27 ರಂದು ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನ: ಅರುಣ್ ಕುಮಾರ್

| Published : Feb 20 2024, 01:46 AM IST

ಸಾರಾಂಶ

ಸಮ್ಮೇಳನದಲ್ಲಿ 7ನೇ ವೇತನ ಆಯೋಗ ಜಾರಿ, ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆ ಯೋಜನೆಯನ್ನೇ ಮುಂದುವರಿಸುವುದು ಮತ್ತು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನ ಮಾಡುವಂತೆ ಒತ್ತಾಯ ಮಾಡಲಾಗುತ್ತದೆ

ಕನ್ನಡಪ್ರಭ ವಾರ್ತೆ ಕೆ.ಆರ್. ನಗರ

ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಫೆ. 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಜೆ. ಅರುಣ್ ಕುಮಾರ್ ಹೇಳಿದರು.

ಪಟ್ಟಣದ ವಿವಿಧ ಸರ್ಕಾರಿ ಕಚೇರಿಗಳಿಗೆ ತೆರಳಿ ಸಮ್ಮೇಳನದ ಆಹ್ವಾನ ಪತ್ರಿಕೆ ನೀಡಿ ಮಾತನಾಡಿದ ಅವರು, ಅಂದು ಬೆಳಗ್ಗೆ 10.30ಕ್ಕೆ ನಡೆಯುವ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು. ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅಧ್ಯಕ್ಷತೆ ವಹಿಸುವರು ಎಂದರು.

ಕೆ.ಆರ್. ನಗರ ಮತ್ತು ಸಾಲಿಗ್ರಾಮ ತಾಲೂಕಿನಿಂದ ನೌಕರರು ಸಮ್ಮೇಳನಕ್ಕೆ ತೆರಳಲು 10 ಬಸ್ಸುಗಳನ್ನು ವ್ಯವಸ್ಥೆ ಮಾಡಲಾಗಿದ್ದು, ಅಗತ್ಯವಿದ್ದರೆ ಮತ್ತಷ್ಟು ವಾಹನ ಕಳುಹಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಸಮ್ಮೇಳನದಲ್ಲಿ 7ನೇ ವೇತನ ಆಯೋಗ ಜಾರಿ, ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆ ಯೋಜನೆಯನ್ನೇ ಮುಂದುವರಿಸುವುದು ಮತ್ತು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನ ಮಾಡುವಂತೆ ಒತ್ತಾಯ ಮಾಡಲಾಗುತ್ತದೆ ಎಂದರು.

ಸಮ್ಮೇಳನಕ್ಕೆ ಎರಡು ತಾಲೂಕಿನ ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ ಅಧ್ಯಕ್ಷರು, ಆಸಕ್ತಿ ಉಳ್ಳವರು ಸಂಘದ ಪದಾಧಿಕಾರಿಗಳನ್ನು ಸಂಪರ್ಕಿಸುವಂತೆ ಕೋರಿದರು.

ನಂತರ ಅವರು ಕೆ.ಆರ್. ನಗರ ಮತ್ತು ಸಾಲಿಗ್ರಾಮ ತಾಲೂಕು ವ್ಯಾಪ್ತಿಯ ವಿವಿಧ ಕಚೇರಿಗಳಿಗೆ ತೆರಳಿ ಸಮ್ಮೇಳನದ ಆಹ್ವಾನ ಪತ್ರಿಕೆ ನೀಡಿದರು. ಸಂಘದ ಖಜಾಂಚಿ ಡಿ.ವಿ. ಗುಡಿ ಪ್ರಸನ್ನ, ಕಾರ್ಯದರ್ಶಿ ಪ್ರಶಾಂತ್, ಗೌರವಾಧ್ಯಕ್ಷ ಕೆ. ಗೋಪಾಲ್, ರಾಜ್ಯ ಪರಿಷತ್ ಸದಸ್ಯ ಕೆ.ವಿ. ರಮೇಶ್ ಕುಮಾರ್, ಎನ್.ಪಿ.ಎಸ್ ನೌಕರರ ಸಂಘದ ಅಧ್ಯಕ್ಷ ಶಶಿಕಿರಣ್, ಖಜಾಂಚಿ ಕೆಟಿಪಿ ಆನಂದ್ ಇದ್ದರು.