ಸಾರಾಂಶ
ಕನ್ನಡಪ್ರಭ ವಾರ್ತೆ ಮಡಿಕೇರಿ
ಜಿಲ್ಲೆಯಲ್ಲಿ ಜ.6ರಂದು ಪ್ರಕಟವಾದ ಮತದಾರರ ಅಂತಿಮ ಪಟ್ಟಿಯಂತೆ ಎರಡು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 4,74,376 ಮತದಾರರು ಇದ್ದಾರೆ. ಈ ಪೈಕಿ 552 ಮತಗಟ್ಟೆಗಳಲ್ಲಿ 2,32,042 ಪುರುಷ ಮತ್ತು 2,42,321 ಮಹಿಳಾ ಮತದಾರರು ಇದ್ದು, 13 ಇತರೆ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಭಾವಚಿತ್ರವಿರುವ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಅಕ್ಟೋಬರ್, ನವೆಂಬರ್ ಮತ್ತು ಡಿಸೆಂಬರ್‌ನಲ್ಲಿ ಕೈಗೊಳ್ಳಲಾಗಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ.
ಅಂತಿಮ ಪಟ್ಟಿಯನ್ನು ಜಿಲ್ಲಾ ಚುನಾವಣಾಧಿಕಾರಿ ಕಚೇರಿ, ಉಪ ವಿಭಾಗಾಧಿಕಾರಿ ಕಚೇರಿ, ತಹಸೀಲ್ದಾರರ ಕಚೇರಿ ಮತ್ತು ಎಲ್ಲಾ ಮತಗಟ್ಟೆಗಳಲ್ಲಿ ಜ.6 ರಂದು ಪ್ರಕಟಿಸಲಾಗಿದೆ. ಅಂತಿಮ ಮತದಾರರ ಪಟ್ಟಿಯನ್ನು ಮತದಾರರು ಪರಿಶೀಲಿಸಿ ಹೆಸರು ಪಟ್ಟಿಯಲ್ಲಿ ನೋಂದಣಿಯಾಗಿರುವ ಬಗ್ಗೆ ಖಚಿತ ಪಡಿಸಿಕೊಳ್ಳಲು ಕೋರಿದ್ದಾರೆ.ಪಟ್ಟಿ ಪರಿಷ್ಕರಣೆ:
ಮತದಾರರ ಪಟ್ಟಿ ಪರಿಷ್ಕರಣೆ ಅವಧಿಯಲ್ಲಿ ಜಿಲ್ಲೆಯಲ್ಲಿ ನಮೂನೆ-6 ರಲ್ಲಿ 1549 ಸ್ವೀಕೃತವಾಗಿದ್ದು, 1460 ಅರ್ಜಿಗಳು ಅಂಗೀಕಾರವಾಗಿದೆ. 89 ಅರ್ಜಿಗಳು ತಿರಸ್ಕೃತವಾಗಿವೆ. ನಮೂನೆ-7ರಡಿ 1631 ಅರ್ಜಿಗಳು ಸ್ವೀಕೃತವಾಗಿದ್ದು, 1549 ಅರ್ಜಿಗಳು ಅಂಗೀಕೃತವಾಗಿದೆ. 82 ಅರ್ಜಿಗಳು ತಿರಸ್ಕೃತಗೊಂಡಿವೆ. ನಮೂನೆ-8 ರಲ್ಲಿ 3123 ಅರ್ಜಿಗಳು ಸ್ವೀಕೃತವಾಗಿದ್ದು, 2,871 ಅರ್ಜಿಗಳು ಅಂಗೀಕೃತವಾಗಿದೆ. 252 ಅರ್ಜಿಗಳು ತಿರಸ್ಕೃತಗೊಂಡಿವೆ ಎಂದು ಅವರು ತಿಳಿಸಿದ್ದಾರೆ.ಮತದಾರರ ಪಟ್ಟಿ ಪರಿಷ್ಕರಣೆ ಅವಧಿಯಲ್ಲಿ 18-19 ವರ್ಷದ ಯುವ ಮತದಾರರ ನೋಂದಣಿ ಕುರಿತಂತೆ ನಮೂನೆ-6 ನ್ನು ಸ್ವೀಕರಿಸಲಾಗಿದ್ದು, ಇದರಲ್ಲಿ ಜಿಲ್ಲೆಯಲ್ಲಿ 500 ಅರ್ಜಿಗಳು ಸ್ವೀಕೃತವಾಗಿದ್ದು, ಇದರಲ್ಲಿ 490 ಅರ್ಜಿ ಅಂಗೀಕೃತವಾಗಿದ್ದು, 10 ಅರ್ಜಿ ಅರ್ಜಿಗಳು ತಿರಸ್ಕೃತವಾಗಿವೆ ಎಂದು ಮಾಹಿತಿ ನೀಡಿದ್ದಾರೆ.
