ಪಂಚ ಗ್ಯಾರಂಟಿ ಜನರಿಗೆ ತಲುಪಿಸಿ: ಶಿವಾನಂದ ಭೂಮಣ್ಣವರ

| Published : Jan 04 2025, 12:30 AM IST

ಸಾರಾಂಶ

ರಾಜ್ಯ ಸರ್ಕಾರದ ಮಹಾತ್ವಕಾಂಕ್ಷೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಲು ಅಧಿಕಾರಿಗಳು ಮುಂದಾಗಬೇಕು. ಅನ್ನಭಾಗ್ಯ ಯೋಜನೆಯಡಿ ಜನರಿಗೆ ಸಮಪರ್ಕವಾಗಿ ಪಡಿತರ ವಿತರಿಸುವ ಹೊಣೆ ಸಂಬಂಧಪಟ್ಟ ಅಧಿಕಾರಿಗಳ ಮೇಲಿದೆ.

ಹುಬ್ಬಳ್ಳಿ:

ರಾಜ್ಯ ಸರ್ಕಾರದ ಮಹಾತ್ವಕಾಂಕ್ಷೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಹುಬ್ಬಳ್ಳಿ ಗ್ರಾಮೀಣ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಾನಂದ ಭೂಮಣ್ಣವರ ಹೇಳಿದರು.

ಇಲ್ಲಿನ ತಾಲೂಕು ಆಡಳಿತ ಸೌಧದ ತಾಲೂಕು ಪಂಚಾಯಿತಿಯಲ್ಲಿ ಗುರುವಾರ ನಡೆದ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಅನ್ನಭಾಗ್ಯ ಯೋಜನೆಯಡಿ ಜನರಿಗೆ ಸಮಪರ್ಕವಾಗಿ ಪಡಿತರ ವಿತರಿಸುವ ಹೊಣೆ ಸಂಬಂಧಪಟ್ಟ ಅಧಿಕಾರಿಗಳ ಮೇಲಿದೆ. ಸರ್ಕಾರದಿಂದ ಉಚಿತವಾಗಿ ಪಡಿತರ ನೀಡಲಾಗುತ್ತದೆ. ಅದರಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆಯದಂತೆ ಎಚ್ಚರಿಕೆ ವಹಿಸಬೇಕು. ಈಗಾಗಲೇ ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಮತ್ತು ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಹೊಸ ಪಡಿತರ ಚೀಟಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗುವುದು ಎಂದರು.

ಗೃಹಲಕ್ಷ್ಮಿ ಯೋಜನೆಯು ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ದಾರಿದೀಪವಾಗಿದೆ. ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬಸ್ ವ್ಯವಸ್ಥೆ ಕಲ್ಪಿಸಬೇಕು. ಗೃಹ ಜ್ಯೋತಿ ಯೋಜನೆಯಿಂದ ಗ್ರಾಮೀಣ ಭಾಗದ ಜನರಿಗೆ ಬಹಳಷ್ಟು ಅನುಕೂಲವಾಗಿದೆ. ಮಳೆಗಾಲದ ನಂತರ ಕಂಬಗಳು ಉರುಳುವ ಸಾಧ್ಯತೆ ಹೆಚ್ಚಾಗಿರುತ್ತದೆ. ಹೀಗಾಗಿ ವಿದ್ಯುತ್ ಕಂಬಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಯುವನಿಧಿ ಯೋಜನೆಯಡಿ ಅರ್ಹ ಫಲಾನುಭವಿಗಳು ನೋಂದಣಿ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ವರದಿ ವಾಚಿಸಿದರು. ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ್‌ ಜೆ.ಬಿ. ಮಜ್ಜಗಿ, ತಾಪಂ ಇಒ ಯಶವಂತ ಕುಮಾರ, ಅನುಷ್ಠಾನ ಸಮಿತಿ ಸದಸ್ಯರಾದ ಪ್ರದೀಪ ದ್ಯಾಮಕ್ಕನವರ, ಮಂಜುನಾಥ ಗಾಣಿಗೇರ, ರಜೆಯದ್ದೀನ ಮುಲ್ಲಾ, ಶಿವಕ್ಕ ಬಂಗಾರಬಳಿ, ಮಲ್ಲಿಕಾರ್ಜುನಗೌಡ ಭರಮಗೌಡ್ರ, ಸಿದ್ಧಾರ್ಥ ಮಲ್ಲಮ್ಮನವರ, ಸುರೇಶ ಸಾಳ ಸೇರಿದಂತೆ ಹಲವರಿದ್ದರು.