ತ್ವರಿತ ಬಸ್‌ಪಾಸ್ ವಿತರಣೆ, ಬಸ್‌ ಹೆಚ್ಚಳಕ್ಕೆ ಪ್ರತಿಭಟನೆ

| Published : Jun 27 2024, 01:06 AM IST

ಸಾರಾಂಶ

ಬಸ್ ಪಾಸ್ ವಿತರಣೆ ಹಾಗೂ ಬಸಗಳ ಸಂಖ್ಯೆ ಹೆಚ್ಚಳ ಮಾಡುವಂತೆ ಆಗ್ರಹಿಸಿ ಬೀದರ್‌ನಲ್ಲಿ ಎಬಿವಿಪಿಯಿಂದ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಬೀದರ್‌

ವಿದ್ಯಾರ್ಥಿಗಳ ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ಬಸ್ ಪಾಸ್ ವಿತರಣೆ ಮಾಡಿ ಹಾಗೂ ಬಸ್‌ ಸಂಖ್ಯೆ ಹೆಚ್ಚಳ ಮಾಡುವಂತೆ ಆಗ್ರಹಿಸಿ ಬುಧವಾರ ನಗರದಲ್ಲಿ ಎಬಿವಿಪಿ ಪ್ರತಿಭಟನೆ ನಡೆಸಿತು.

ನಗರದ ಅಂಬೇಡ್ಕರ್, ಶಿವಾಜಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ರ್‍ಯಾಲಿ ನಡೆಸಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿಗೆ ಬರೆದ ಮನವಿ ಸಲ್ಲಿಸಿ, ಕರ್ನಾಟಕ ರಾಜ್ಯದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಪಡೆಯಲು ಅತೀ ಹೆಚ್ಚು ನಗರ ಪ್ರದೇಶಗಳ ಶಾಲಾ ಕಾಲೇಜುಗಳಿಗೆ ಬರುತ್ತಾರೆ. ವಿದ್ಯಾರ್ಥಿಗಳ ತರಗತಿಗಳು ಪ್ರಾರಂಭವಾದ ನಂತರ ಸರಿಯಾದ ಸಮಯಕ್ಕೆ ಬಸ್ ಪಾಸ್ ವಿತರಣೆ ಮಾಡದೇ ಇರುವ ಕಾರಣ ಪ್ರತಿದಿನ ನೂರಾರು ರುಪಾಯಿ ಖರ್ಚು ಮಾಡಿಕೊಂಡು ಬಡ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಬರುವುದು ಕಷ್ಟದ ಸಂಗತಿ ಆಗಿದೆ.

ಸರ್ಕಾರ ಶಾಲಾ ಕಾಲೇಜುಗಳು ಪ್ರಾರಂಭವಾದ ತಕ್ಷಣವೇ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಸಕಾಲದಲ್ಲಿ ಒದಗಿಸುವ ನಿಟ್ಟಿನಲ್ಲಿ ಹೆಚ್ಚು ಸಿಬ್ಬಂದಿ ಬಳಸಿಕೊಂಡು ಬಸ್ ಪಾಸ್ ಒದಗಿಸುವ ಅವಶ್ಯಕತೆ ಇದೆ. ಪಾಸ್‌ಗೆ ಅರ್ಜಿ ಸಲ್ಲಿಸಿ ವಾರಗಳ ಕಾಲ ವಿದ್ಯಾರ್ಥಿಗಳು ಕಾಯುವ ಸ್ಥಿತಿ ಇದೆ. ಇದರಿಂದ ಬಡ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಬಸ್ ಪಾಸ್ ಸಿಗುವರೆಗೂ ಬರದೆ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ವಿಶ್ವವಿದ್ಯಾಲಯಗಳ ಶೈಕ್ಷಣಿಕ ವೇಳಾಪಟ್ಟಿ ಬಹಳಷ್ಟು ವ್ಯತ್ಯಾಸವಿದ್ದು, ವಿಶ್ವವಿದ್ಯಾಲಯಗಳ ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಿಸುವಂತೆ ಎಬಿವಿಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹೇಮಂತ ಆಗ್ರಹಿಸಿದರು.

ಮಹಿಳೆಯರಿಗೆ ಉಚಿತ ಬಸ್ ಸೇವೆ ನೀಡುತ್ತಿರುವುದರಿಂದ ಯಾವ ಹಳ್ಳಿಗಳಿಗೆ ಬಸ್ ಕೊರತೆ ಇದೆ. ಆ ಹಳ್ಳಿಗಳಿಗೆ ಸಮರ್ಪಕವಾದ ವ್ಯವಸ್ಥೆಯನ್ನು ಶಾಲಾ-ಕಾಲೇಜುಗಳ ಸಮಯಕ್ಕೆ ಒದಗಿಸಬೇಕೆಂದು ಎಬಿವಿಪಿ ನಗರ ಸಹ ಕಾರ್ಯದರ್ಶಿ ಶಿವಾನಿ ಆಗ್ರಹಿಸಿದರು.

ರಾಜ್ಯ ಕಾರ್ಯಕಾರಿಣಿ ಸದಸ್ಯ ಸಾಯಿ, ಪವನ್ ಕುಂಬಾರ, ನಾಗರಾಜ್ ಸುಲ್ತಾನಪೂರ, ಅಭಿಷೇಕ್ ಶಂಬು, ಮಹೇಶ್, ಆನಂದ, ಸಾಯಿ ಕಿರಣ್, ಪವನ್ ಪದ್ಮಾಕರ್, ಹರೀಶ್ ಪ್ರಾರ್ಥನಾ, ಸೌಮ್ಯ, ಭುವನೇಶ್ವರಿ ಇನ್ನಿತರ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.