ದಮನಿತ ಮಹಿಳೆಯರ ಸಬಲೀಕರಣಕ್ಕೆ ಗಮನಹರಿಸಿ

| Published : Jan 05 2025, 01:33 AM IST

ಸಾರಾಂಶ

ಶಿವಮೊಗ್ಗ: ಜಿಲ್ಲೆಯಲ್ಲಿನ ಲಿಂಗತ್ವ ಅಲ್ಪಸಂಖ್ಯಾತರು, ದಮನಿತ ಮಹಿಳೆಯರು ಹಾಗೂ ದೇವದಾಸಿ ಮಹಿಳೆಯರ ಸಬಲೀಕರಣಕ್ಕೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಗಮನಹರಿಸುವಂತೆ ಹಾಗೂ ಮಾನವೀಯ ನೆಲೆಯಲ್ಲಿ ಸಹಕರಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪದ್ಮಾವತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಿವಮೊಗ್ಗ: ಜಿಲ್ಲೆಯಲ್ಲಿನ ಲಿಂಗತ್ವ ಅಲ್ಪಸಂಖ್ಯಾತರು, ದಮನಿತ ಮಹಿಳೆಯರು ಹಾಗೂ ದೇವದಾಸಿ ಮಹಿಳೆಯರ ಸಬಲೀಕರಣಕ್ಕೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಗಮನಹರಿಸುವಂತೆ ಹಾಗೂ ಮಾನವೀಯ ನೆಲೆಯಲ್ಲಿ ಸಹಕರಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪದ್ಮಾವತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಇಲಾಖಾ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ಮಾಹಿತಿ ಪಡೆದರಲ್ಲದೇ, ಇಲಾಖೆಯ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಮಾಲೋಚನೆ ನಡೆಸಿದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅನುಷ್ಠಾನಗೊಳ್ಳುವ ವಿವಿಧ ಯೋಜನೆಗಳಲ್ಲಿ ಫಲಾನುಭವಿಗಳಿಗೆ ಹೆಚ್ಚಿನ ಸೌಲಭ್ಯ ಒದಗಿಸಲು ಅನುಕೂಲವಾಗುವಂತೆ ಪ್ರಸಕ್ತ ಸಾಲಿನಲ್ಲಿ ಬಿಡುಗಡೆಯಾಗುವ ಅನುದಾನಕ್ಕಿಂತ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಂದಿನ ಬಜೆಟ್‌ನಲ್ಲಿ ಹಣ ಕಾಯ್ದಿರಿಸುವ ಬಗ್ಗೆ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.ವಸತಿ ರಹಿತ ಲಿಂಗತ್ವ ಅಲ್ಪಸಂಖ್ಯಾತರು, ದಮನಿತ ಮಹಿಳೆಯರು ಹಾಗೂ ದೇವದಾಸಿ ಮಹಿಳೆಯರು ನೆಮ್ಮದಿಯ ಬದುಕನ್ನು ರೂಪಿಸಿಕೊಳ್ಳಲು ಹಾಗೂ ಸ್ವತಂತ್ರ ವಸತಿ ಗೃಹವನ್ನು ನಿರ್ಮಿಸಿಕೊಳ್ಳಲು ಸರ್ಕಾರದ ಸೌಲಭ್ಯಕ್ಕಾಗಿ ದಶಕಗಳಿಂದ ಕಚೇರಿಯಿಂದ ಕಚೇರಿಗೆ ಅಲೆಯುತ್ತಿರುವ ಬಗ್ಗೆ ದೂರುಗಳಿವೆ. ಈ ವಸತಿ ಯೋಜನೆಗಳಲ್ಲಿನ ಕೆಲವು ಕಠಿಣ ನಿಯಮಗಳು ಅರ್ಹ ಫಲಾನುಭವಿಗಳು ಸೌಲಭ್ಯ ಹೊಂದಲು ಕಷ್ಟಸಾಧ್ಯವಾಗಿದೆ. ಈ ನಿಯಮಗಳಲ್ಲಿ ಸಡಿಲಿಕೆ ತರುವಂತೆ ಮುಖ್ಯಮಂತ್ರಿಗಳು ಹಾಗೂ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರೊಂದಿಗೆ ಶೀಘ್ರದಲ್ಲಿ ಸಮಾಲೋಚನೆ ನಡೆಸುವುದಾಗಿ ಹಾಗೂ ಈ ಯೋಜನೆಯಡಿ ಸೌಲಭ್ಯ ಹೊಂದಲು ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ದೇವದಾಸಿ ಮಹಿಳೆಯರಿಗೆ ಆದ್ಯತೆ ನೀಡುವುದಾಗಿ ಅವರು ತಿಳಿಸಿದರು.