ಸಾರಾಂಶ
ಕನ್ನಡಪ್ರಭ ವಾರ್ತೆ ಕೋಲಾರತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದ ಎಕ್ಸಿಡಿ ಕ್ಲಚ್ ಕಾರ್ಖಾನೆಯ ಕಾರ್ಮಿಕರು ಬೇಡಿಕೆಗಳ ಈಡೇರಿಕೆಗಾಗಿ ಸುಮಾರು ಒಂದು ತಿಂಗಳಿಂದ ಧರಣಿ ನಡೆಸುತ್ತಿದ್ದರೂ ಆಡಳಿತ ಮಂಡಳಿ ಸ್ಪಂದಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮಂಗಳವಾರದಿಂದ ಅನಿರ್ದಿಷ್ಟಕಾಲ ಉಪವಾಸ ಸತ್ಯಾಗ್ರಹ ಆರಂಭಿಸಿರುವುದಾಗಿ ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ತಿಳಿಸಿದರು.ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಎಕ್ಷಿಡಿ ಕಂಪನಿಯ ಆಡಳಿತ ಮಂಡಳಿ ಹಾಗೂ ಕಾರ್ಮಿಕರ ಮಧ್ಯೆ ಸುಮಾರು ಒಂದು ತಿಂಗಳಿಂದ ನಡೆಸುತ್ತಿರುವ ಧರಣಿಗೆ ಯಾವುದೇ ಸ್ವಂದನೆ ಸಿಕ್ಕಿಲ್ಲ, ಜಿಲ್ಲಾಡಳಿತವು ಈಗಾಗಲೇ ಮಧ್ಯ ಪ್ರವೇಶಿಸಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕಿತ್ತು, ಜಿಲ್ಲಾಡಳಿತದ ನಿರ್ಲಕ್ಷ್ಯ ಧೋರಣೆಯಿಂದ ಅನಿವಾರ್ಯವಾಗಿ ಉಪವಾಸ ಸತ್ಯಾಗ್ರಹ ನಡೆಸಬೇಕಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಆಡಳಿತ ಮಂಡಳಿ ಮೊಂಡುತನ
ಎಕ್ಸಿಡಿ ಕ್ಲಚ್ ಕಾರ್ಮಿಕರು ಒಂದು ತಿಂಗಳಿಂದ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದರೂ ಕಾರ್ಖಾನೆಯ ಆಡಳಿತ ಮಂಡಳಿಯು ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಮುಂದಾಗದೇ ಮೊಂಡುತನ ಪ್ರದರ್ಶಿಸುತ್ತಿರುವುದು ಖಂಡನೀಯ, ಕಾರ್ಮಿಕರ ಬೇಡಿಕೆಗಳನ್ನು ನ್ಯಾಯುಯುತವಾಗಿದ್ದು, ಸ್ಥಳೀಯ ಕಾರ್ಮಿಕರಿಗೆ ನ್ಯಾಯ ಒದಗಿಸಬೇಕಾಗಿದೆ, ಸರಕಾರಗಳು ಕೂಡ ಗುತ್ತಿಗೆ ಆಧಾರದ ಕಾರ್ಮಿಕರನ್ನು ನಿರಂತರವಾಗಿ ಶೋಷಣೆ ಮಾಡಿದ್ದಾರೆ, ಜಿಲ್ಲೆಯ ಅಭಿವೃದ್ಧಿಗೆ ಕಾರ್ಮಿಕರ ಪಾತ್ರ ಮುಖ್ಯವಾಗಿದ್ದು ಕೂಡಲೇ ಸೂಕ್ತ ಕ್ರಮ ವಹಿಸಬೇಕು ಎಂದರು.ಸಿಐಟಿಯು ಜಿಲ್ಲಾ ಮುಖಂಡ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ಸುಮಾರು ೧೫ ವರ್ಷಗಳ ಹಿಂದೆ ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯೋಗ ನೀಡುವುದು ಕಂಪನಿಯ ಜವಾಬ್ದಾರಿ, ಆದರೆ ಕಾರ್ಮಿಕರ ಹಕ್ಕುಗಳನ್ನು ಪ್ರಶ್ನೆ ಮಾಡಿದರೆ ಅವರ ವಿರುದ್ಧ ಕೇಸ್‌ಗಳನ್ನು ಹಾಕಲು ಹೊರಟಿದ್ದಾರೆ, ಕೂಡಲೇ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಮಧ್ಯೆ ಪ್ರವೇಶಿಸಿ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು.ಸ್ಥಳೀಯರಿಗೆ ಉದ್ಯೋಗ ನೀಡಿಜಿಲ್ಲೆಯಲ್ಲಿ ನೂರಾರು ಕೈಗಾರಿಕೆಗಳು ಸ್ಥಾಪನೆಯಾಗುತ್ತಿರುವುದು ಸ್ವಾಗತಾರ್ಹವಾದರೂ, ಜಿಲ್ಲೆಯ ನಿರುದ್ಯೋಗಿ ಯುವಜನರಿಗೆ ಆದ್ಯತೆ ನೀಡಬೇಕು ಇಲ್ಲಿನ ಕೈಗಾರಿಕೆಗಳಲ್ಲಿ ಕಾರ್ಮಿಕರ ಮೇಲೆ ನಡೆಯುವ ಶೋಷಣೆ, ದಬ್ಬಾಳಿಕೆಗಳನ್ನು ತಡೆಗಟ್ಟಲು ಕಾರ್ಮಿಕ ಕಾನೂನುಗಳನ್ನು ಸಮರ್ಪಕವಾಗಿ ಜಾರಿ ಮಾಡಬೇಕು, ಜೊತೆಗೆ ದುಡಿಯುವ ಕಾರ್ಮಿಕರಿಗೆ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದೇ ಕಾರ್ಮಿಕರನ್ನು ಶೋಷಣೆ ಮಾಡುತ್ತಿರುವುದನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ. ವಿಜಯಕೃಷ್ಣ, ಎಕ್ಷಿಡಿ ಕ್ಲಚ್ ಇಂಡಿಯಾ ಕಾರ್ಮಿಕರ ಸಂಘದ ಅಧ್ಯಕ್ಷ ಹರೀಶ್, ಕಾರ್ಯದರ್ಶಿ ಪ್ರಮೋದ್, ಖಜಾಂಚಿ ಮಂಜುನಾಥ್ ಇದ್ದರು.