ಸಾರಾಂಶ
ಮಗಳನ್ನು ದನ ಮೇಯಿಸಲು ವೆಂಕಟಾಪುರ ಮತ್ತು ಹೊಸೂರ ಸೀಮಾದಲ್ಲಿರುವ ಗುಡ್ಡಕ್ಕೆ ಕರೆದುಕೊಂಡು ಹೋಗಿದ್ದ. ಈ ವೇಳೆ ಕುಡಿದ ಅಮಲಿನಲ್ಲಿದ್ದ ವ್ಯಕ್ತಿ, ಮಗಳ ಮೇಲೆ ಅತ್ಯಾಚಾರ ಮಾಡಿದ್ದ. ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದ.
ಕೊಪ್ಪಳ:
ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಮಾಡಿದ ತಂದೆಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ (ಪೋಕ್ಸೊ) ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ₹ 80,000 ದಂಡ ವಿಧಿಸಿದೆ.ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ವೆಂಕಟಾಪುರದ ನಿವಾಸಿ ಶಿಕ್ಷೆಗೆ ಒಳಗಾದ ಅಪರಾಧಿ.
ಮಗಳನ್ನು ದನ ಮೇಯಿಸಲು ವೆಂಕಟಾಪುರ ಮತ್ತು ಹೊಸೂರ ಸೀಮಾದಲ್ಲಿರುವ ಗುಡ್ಡಕ್ಕೆ ಕರೆದುಕೊಂಡು ಹೋಗಿದ್ದ. ಈ ವೇಳೆ ಕುಡಿದ ಅಮಲಿನಲ್ಲಿದ್ದ ವ್ಯಕ್ತಿ, ಮಗಳ ಮೇಲೆ ಅತ್ಯಾಚಾರ ಮಾಡಿದ್ದ. ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದ. ಜೂ.18,2020ರಂದು ಬಾಲಕಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಗಂಗಾವತಿಯ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂ.19ರಂದು ಬಾಲಕಿಗೆ ಗಂಡು ಮಗು ಜನಿಸಿದೆ.ಈ ಹಿನ್ನೆಲೆಯಲ್ಲಿ ಕೊಪ್ಪಳ ಗ್ರಾಮೀಣ ಪೊಲೀಸರು ದೂರು ದಾಖಲಿಸಿಕೊಂಡಿದ್ದರು. ಅಂದಿನ ಪಿಎಸ್‌ಐ ಸುರೇಶ ಡಿ. ಪ್ರಥಮ ಹಂತದ ತನಿಖೆ ನಡೆಸಿ ಕೊಪ್ಪಳ ಸಿಪಿಐ ರವಿ ಉಕ್ಕುಂದ ಅವರಿಗೆ ವರ್ಗಾಯಿಸಿದ್ದರು. ಅವರು ಸಂಪೂರ್ಣ ತನಿಖೆ ನಡೆಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ (ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶರಾದ ಕುಮಾರ ಡಿ.ಕೆ ಅವರು ಆರೋಪಿಗೆ ಜೀವಾವಧಿ ಜೈಲು ಶಿಕ್ಷೆ ಹಾಗೂ ₹ 80,000 ದಂಡ ವಿಧಿಸಿ ಏ.17ರಂದು ಆದೇಶ ಹೊರಡಿಸಿದ್ದಾರೆ.ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಗೌರಮ್ಮ ಎಲ್. ದೇಸಾಯಿ ವಾದಿಸಿದ್ದರು.