ವಿಶೇಷವಾಗಿ ಲಿಂಗತ್ವ ಅಲ್ಪಸಂಖ್ಯಾತರು ಯಾವುದೇ ಅಡ್ಡಿ ಆತಂಕಗಳಿಲ್ಲದೆ ಸಾಮಾಜಿಕವಾಗಿ ನೆಮ್ಮದಿಯಿಂದ ಜೀವಿಸಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ ಆಶ್ರಯತಾಣಗಳನ್ನು ನಿರ್ಮಿಸಿ, ಅವರಿಗೆ ಊಟ, ವಸತಿ ಸೇರಿದಂತೆ ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಉದ್ದೇಶಿಸಲಾಗಿದೆ ಎಂದರು.ರಾಜ್ಯದಲ್ಲಿ ಆಸಿಡ್ ದಾಳಿಯಿಂದ ನೊಂದ 53 ಸಂತ್ರಸ್ತ ಮಹಿಳೆಯರಿಗೆ ವಸತಿ ಸೌಲಭ್ಯ ಕಲ್ಪಿಸಿಕೊಡಲು ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು. ಇಲಾಖೆಯಿಂದ ರೂಪಿಸಿ, ಅನುಷ್ಠಾನಗೊಳಿಸಿರುವ ಯೋಜನೆಗಳೊಂದಿಗೆ ಹೆಚ್ಚಿನ 9 ಹೊಸ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಉದ್ದೇಶಿಸಲಾಗಿದೆ. ಅವುಗಳಲ್ಲಿ ಕಿರುಸಾಲ, ನೇರಸಾಲ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಹಾಗೂ ಮಹಿಳಾ ಪ್ರತಿನಿಧಿಗಳು ಉತ್ಪಾದಿಸುವ ವಸ್ತುಗಳನ್ನು ಮಾರುಕಟ್ಟೆಗೆ ಪರಿಚಯಿಸಲು ಮಾರುಕಟ್ಟೆ ಸೌಲಭ್ಯ ಕಲ್ಪಿಸಲು ಅನುಕೂಲವಾಗುವಂತೆ ಯೋಜನೆಯನ್ನು ರೂಪಿಸಿ, ಅದರ ಅನುಷ್ಠಾನಕ್ಕಾಗಿ ಇಲಾಖಾ ಸಚಿವರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಅವರು ತಿಳಿಸಿದರು.ಲಿಂಗತ್ವ ಅಲ್ಪಸಂಖ್ಯಾತರು ಗೃಹಲಕ್ಷ್ಮೀ ಯೋಜನೆ ಹಾಗೂ ವಸತಿ ಯೋಜನೆಗಳ ಸೌಲಭ್ಯ ಹೊಂದಲು ನಿಯಮಾನುಸಾರ ಆನ್‍ಲೈನ್ ಮೂಲಕ ನೋಂದಾವಣೆ ಮಾಡಿಸಿಕೊಳ್ಳಬೇಕು. ಸಾಮಾಜಿಕವಾಗಿ ಅಡಚಣೆ ಆಗಬಹುದಾದ ಆತಂಕದಿಂದ ಅವರು ಈ ನೋಂದಣಿಯಿಂದ ದೂರ ಸರಿಯುತ್ತಿದ್ದಾರೆ. ಇದು ಸರಿಯಲ್ಲ. ಅರ್ಹರು ಕೂಡಲೇ ನೋಂದಾವಣೆ ಮಾಡಿಕೊಂಡು ಸರ್ಕಾರದ ಸೌಲಭ್ಯ ಹೊಂದುವಂತೆ ಹಾಗೂ ಇಲಾಖೆಯ ಅಧಿಕಾರಿಗಳು ಅರ್ಹರನ್ನು ಗುರುತಿಸಿ, ಪ್ರೇರೇಪಿಸಿ, ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕಿ ಅಕ್ಕಮಹಾದೇವಿ.ಕೆ.ಎಚ್, ಜಿಲ್ಲಾ ಮಾರ್ಗದರ್ಶಿ ಬ್ಯಾಂಕಿನ ವ್ಯವಸ್ಥಾಪಕ ಚಂದ್ರಶೇಖರ್, ಸಿ.ಡಿ.ಪಿ.ಒ. ಶಶಿರೇಖಾ, ಗಂಗೂಬಾಯಿ, ಜಿಲ್ಲಾ ನಿರೂಪಣಾಧಿಕಾರಿ ಎಚ್.ಸಂತೋಷ್, ವಿ.ಸುನಿಲ್ ಕುಮಾರ್ ಮತ್ತಿತರರಿದ್ದರು.ಆಸಿಡ್ ದಾಳಿಗೆ ಒಳಗಾದ ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಗೆಳತಿ ಯೋಜನೆಯಡಿ 05 ಜನ ಸಂತ್ರಸ್ತ ಮಹಿಳೆಯರಿಗೆ 5 ಲಕ್ಷ ರು.ಗಳ ವರೆಗೆ (ಶೇ.50ರಷ್ಟು ಸಾಲ ಮತ್ತು ಶೇ. 50 ರಷ್ಟು ಸಹಾಯಧನ) ಬಡ್ಡಿರಹಿತ ಆರ್ಥಿಕ ಸೌಲಭ್ಯವನ್ನು ನೀಡಲಾಗಿದೆ. ಅಲ್ಲದೇ ಪ್ರಧಾನಮಂತ್ರಿ ಪರಿಹಾರನಿಧಿ ಯೋಜನೆಯಡಿ ತಲಾ 1 ಲಕ್ಷ ರು.ಗಳ ಸಹಾಯಧನವನ್ನು ನೀಡಲಾಗಿದೆ. – ಕೃಷ್ಣಪ್ಪ, ಉಪನಿರ್ದೇಶಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಮೊಗ್ಗ