳಿಸಿದರು.ಜಿಲ್ಲೆಯ ವರದಿಯನ್ನು ರಾಜ್ಯದ ಬರ ಅಧ್ಯಯನ ತಂಡದ ನೇತೃತ್ವ ವಹಿಸಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹುರಿಗೆ ಸಲ್ಲಿಸಲಾಗುವುದು, ಬಳಿಕ ರಾಜ್ಯದ ಸಂಗ್ರಹಿತ ಕ್ರೋಢೀಕೃತ ವರದಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.