ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚಳದ ಮಾಹಿತಿ ಸಿಕ್ಕರೆ ದೂರು ದಾಖಲಿಸಿ

| Published : Sep 25 2024, 12:50 AM IST

ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚಳದ ಮಾಹಿತಿ ಸಿಕ್ಕರೆ ದೂರು ದಾಖಲಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಸದ್ಯದಲ್ಲಿಯೇ ಜಿಲ್ಲಾಧಿಕಾರಿಗಳು, ಜಿಪಂ ಸಿಇಒ ಅವರೊಂದಿಗೆ ಸಭೆ ನಡೆಸಿ ಮೈಕ್ರೋ ಫೈನಾನ್ಸ್ ವಿರುದ್ಧ ಯಾವ ಕ್ರಮಗಳನ್ನು ತೆಗೆದುಕೊಂಡಿದ್ದಾರೆ ಎನ್ನುವುದನ್ನು ಪರಿಶೀಲನೆ ಮಾಡಿ ಮೈಕ್ರೋ ಫೈನಾನ್ಸ್ ಹಾವಳಿ ತಡೆಯಲು ಜನರ ಪರವಾಗಿ ಹೋರಾಟ ಮಾಡುತ್ತೇನೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಗಳ ಕಿರುಕುಳ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾಹಿತಿ ಸಿಕ್ಕರೆ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ತಿಳಿಸಿದರು.

ತಾಲೂಕಿನ ಮಲಿಯೂರು ಗ್ರಾಮದಲ್ಲಿ ಕೆಲವು ದಿನಗಳ ಹಿಂದೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಿಂದ ಸಾಲ ಪಡೆದು ಕಟ್ಟಲಾಗದ ಸಂದರ್ಭದಲ್ಲಿ ಸಿಬ್ಬಂದಿ ಕಿರುಕುಳದ ಆರೋಪದಿಂದ ಆತ್ಮಹತ್ಯೆ ಮಾಡಿಕೊಂಡ ಮಹಾಲಕ್ಷ್ಮಿ ಅವರ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಗಳ ಕಿರುಕುಳ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅವುಗಳನ್ನು ಬಂದ್ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನ ಸೆಳೆಯಲಾಗುವುದು ಎಂದರು.

ಸದ್ಯದಲ್ಲಿಯೇ ಜಿಲ್ಲಾಧಿಕಾರಿಗಳು, ಜಿಪಂ ಸಿಇಒ ಅವರೊಂದಿಗೆ ಸಭೆ ನಡೆಸಿ ಮೈಕ್ರೋ ಫೈನಾನ್ಸ್ ವಿರುದ್ಧ ಯಾವ ಕ್ರಮಗಳನ್ನು ತೆಗೆದುಕೊಂಡಿದ್ದಾರೆ ಎನ್ನುವುದನ್ನು ಪರಿಶೀಲನೆ ಮಾಡಿ ಮೈಕ್ರೋ ಫೈನಾನ್ಸ್ ಹಾವಳಿ ತಡೆಯಲು ಜನರ ಪರವಾಗಿ ಹೋರಾಟ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಖುದ್ದು ಭೇಟಿ ಮಾಡಿ ಎಲ್ಲ ಮಾಹಿತಿ ನೀಡಲಾಗುವುದು, ಮೈಕ್ರೋ ಫೈನಾನ್ಸ್ ಪದ್ಧತಿಯನ್ನು ರಾಜ್ಯದಲ್ಲಿ ಬಂದ್ ಮಾಡುವಂತೆ ಹಾಗೂ ಆತ್ಮಹತ್ಯೆ ಮಾಡಿಕೊಂಡಿರುವ ಮಹಾಲಕ್ಷ್ಮಿ ಕುಟುಂಬಕ್ಕೆ ಪರಿಹಾರ ನೀಡುವಂತೆ ಮನವಿ ಮಾಡಲಾಗುವುದು ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರ ಬಡವರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ನೀಡುತ್ತಿದ್ದರೂ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಅವುಗಳು ನೀರು ಪಾಲಾಗುತ್ತಿವೆ. ಹೀಗಾಗಿ ಸ್ಥಳೀಯ ಗ್ರಾಪಂಗಳು ಜನರಲ್ಲಿ ಜಾಗೃತಿ ಮೂಡಿಸಬೇಕು. ಅಲ್ಲದೇ ಸಾಲಗಳಿಗೆ ಎದುರುಕೊಂಡು ಆತ್ಮಹತ್ಯೆಯಂಥ ಕೆಟ್ಟ ಹಾದಿ ಹಿಡಿಯಬಾರದು ಎಂದು ಸಲಹೆ ನೀಡಿದರು.

ಈ ವೇಳೆ ಸಬ್ ಇನ್ಸ್ ಪೆಕ್ಟರ್ ಡಿ.ರವಿಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಹಕಾರ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿ ಕೆಲ ಸೂಚನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ರಾಜಮೂರ್ತಿ, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಕೆ ಅನಿತಾ, ಅಂಗನವಾಡಿ ಮೇಲ್ವಿಚಾರಕಿಯರಾದ ಶೈಲಜಾ, ಸರಳಾ, ಮಹದೇವಮ್ಮ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಇದ್ದರು.