ವಿಜಯನಗರ, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಸಂಬಂಧಿಸಿದ ಮರಿಯಮ್ಮನ ಹಳ್ಳಿಯಿಂದ ಶಿವಮೊಗ್ಗದವರೆಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಹು ದಿನಗಳಿಂದ ನನೆಗುದಿಗೆ ಬಿದ್ದಿದೆ. ಈ ಕಾಮಗಾರಿ ಪೂರ್ಣಗೊಳಿಸುವಂತೆ ಅನೇಕ ಬಾರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರೂ ಆಗಿಲ್ಲ. ಇದು ಪೂರ್ಣಗೊಳ್ಳಲು ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವೇ ಬರಬೇಕಾಗಬಹುದು ಎಂದು ಸಂಸದೆ ಡಾ, ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.

- ಅರಬಗಟ್ಟೆಯಲ್ಲಿ ಜಿಲ್ಲಾ ಅಭಿವೃದ್ದಿ ಸಮನ್ವಯ- ಉಸ್ತುವಾರಿ ಸಮಿತಿ ಪ್ರಗತಿ ಪರಿಶೀಲನಾ ಸಭೆ

- - -

ಕನ್ನಡಪ್ರಭ ವಾರ್ತೆ ಹೊನ್ನಾಳಿ

ವಿಜಯನಗರ, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಸಂಬಂಧಿಸಿದ ಮರಿಯಮ್ಮನ ಹಳ್ಳಿಯಿಂದ ಶಿವಮೊಗ್ಗದವರೆಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಹು ದಿನಗಳಿಂದ ನನೆಗುದಿಗೆ ಬಿದ್ದಿದೆ. ಈ ಕಾಮಗಾರಿ ಪೂರ್ಣಗೊಳಿಸುವಂತೆ ಅನೇಕ ಬಾರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರೂ ಆಗಿಲ್ಲ. ಇದು ಪೂರ್ಣಗೊಳ್ಳಲು ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವೇ ಬರಬೇಕಾಗಬಹುದು ಎಂದು ಸಂಸದೆ ಡಾ, ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ತಾಲೂಕಿನ ಅರಬಗಟ್ಟೆ ಗ್ರಾಮದ ಶ್ರೀಮತಿ ಇಂದಿರಾಗಾಂಧಿ ವಸತಿಯುವತ ಶಾಲಾ ರಂಗಮಂದಿರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ನಾರ್ಮಲ್ ಹೆರಿಗೆಗಳ ಸಂಖ್ಯೆ ಕಡಿಮೆ ಇದ್ದು, ಸೀಸರಿಯನ್ ಹೆರಿಗೆಗಳೇ ಹೆಚ್ಚಾಗುತ್ತಿವೆ. ಮುಂದಿನ ದಿನಗಳಲ್ಲಿ ಇದು ಬದಲಾಗಬೇಕು. ನಾರ್ಮಲ್ (ಸಹಜ) ಹೆರಿಗೆಗಳ ಸಂಖ್ಯೆ ಹೆಚ್ಚಾಗಬೇಕು. ವೈದ್ಯರು ಸಹಜ ಹೆರಿಗೆ ಮಾಡಿಸುವ ಬಗ್ಗೆ ತಲೆಕೆಡಿಸಿಕೊಳ್ಳದೇ ನೇರವಾಗಿ ಸೀಸರಿಯನ್‌ಗೆ ಹೋಗುವ ಪರಿಪಾಠವಿದೆ. ಇದು ಬದಲಾಗಿ ನಾರ್ಮಲ್ ಹೆರಿಗೆಗಳ ಕಡೆಗೆ ಹೆಚ್ಚು ಗಮನಹರಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

ಇದಕ್ಕೆ ಧ್ವನಿಗೊಡಿಸಿದ ಶಾಸಕ ಡಿ.ಜಿ. ಶಾಂತನಗೌಡ, ಸಾಸ್ವೇಹಳ್ಳಿ ಮತ್ತು ಹೊನ್ನಾಳಿ ಆಸ್ಪತ್ರೆಗಳಲ್ಲಿ ವೈದ್ಯರು ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಆಸ್ಪತ್ರೆಗೆ ಬಂದರೂ ರೋಗಿಗಳಿಗೆ ಔಷಧಿ ಚೀಟಿಗಳನ್ನು ಬರೆದು ಹೊರಗಡೆ ಔಷಧಿ ಅಂಗಡಿಗಳಿಗೆ ತೆರಳಿ ತರುವಂತೆ ಹೇಳುತ್ತಿದ್ದಾರೆ. ಈ ಬಗ್ಗೆ ಅನೇಕ ಸಾರ್ವಜನಿಕರು ತಮ್ಮ ಬಳಿ ದೂರಿದ್ದಾರೆ ಎಂದು ಹೇಳಿದರು.

ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಹೆಚ್ಚುವರಿ ಎಸ್‌ಪಿ ಪರಮೇಶ್ವರ ಹೆಗಡೆ ಅವರು 788 ವಿವಿಧ ಕ್ರಿಮಿನಲ್ ಪ್ರಕರಣ ದಾಖಲಾಗಿದ್ದು, 24 ಜನರ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಪೈಕಿ 8 ಜನರನ್ನು ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ಜಿಲ್ಲೆಯಲ್ಲಿ ಜೂಜು, ಮಟ್ಕಾ ಮುಂತಾದ ಕಾನೂನುಬಾಹಿರ ಚಟುವಟಿಕಗಳ ವಿರುದ್ಧ ಒಟ್ಟು 14923 ಪ್ರಕರಣ ದಾಖಲಾಗಿವೆ. 913 ಅಪಘಾತ ಪ್ರಕರಣಗಳು, ಇದರಲ್ಲಿ 226 ಜೀವಹಾನಿಯಾಗಿದೆ ಎಂದು ಹೇಳಿದರು.

