ಕನ್ನಡಪ್ರಭ ವಾರ್ತೆ ಚಿಕ್ಕೋಡಿಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕ್ ನೌಕರರ ನೇಮಕಾತಿಯಲ್ಲಿ ಮಧ್ಯವರ್ತಿಯಾಗಿ ಹಣದ ಬೇಡಿಕೆಯಿಟ್ಟಿದ್ದ ವೈರಲ್ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿಪ್ಪಾಣಿ ಉಪ ತಹಶೀಲ್ದಾರ್ ಅರುಣ ಶ್ರೀಖಂಡೆ ಅವರ ವಿರುದ್ಧ ನಿಪ್ಪಾಣಿ ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಿಸಲಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಚಿಕ್ಕೋಡಿ

ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕ್ ನೌಕರರ ನೇಮಕಾತಿಯಲ್ಲಿ ಮಧ್ಯವರ್ತಿಯಾಗಿ ಹಣದ ಬೇಡಿಕೆಯಿಟ್ಟಿದ್ದ ವೈರಲ್ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿಪ್ಪಾಣಿ ಉಪ ತಹಶೀಲ್ದಾರ್ ಅರುಣ ಶ್ರೀಖಂಡೆ ಅವರ ವಿರುದ್ಧ ನಿಪ್ಪಾಣಿ ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಿಸಲಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಹೇಳಿದ್ದಾರೆ.

ಹಾಲಸಿಧ್ಧನಾಥ ಸಕ್ಕರೆ ಕಾರ್ಖಾನೆಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ ಅವರು, ನೇಮಕಾತಿಯಲ್ಲಿ ತಮ್ಮ ಹೆಸರನ್ನು ದುರ್ಬಳಕೆ ಮಾಡಿಕೊಂಡು ಹಣದ ಬೇಡಿಕೆ ಇಟ್ಟಿದ್ದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರವಾಗಿ ವೈರಲ್ ಆದ ಹಿನ್ನೆಲೆಯಲ್ಲಿ ಈ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಡಿಸಿಸಿ ಬ್ಯಾಂಕ್‌ನ ನೌಕರರ ನೇಮಕಾತಿ ಪ್ರಕ್ರಿಯೆಯು ಸಂಪೂರ್ಣವಾಗಿ ನಿಯಮಾನುಸಾರ ಮತ್ತು ಪಾರದರ್ಶಕವಾಗಿ ನಡೆಯುತ್ತದೆ. ಅಧಿಕೃತವಾಗಿ ಅರ್ಜಿಗಳನ್ನು ಆಹ್ವಾನಿಸಿ, ಪರೀಕ್ಷೆ ಹಾಗೂ ಸಂದರ್ಶನಗಳ ಮೂಲಕವೇ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಮಹಾರಾಷ್ಟ್ರ ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸುವ ಮಧ್ಯವರ್ತಿಗಳು ಹಾಗೂ ಏಜೆಂಟರು ಅಭ್ಯರ್ಥಿಗಳನ್ನು ವಂಚಿಸಿ ಹಣ ಪಡೆಯುವ ಜಾಲ ಹೊಂದಿದ್ದಾರೆ. ಆದ್ದರಿಂದ ಸಾರ್ವಜನಿಕರು ಹಾಗೂ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಇಂತಹ ಮಧ್ಯವರ್ತಿಗಳ ಮಾತುಗಳನ್ನು ನಂಬಿ ಹಣ ನೀಡಿ ಮೋಸ ಹೋಗಬಾರದು ಎಂದು ಅವರು ಮನವಿ ಮಾಡಿದ್ದಾರೆ.