ಸಾರಾಂಶ
ಎರಡು ವರ್ಷದ ಹಿಂದೆ ನಗರದಲ್ಲಿ ನಡೆದಿದ್ದ ಬಿಜೆಪಿಯ ಪ್ರತಿಭಟನೆ ವೇಳೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಮಂಡ್ಯ
ಎರಡು ವರ್ಷದ ಹಿಂದೆ ನಗರದಲ್ಲಿ ನಡೆದಿದ್ದ ಬಿಜೆಪಿಯ ಪ್ರತಿಭಟನೆ ವೇಳೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.ಈ ಸಂಬಂಧ ಕಾಂಗ್ರೆಸ್ ಮುಖಂಡ ಕನ್ನಂಬಾಡಿ ಕುಮಾರ್ ನೀಡಿದ ದೂರಿನ ಮೇರೆಗೆ ಬಿಜೆಪಿ ಕಾರ್ಯಕರ್ತರಾದ ಶಿವಕುಮಾರ್ ಆರಾದ್ಯ ಹಾಗೂ ರವಿ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.
ಈ ಮಧ್ಯೆ, ತಮ್ಮ ವಿರುದ್ಧ ಪ್ರಕರಣ ದಾಖಲಿಸಿರುವುದಕ್ಕೆ ಶಿವಕುಮಾರ್ ಆರಾಧ್ಯ ಆಕ್ರೋಶ ವ್ಯಕ್ತಪಡಿಸಿದ್ದು, ಅಂದು ನಾನು ಊರಿನಿಂದ ಮಂಡ್ಯಕ್ಕೆ ಬರುವಷ್ಟರಲ್ಲಿ ಪ್ರತಿಭಟನೆಯೇ ಮುಗಿದು ಹೋಗಿತ್ತು. ಆದರೂ, ನನ್ನ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಕಿಡಿಕಾರಿದ್ದಾರೆ. ಮೋದಿ ವಿರುದ್ಧ ಪಾಕಿಸ್ತಾನ ನೀಡಿದ್ದ ಅವಹೇಳನಕಾರಿ ಹೇಳಿಕೆ ವಿರೋಧಿಸಿ, 2022ರ ಡಿಸೆಂಬರ್‌ನಲ್ಲಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ, ಈ ಇಬ್ಬರು ಕಾರ್ಯಕರ್ತರು, ಬಾಯಿ ತಪ್ಪಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು ಎನ್ನಲಾಗಿದೆ.