ಸಾರಾಂಶ
ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ಕೋರಿ ಕಳೆದ ಮೂರು ವರ್ಷಗಳಿಂದ ನಡೆಸುತ್ತಿದ್ದ ಹೋರಾಟ ತಾತ್ಕಾಲಿಕವಾಗಿ ಸ್ಥಗಿತವಾಗಿತ್ತು. ಮತ್ತೆ ಹೋರಾಟ ಆರಂಭಕ್ಕೆ ಉಳವಿಯಲ್ಲಿ ನಡೆಯುವ ಸಭೆಯಲ್ಲಿ ರೂಪುರೇಷೆ ನಿರ್ಧರಿಸಲಾಗುವುದು ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.
ಕಾರವಾರ: ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ಕೋರಿ ಹೋರಾಟ ಪುನಾರಂಭಗೊಳಿಸಲು ನಿರ್ಧರಿಸಿದ್ದು, ಮೇ 23ರಂದು ಜೋಯಿಡಾ ತಾಲೂಕಿನ ಉಳವಿಯಲ್ಲಿ ಹೋರಾಟ ಸಮಿತಿ ಪದಾಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಕೂಡಲಸಂಗಮ ಮಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ಕೋರಿ ಕಳೆದ ಮೂರು ವರ್ಷಗಳಿಂದ ನಡೆಸುತ್ತಿದ್ದ ಹೋರಾಟ ತಾತ್ಕಾಲಿಕವಾಗಿ ಸ್ಥಗಿತವಾಗಿತ್ತು. ಮತ್ತೆ ಹೋರಾಟ ಆರಂಭಕ್ಕೆ ಉಳವಿಯಲ್ಲಿ ನಡೆಯುವ ಸಭೆಯಲ್ಲಿ ರೂಪುರೇಷೆ ನಿರ್ಧರಿಸಲಾಗುವುದು ಎಂದರು.೨೦23ರಲ್ಲಿ ಸರ್ಕಾರ ವಿಶೇಷವಾಗಿ 2ಡಿ ಮೀಸಲಾತಿ ನೀಡಿದ್ದರೂ, ಆ ಮೀಸಲಾತಿ ಅನುಷ್ಠಾನವಾಗುವ ಪೂರ್ವದಲ್ಲಿ ಚುನಾವಣೆ ನೀತಿ ಸಂಹಿತೆ ಎದುರಾಯಿತು. ನಂತರ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ಮೀಸಲಾತಿ ಬಗ್ಗೆ ಸಭೆ ನಡೆಸಿ ತೀರ್ಮಾನಿಸುತ್ತೇವೆ ಎಂದು ಭರವಸೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆಯ ನೀತಿ ಸಂಹಿತೆಯೂ ಹೋರಾಟಕ್ಕೆ ಅಡ್ಡಿಯಾಗಿತ್ತು. ಹೀಗಾಗಿ ಉಳವಿಯಿಂದ ಮತ್ತೆ ಹೋರಾಟ ಪ್ರಾರಂಭಿಸುತ್ತೇವೆ ಎಂದರು.
ಉಳವಿಯಲ್ಲಿ ಮೇ 23ರಂದು ಮಧ್ಯಾಹ್ನ 3 ಗಂಟೆಗೆ ಸಭೆ ನಡೆಯಲಿದೆ. ಸಭೆಯಲ್ಲಿ ಹೋರಾಟ ಸಮಿತಿಯ ರಾಷ್ಟ್ರ, ರಾಜ್ಯ ಹಾಗೂ ಜಿಲ್ಲಾ ಮಟ್ಟದ ಪದಾಧಿಕಾರಿಗಳು ಮಾತ್ರ ಭಾಗವಹಿಸಲಿದ್ದಾರೆ. ಪದಾಧಿಕಾರಿಗಳು ಹಾಗೂ ಭಕ್ತರು ಮಾತ್ರ ಹೋರಾಟ ನಡೆಸಲಿದ್ದು, ನೀತಿ ಸಂಹಿತೆ ಮುಗಿದ ಬಳಿಕ ರಾಜಕೀಯ ನಾಯಕರು ಭಾಗವಹಿಸಿತ್ತಾರೆ ಎಂದರು.ಹೋರಾಟ ಸಮಿತಿಯ ಪ್ರಮುಖರಾದ ಚನ್ನಬಸಪ್ಪ ಬಾಗೇವಾಡಿ ಇದ್ದರು.