ಜ.6 ರಂದು ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯನ್ನು ಅ.29ರಂದು ಪ್ರಕಟಿಸಿದ ಕರಡು ಮತದಾರರ ಪಟ್ಟಿಗೆ ಹೊಲಿಸಿದ್ದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಿಂದ 279 ಮತದಾರರ ಸಂಖ್ಯೆಯಲ್ಲಿ ನಿವ್ವಳ ಬದಲಾವಣೆ ಆಗಿದೆ ಎಂದು ತಿಳಿಸಿದ್ದಾರೆ.ಪ್ರಸ್ತುತ ಮತದಾರರ ಪಟ್ಟಿ ನಿರಂತರ ಪರಿಷ್ಕರಣೆ ನಡೆಯುತ್ತಿದ್ದು, ಈ ಅವಧಿಯಲ್ಲಿ ಮತದಾರರ ಪಟ್ಟ್ಟಿಗೆ ಹೆಸರು ಸೇರಿಸಲು ನಮೂನೆ-6ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಮೃತ, ಸ್ಥಳಾಂತರ, ಪುನರಾವರ್ತನೆ ಆಗಿದ್ದಲ್ಲಿ ಹೆಸರುಗಳನ್ನು ತೆಗೆಯಲು ನಮೂನೆ-7ರಲ್ಲಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
ಮತದಾರರ ಪಟ್ಟಿ ಮತ್ತು ಮತದಾರರ ಗುರುತಿನ ಚೀಟಿಯಲ್ಲಿನ ನಮೂದುಗಳು ತಪ್ಪಾಗಿದ್ದಲ್ಲಿ ತಿದ್ದುಪಡಿ ಮಾಡಲು ಹಾಗೂ ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ವರ್ಗಾವಣೆ ಮಾಡಲು ನಮೂನೆ-8 ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.ನಮೂನೆ-6, 6ಎ, 7 ಮತ್ತು 8 ರ ಅರ್ಜಿಗಳನ್ನು ಭಾರತ ಚುನಾವಣಾ ಆಯೋಗವು ಅಭಿವೃದ್ಧಿ ಪಡಿಸಿರುವ ಮೊಬೈಲ್ ಅಪ್ಲಿಕೇಷನ್ ಮತದಾರರ ಸಹಾಯವಾಣಿ ಆಪ್ ಹಾಗೂ https://voters.eci.gov.in/ / VOTERS’ SERVICE PORTAL ಮೂಲಕ ಆನ್‌ಲೈನ್‌ನಲ್ಲಿ ನೇರವಾಗಿ ಸಲ್ಲಿಸಬೇಕಿದೆ.
ಮತದಾರರ ಪಟ್ಟಿ ಮತ್ತು ಚುನಾವಣೆಯ ಕುರಿತು ಮತದಾರರಿಗೆ ಮಾಹಿತಿ ನೀಡುವ ಸಲುವಾಗಿ ಭಾರತ ಚುನಾವಣಾ ಆಯೋಗವು ಮತದಾರರ ಸಹಾಯವಾಣಿ ಆಪ್ ಮೊಬೈಲ್ ಅಪ್ಲಿಕೇಷನ್ ಅಭಿವೃದ್ಧಿ ಪಡಿಸಿದ್ದು, ಎಲ್ಲಾ ಮತದಾರರು/ ನಾಗರಿಕರು ತಮ್ಮ ಮೊಬೈಲ್‌ನಲ್ಲಿ ಮತದಾರರ ಸಹಾಯವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಲು ಕೋರಿದೆ.ಹೆಚ್ಚಿನ ಮಾಹಿತಿಗೆ ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ ಮತ್ತು ತಹಸೀಲ್ದಾರ್ ಕಚೇರಿಯನ್ನು ಸಂಪರ್ಕಿಸಬಹುದು ಹಾಗೂ www.ceokarnataka.kar.nic.in ವೆಬ್‌ಸೈಟ್‌ನಲ್ಲಿಯೂ ಸಹ ಹೆಚ್ಚಿನ ಮಾಹಿತಿ ಲಭ್ಯವಿದ್ದು, ಮಾಹಿತಿ ಪಡೆಯಬಹುದು.
ಸೇವಾ ಮತದಾರರ ಪಟ್ಟಿ ಪ್ರಕಟಣೆ:ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕೊಡಗು ಜಿಲ್ಲೆಯ 208-ಮಡಿಕೇರಿ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಸೇವಾ ಮತದಾರರ ಅಂತಿಮ ಪಟ್ಟಿಯನ್ನು ಜ.6 ರಂದು ಪ್ರಕಟಿಸಲಾಗಿದ್ದು, ಕೊಡಗು ಜಿಲ್ಲೆಯಲ್ಲಿ 1343 ಸೇವಾ ಮತದಾರರು ಇದ್ದಾರೆ. ಇದರಲ್ಲಿ 1,284 ಪುರುಷ ಮತ್ತು 59 ಮಹಿಳಾ ಸೇವಾ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.