ಕನ್ನಡಪ್ರಭ ವಾರ್ತೆ ಬೆಂಗಳೂರು

ಬೇಗೂರಿನ ಕಸ ವಿಂಗಡಣೆ ಡಂಪಿಂಗ್ ಯಾರ್ಡ್‌ನಲ್ಲಿ ಶುಕ್ರವಾರ ಅಗ್ನಿ ಅವಘಡ ಸಂಭವಿಸಿ ಕಸ ಸಂಗ್ರಹಣೆಯ ಲಾರಿ, ಆಟೋ ಸೇರಿದಂತೆ ಕೆಲ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಬೆಳಗ್ಗೆ 10.30ರ ಸುಮಾರಿಗೆ ಡಂಪಿಂಗ್‌ ಯಾರ್ಡ್‌ನಲ್ಲಿ ಕಸದ ರಾಶಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬೆಂಕಿ ಹೆಚ್ಚಾಗಿ ದಟ್ಟ ಹೊಗೆ ಆವರಿಸಿದ್ದರಿಂದ ಸುತ್ತಮುತ್ತಲ ನಿವಾಸಿಗಳಲ್ಲಿ ಕೆಲಕಾಲ ಆತಂಕ ಮೂಡಿಸಿತ್ತು. ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ ಹುಳಿಮಾವು ಅಗ್ನಿಶಾಮಕ ದಳದ ಸಿಬ್ಬಂದಿ ಸುಮಾರು ಮೂರು ಗಂಟೆಗಳಿಗೂ ಹೆಚ್ಚು ಕಾಲ ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ.

ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ, ಶಾರ್ಟ್ ಸರ್ಕ್ಯೂಟ್ ಅಥವಾ ಕಿಡಿಗೇಡಿಗಳು ಯಾರೋ ಬೆಂಕಿ ಹಚ್ಚಿರಬಹುದು ಎಂದು ಶಂಕಿಸಲಾಗಿದ್ದು ತನಿಖೆ ಕೈಗೊಳ್ಳಲಾಗಿದೆ. ಡಂಪಿಂಗ್ ಯಾರ್ಡ್ ಮೊದಲಿನಿಂದಲೂ ವಿವಾದದ ಕೇಂದ್ರವಾಗಿದ್ದು, ಇಲ್ಲಿ ಅವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮಾಡಲಾಗುತ್ತಿದೆ. ಡಂಪಿಂಗ್ ಯಾರ್ಡ್ ಸ್ಥಳಾಂತರ ಮಾಡಬೇಕೆಂದು ಸ್ಥಳೀಯರು ಹಲವು ದಿನಗಳಿಂದ ಒತ್ತಾಯಿಸುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಶಾಸಕ ಎಂ.ಕೃಷ್ಣಪ್ಪ ಆಗಮಿಸಿ ಘಟನೆಯ ವಿವರ ಪಡೆದು ಡಂಪಿಂಗ್ ಯಾರ್ಡ್ ಸ್ಥಳಾಂತರ ಮಾಡಬೇಕು. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸುವಂತೆ ತ್ಯಾಜ್ಯ ವಿಲೇವಾರಿ ಘಟಕದ ಎಜಿಎಂ ಸೌಮ್ಯ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದರು.