ಸಾರಾಂಶ
ಹಾವೇರಿ: ಇತರೆ ಸಮುದಾಯದವರು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣಪತ್ರ ಪಡೆದ ಪ್ರಕರಣಗಳು ಕಂಡುಬಂದಲ್ಲಿ ಅಂಥವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜನರ ಮೇಲಿನ ದೌರ್ಜನ್ಯ ನಿಯಂತ್ರಣ ಹಾಗೂ ಜಿಲ್ಲಾ ಜಾಗೃತಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ನಕಲಿ ಜಾತಿ ಪ್ರಮಾಣಪತ್ರ ಪ್ರಕರಣಗಳು ಕಂಡುಬಂದಲ್ಲಿ ಕೂಡಲೇ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಸಮಿತಿಯ ಅಧಿಕಾರೇತರ ನಾಮನಿರ್ದೇಶಿತ ಸದಸ್ಯರಿಗೆ ಸಲಹೆ ನೀಡಿದರು.ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಇರುವ ಸರ್ಕಾರದ ಸೌಲಭ್ಯಗಳ ಕುರಿತು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಕಾನೂನಿನಡಿ ಇರುವ ಸೌಲಭ್ಯಗಳ ಕುರಿತು ಕಾಲನಿಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಸೂಚನೆ ನೀಡಿದರು.ಸಮಿತಿಯ ಅಧಿಕಾರೇತರ ನಾಮನಿರ್ದೇಶಿತ ಸದಸ್ಯ ರಮೇಶ ಆನವಟ್ಟಿ, ಎನ್.ಎಂ. ಗಾಳೆಮ್ಮನವರ, ಮುತ್ತುರಾಜ ಮಾದರ ಮಾತನಾಡಿ, ಕಳ್ಳಿಹಾಳ ಗ್ರಾಮದ ಪರಿಶಿಷ್ಟ ಜಾತಿಯವರ ಸ್ಮಶಾನಕ್ಕೆ ದಾರಿ ಸೌಲಭ್ಯ, ತುಂಗಾ ಮೇಲ್ದಂಡೆ ಯೋಜನೆಗೆ ಭೂಸ್ವಾಧೀನ ಪಡೆದುಕೊಂಡ ಹೆಚ್ಚುವರಿ ಭೂಮಿ ಮರಳಿ ರೈತರಿಗೆ ನೀಡುವಂತೆ, ಸವಣೂರು ತಾಲೂಕು ಹಿರೇಮುಗದೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ನಿಯಮಾನುಸಾರ ಪರಿಶಿಷ್ಟ ಜಾತಿಯವರನ್ನು ಅಡುಗೆ ಸಹಾಯಕ ಹುದ್ದೆಗೆ ನೇಮಕಕ್ಕೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡರು.ಸದಸ್ಯರ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು, ಕಳ್ಳಿಹಾಳ ಗ್ರಾಮದ ಸ್ಮಶಾನ ಭೂಮಿಗೆ ಕೂಡಲೇ ಕ್ರಿಯಾಯೋಜನೆ ತಯಾರಿಸುವಂತೆ ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳಿಗೆ, ಹಿರೇಮುಗದೂರ ಅಡುಗೆ ಸಹಾಯಕರ ಹುದ್ದೆಗೆ ಈ ಮೊದಲು ನಿಯಮಾನುಸಾರ ಆಯ್ಕೆ ಅಭ್ಯರ್ಥಿ ಪಟ್ಟಿ ರದ್ದುಪಡಿಸಿ, ಪುನಃ ಮರು ಅರ್ಜಿ ಕರೆದಿದ್ದು ಸರಿಯಾದ ಕ್ರಮವಲ್ಲ. ಈ ಕುರಿತು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಕೂಲಕಂಷವಾಗಿ ಪರಿಶೀಲಿಸಿ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ ಮಾತನಾಡಿ, ಕಳೆದ ಜನವರಿಯಿಂದ ಈವರೆಗೆ ವಿವಿಧ ನಾಲ್ಕು ದೌರ್ಜನ್ಯ ಪ್ರಕರಣಗಳಲ್ಲಿ ₹77,329 ಮೊತ್ತ ಪರಿಹಾರ ನೀಡಲಾಗಿದೆ ಎಂದು ಮಾಹಿತಿ ನೀಡಿದರು.ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಾಲ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ, ಜಿಪಂ ಉಪಕಾರ್ಯದರ್ಶಿ ಡಾ. ರಂಗಸ್ವಾಮಿ, ಸರ್ಕಾರಿ ಅಭಿಯೋಜಕಿ ಸರೋಜಾ ಕೂಡಲಗಿಮಠ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಮಮತಾ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಹುಗ್ಗಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಬರಗಿಮಠ, ಸಮಿತಿಯ ಅಧಿಕಾರೇತರ ನಾಮನಿರ್ದೇಶಿತ ಸದಸ್ಯ ಶ್ರೀಧರ ಆನವಟ್ಟಿ, ಕೃಷ್ಣಪ್ಪ ಚವ್ಹಾಣ ಇತರರು ಉಪಸ್ಥಿತರಿದ್ದರು.