ಯಲಬುರ್ಗಾ: ಕೊಪ್ಪಳ ಜಿಲ್ಲೆಯ ಯಲಬುರ್ಗಾ, ಕುಕನೂರು, ಕುಷ್ಟಗಿ ಮತ್ತು ಕನಕಗಿರಿ ತಾಲೂಕುಗಳಲ್ಲಿರುವ ೭೬ ಕೆರೆಗಳಿಗೆ ನೀರು ತುಂಬಿಸುವಂತೆ ಶಾಸಕ ಬಸವರಾಜ ರಾಯರಡ್ಡಿ ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವ ರಾಮಲಿಂಗಾರಡ್ಡಿ ಹಾಗೂ ನಾರಾಯಣಪುರ ಕೆಬಿಜೆಎನ್‌ಎಲ್ ಮುಖ್ಯ ಅಭಿಯಂತರರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ವಾಡಿಕೆಗಿಂತ ತೀರಾ ಕಡಿಮೆಯಾಗಿದೆ. ಕೆರೆ, ಹಳ್ಳ-ಕೊಳ್ಳಗಳು ಬತ್ತಿ ಬಾಯ್ದೆರೆದಿವೆ. ಪರಿಣಾಮ ಅಂತರ್ಜಲ ಮಟ್ಟ ಸಂಪೂರ್ಣ ಆಳಕ್ಕೆ ಕುಸಿದಿದ್ದು, ರೈತರ ಕೊಳವೆ ಬಾವಿಯಲ್ಲಿ ನೀರು ಕೂಡ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ. ಮುಂಗಾರಿನಲ್ಲಿ ಬಿತ್ತನೆಗೊಂಡ ಬೆಳೆಗಳು ತೇವಾಂಶ ಕೊರತೆಯಿಂದ ಒಣಗಿವೆ. ಮಳೆಯ ಕೊರತೆಯಿಂದ ಕೆರೆಗಳಿಗೆ ನೀರು ಕೂಡ ಬಂದಿಲ್ಲ. ಹೀಗಾಗಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗಿದೆ. ಕಾರಣ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಎದುರಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಉತ್ತಮ ಮಳೆ: ನೆರೆಯ ಮಹಾರಾಷ್ಟ್ರ ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಆಲಮಟ್ಟಿಯಲ್ಲಿರುವ ಲಾಲ್ ಬಹಾದ್ದೂರ್ ಶಾಸ್ತ್ರೀಜಿ ಜಲಾಶಯ ಭರ್ತಿಯಾಗಿದೆ. ಈ ಜಲಾಶಯದಿಂದ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಲುವಾಗಿ ಕೊಪ್ಪಳ ಜಿಲ್ಲೆಯ ಯಲಬುರ್ಗಾ, ಕುಕನೂರು, ಕುಷ್ಟಗಿ ಮತ್ತು ಕನಕಗಿರಿ ತಾಲೂಕುಗಳ ಕೆರೆಗಳಿಗೆ ಕೂಡಲೇ ನೀರು ತುಂಬಿಸುವಂತೆ ಮನವಿ ಮಾಡಿದ್ದಾರೆ.

೨೦೧೩-೧೭ರಲ್ಲಿ ಅಂದಿನ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಜಿಲ್ಲೆಯ ೭೬ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ರೂಪಿಸಿತ್ತು. ಆದ್ದರಿಂದ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ನಿವಾರಿಸಲು ಜಿಲ್ಲೆಯ ೭೬ ಕೆರೆಗಳಿಗೆ ಆಲಮಟ್ಟಿ ಜಲಾಶಯದಿಂದ ನೀರು ತುಂಬಿಸಲು ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವ ರಾಮಲಿಂಗಾರಡ್ಡಿ ಹಾಗೂ ನಾರಾಯಣಪುರ ಜಲಾಶಯದ ಕೆಬಿಜೆಎನ್‌ಎಲ್‌ನ ಮುಖ್ಯ ಅಭಿಯಂತರರಿಗೆ ಪತ್ರ ಬರೆದಿದ್ದೇನೆ ಎಂದು ಯಲಬುರ್ಗಾ ಶಾಸಕ ಬಸವರಾಜ ರಾಯರಡ್ಡಿ ತಿಳಿಸಿದ್ದಾರೆ.