ಈ ಹಂತದಲ್ಲಿ ಮಧ್ಯ ಪ್ರವೇಶಿಸಿ ಮಾತನಾಡಿದ ಶಾಸಕ ಡಿ.ಜಿ.ಶಾಂತನಗೌಡ ಅವರು ಜೂಜಾಟ, ಮಟ್ಕಾ, ಇಸ್ಪೀಟ್ ಮುಂತಾದ ಚಟುವಟಿಕೆಗಳು ತಾಲೂಕಿನ ಗಡಿ ಭಾಗದಲ್ಲಿ ಹೆಚ್ಚು ನಡೆಯುತ್ತಿವೆ ಎಂದು ಹೇಳಿದರು.

ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಕುಡಿಯುವ ನೀರಿನ ಬಗ್ಗೆ ಪ್ರಸ್ತಾಪಿಸಿ, ಈ ಬಾರಿ ತೀವ್ರ ಬರಗಾಲವಿದ್ದು ಸಂಬಂಧಪಟ್ಟ ಅಧಿಕಾರಿಗಳು ಕುಡಿಯುವ ನೀರಿನ ಪೊರೈಕೆ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ನೀರಿನ ಟ್ಯಾಂಕ್‌ಗಳನ್ನು ಪ್ರತಿದಿನ ಗಮನಿಸಿ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಿಬೇಕು. ಈ ಬಗ್ಗೆ ಗ್ರಾಮ ಪಂಚಾಯಿತಿಗಳ ಪಿ.ಡಿ.ಒ.ಗಳು ನಿರಂತರ ಪರಿವೀಕ್ಷಣೆ ನಡೆಸಬೇಕು ಎಂದು ತಾಕೀತು ಮಾಡಿದರು. ಜಿಲ್ಲೆಯಲ್ಲಿ ಒಟ್ಟು 32 ಗ್ರಾಮಗಳಲ್ಲಿ ಟ್ಯಾಂಕರ್ ಮತ್ತು ಖಾಸಗಿ ಬೋರ್‌ವೆಲ್‌ಗಳ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಸಭೆಯಲ್ಲಿದ್ದ ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಈ ಬಗ್ಗೆ ಮಾತನಾಡಿ ಎಸ್.ಡಿ.ಆರ್.ಎಫ್., ಮತ್ತು ಎನ್. ಡಿ.ಆರ್.ಎಫ್, ಅನುದಾನ ಬಳಸಿಕೊಂಡು ಅಧಿಕಾರಿಗಳು ಕುಡಿಯುವ ನೀರಿನ ಬಗ್ಗೆ ವ್ಯತ್ಯಾಸ ಆಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಕೃಷಿ, ತೋಟಗಾರಿಗೆ, ಶಿಕ್ಷಣ, ಅರಣ್ಯ, ಲೋಕೋಪಯೋಗಿ ಇಲಾಖೆ, ರೇಷ್ಮೆ, ವಿಬಿ ಜಿ ರಾಮ್ ಜಿ ಯೋಜನೆ, ಜಲಜೀವನ್ ಮೀಷನ್, ಆಯುಷ್ಯ ಇಲಾಖೆ, ನಬಾರ್ಡ್ ಬ್ಯಾಂಕ್, ಸಾರಿಗೆ, ಆರೋಗ್ಯ ವಿವಿಧ ಪಿಂಚಣೆಗಳ ಕುರಿತು ಪ್ರಗತಿ ಪರಿಶೀಲಿಸಲಾಯಿತು.

ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿ.ಪಂ. ಕಾರ್ಯನಿರ್ವಹಣಾಧಿಕಾರಿ ಸಾಹಿತ್ಯ ಆಲದಕಟ್ಟೆ, ಜಿಲ್ಲಾ ಅರಣ್ಯ ಇಲಾಖೆ ಅಧಿಕಾರಿ ಹರ್ಷವರ್ಧನ ಸೇರಿದಂತೆ ಜಿಲ್ಲಾ ಮತ್ತು ತಾಲೂಕುಮಟ್ಟದ ಅಧಿಕಾರಿಗಳು ಇದ್ದರು.

ಇದೇ ಸಂದರ್ಭದಲ್ಲಿ ವಿವಿಧ ಸ್ತ್ರಿಶಕ್ತಿ ಸ್ವಸಹಾಯ ಸಂಘಗಳಿಗೆ ಪ್ರೋತ್ಸಾಹಧನದ ಚೆಕ್ ಹಾಗೂ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಅನೇಕ ಫಲಾನುಭವಿಗಳಿಗೆ ಆದೇಶದ ಪ್ರತಿಗಳನ್ನು ವಿತರಿಸಲಾಯಿತು.

- - -

-16ಎಚ್.ಎಲ್.ಐ1:

ಅರಬಗಟ್ಟೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ದಿಶಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮಾತನಾಡಿದರು. ಶಾಸಕ ಡಿ.ಜಿ. ಶಾಂತನಗೌಡ, ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ, ಜಿಪಂ ಸಿಇಒ ಸಾಹಿತ್ಯ ಆಲದಕಟ್ಟೆ, ಎಎಸ್‌ಪಿ ಪರಮೇಶ್ವರ ಹೆಗಡೆ ಮುಂತಾದವರು ಇದ್ದರು.