ಎಕ್ಸ್ಪೋಗೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಸಮಾಜ ಬಾಂಧವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಕನ್ನಡಪ್ರಭ ವಾರ್ತೆ ಹಾಸನ
ನಗರದಲ್ಲಿ ಮೊದಲ ಬಾರಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಜಿಲ್ಲಾ ವೀರಶೈವ ಲಿಂಗಾಯತ ಸಂಘದ ಸಂಯುಕ್ತಾಶ್ರಯದಲ್ಲಿ ವೀರಶೈವ ಲಿಂಗಾಯತ ಬಿಸಿನೆಸ್ ಎಕ್ಸ್ಪೋ-2026 ಅನ್ನು ಮೇ 16 ಮತ್ತು 17ರಂದು ಆಯೋಜಿಸಲಾಗಿದೆ ಎಂದು ಮಹಾಸಭಾ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಸಂಗಂ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ನಗರದ ಅರಳೆಪೇಟೆಯ ಬಸವೇಶ್ವರ ದೇವಾಲಯದ ಆವರಣದಲ್ಲಿ ಬೆಳಗ್ಗೆ 10ರಿಂದ ರಾತ್ರಿ 10ರವರೆಗೆ ಎರಡು ದಿನಗಳ ಕಾಲ ಎಕ್ಸ್ಪೋ ನಡೆಯಲಿದ್ದು, ಸಮಾಜದ ಉದ್ಯಮಿಗಳು, ವ್ಯಾಪಾರಸ್ಥರು, ಸ್ವ- ಉದ್ಯೋಗಿಗಳು ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಇದು ಉತ್ತಮ ವೇದಿಕೆಯಾಗಲಿದೆ ಎಂದರು.
ಕಾರ್ಯಕ್ರಮವನ್ನು ಹಳೇಬೀಡು ಶ್ರೀ ಪುಷ್ಪಗಿರಿ ಮಹಾಸಂಸ್ಥಾನಮಠದ ಶ್ರೀ ಶ್ರೀ ಸೋಮಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಹಾಗೂ ಹಿರಿಯ ಚಲನಚಿತ್ರ ನಟ ದೊಡ್ಡಣ್ಣ ಉದ್ಘಾಟಿಸಲಿದ್ದಾರೆ. ಸಮಾಜದ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಬಲವರ್ಧನೆಗೆ ಪೂರಕವಾಗುವ ಉದ್ದೇಶದಿಂದ ಈ ಬಿಸಿನೆಸ್ ಎಕ್ಸ್ಪೋವನ್ನು ಆಯೋಜಿಸಲಾಗುತ್ತಿದೆ ಎಂದರು.ಎಕ್ಸ್ಪೋದಲ್ಲಿ ವೀರಶೈವ ಲಿಂಗಾಯತ ಸಮುದಾಯದ ವಧು- ವರರ ನೋಂದಣಿ ಮತ್ತು ಮಾಹಿತಿ ಕೇಂದ್ರ ತೆರೆಯಲಾಗಿದ್ದು, ಮದುವೆ ಸಂಬಂಧಿತ ಮಾಹಿತಿ ವಿನಿಮಯಕ್ಕೆ ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಡಾ. ಕೆ.ವಿ. ವೈಭವ್ ಕೆಂಚಂಬಾ ಅವರಿಂದ ಉಚಿತ ದಂತ ತಪಾಸಣೆ ಹಾಗೂ ಡಾ. ರಾಕೇಶ್ ನೇತೃತ್ವದ ರಾಕೇಶ್ ನೇತ್ರಾಲಯದಿಂದ ಉಚಿತ ನೇತ್ರ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ಹೇಳಿದರು.
ಯುವಜನತೆಗೆ ಉದ್ಯೋಗ ಮಾರ್ಗದರ್ಶನ ನೀಡುವ ಉದ್ದೇಶದಿಂದ ಬೆಂಗಳೂರಿನ ಸುರಕ್ಷಾ ಕೆರಿಯರ್ ಅಕಾಡೆಮಿ ವತಿಯಿಂದ ಉದ್ಯೋಗಾವಕಾಶಗಳು, ಕೌಶಲ್ಯಾಭಿವೃದ್ಧಿ ಹಾಗೂ ಉದ್ಯೋಗ ನಿಯೋಜನೆ ಕುರಿತ ಮಾಹಿತಿ ನೀಡಲಾಗುವುದು. ವಿವಿಧ ಉದ್ಯಮ, ವ್ಯಾಪಾರ, ಸ್ವ- ಉದ್ಯೋಗ, ಸ್ಟಾರ್ಟ್ಅಪ್ ಮತ್ತು ವಾಣಿಜ್ಯ ಚಟುವಟಿಕೆಗಳಿಗೆ ಸಂಬಂಧಿಸಿದ ಅನೇಕ ಮಳಿಗೆಗಳು ಎಕ್ಸ್ಪೋದಲ್ಲಿ ಭಾಗವಹಿಸಲಿವೆ ಎಂದು ತಿಳಿಸಿದರು. ಎರಡೂ ದಿನಗಳ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಮನರಂಜನಾ ಕಾರ್ಯಕ್ರಮಗಳು ಹಾಗೂ ವಿಶೇಷ ಆಹಾರ ಮೇಳವೂ ನಡೆಯಲಿದ್ದು, ಕುಟುಂಬ ಸಮೇತರಾಗಿ ಭಾಗವಹಿಸುವವರಿಗೆ ಆಕರ್ಷಕ ವಾತಾವರಣ ನಿರ್ಮಾಣವಾಗಲಿದೆ ಎಂದು ಮಾಹಿತಿ ನೀಡಿದರು.ಎಕ್ಸ್ಪೋಗೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಸಮಾಜ ಬಾಂಧವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ವೀರಶೈವ ಲಿಂಗಾಯತ ಸಂಘದ ಜಿಲ್ಲಾಧ್ಯಕ್ಷ ಬಿ.ಪಿ. ಐಸಾಮಿಗೌಡ, ಕಟ್ಟಾಯ ಶಿವಕುಮಾರ್, ಮಮತಾ ಪಾಟೀಲ್, ಮಧು, ಧನಲಕ್ಷ್ಮೀ ಇತರರು ಉಪಸ್ಥಿತರಿದ್ದರು.