ಯೋಜನೆಗಳ ಅನುಷ್ಠಾನಕ್ಕೆ ಗಮನ ಹರಿಸಿ

| Published : Jan 21 2024, 01:32 AM IST

ಸಾರಾಂಶ

ಬಸವನಬಾಗೇವಾಡಿ ಪಟ್ಟಣದ ತಹಸೀಲ್ದಾರ್‌ ಕಚೇರಿಯ ಸಭಾಂಗಣದಲ್ಲಿ ಶನಿವಾರ ಜರುಗಿದ ತಾಲೂಕಿನ ಸಾಮಾಜಿಕ, ಆರ್ಥಿಕ ಮತ್ತು ಭೌತಿಕ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆಯನ್ನು ತಾಲೂಕು ಉಸ್ತುವಾರಿ ಅಧಿಕಾರಿ ಬಲರಾಮ ಚೌವ್ಹಾಣ ವಹಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ

ತಾಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳು ಸರ್ಕಾರ ಜಾರಿಗೆ ತರುವ ಎಲ್ಲ ಯೋಜನೆಗಳನ್ನು ಪ್ರಾಮಾಣಿಕವಾಗಿ ಅನುಷ್ಠಾನಕ್ಕೆ ತರುವ ಮೂಲಕ ಜನರಿಗೆ ತಲುಪಿಸುವ ಕಡೆಗೆ ಗಮನ ಹರಿಸಬೇಕು ಎಂದು ರಾಷ್ಟ್ರೀಯ ಹೆದ್ದಾರಿ-೧ ಎಸ್‌ಎಲ್‌ಎಒ, ತಾಲೂಕು ಉಸ್ತುವಾರಿ ಅಧಿಕಾರಿ ಬಲರಾಮ ಚೌವ್ಹಾಣ ಹೇಳಿದರು.

ಟ್ಟಣದ ತಹಸೀಲ್ದಾರ್‌ ಕಚೇರಿಯ ಸಭಾಂಗಣದಲ್ಲಿ ಶನಿವಾರ ಜರುಗಿದ ತಾಲೂಕಿನ ಸಾಮಾಜಿಕ, ಆರ್ಥಿಕ ಮತ್ತು ಭೌತಿಕ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಯಾ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರದ ಅನುದಾನ ಸರಿಯಾಗಿ ಬಳಕೆ ಮಾಡಬೇಕು. ಯಾವುದೇ ಸಮಸ್ಯೆ ಬಾರದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಯಾವುದಾದರೂ ಸಮಸ್ಯೆಗಳು ಬಂದರೆ ನಮ್ಮ ಗಮನಕ್ಕೆ ತಂದರೆ ತಾವು ಸರ್ಕಾರದ ಗಮನಕ್ಕೆ ತಂದು ಬಗೆಹರಿಸುವುದಾಗಿ ತಿಳಿಸಿದರು.

ಮುಂಬರುವ ಬೇಸಿಗೆ ಕಾಲದಲ್ಲಿ ಜನರಿಗೆ, ಜಾನುವಾರುಗಳಿಗೆ ಕುಡಿಯುವ ನೀರು ತೊಂದರೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳು ಗಮನಹರಿಸಬೇಕು. ರೇಷ್ಮೆ ಇಲಾಖೆಯಿಂದ ರೈತ ಬಾಂಧವರಿಗೆ ಸಿಗಬೇಕಾದ ಸೌಲಭ್ಯಗಳು ಸರಿಯಾಗಿ ತಲುಪಿಸಬೇಕು. ಅರಣ್ಯ ಇಲಾಖೆಯಿಂದ ಕೆರೆ, ಸ್ಮಶಾನ, ಗುಡ್ಡ-ಗಾಡು ಪ್ರದೇಶ ಸೇರಿದಂತೆ ಅಗತ್ಯವಿರುವ ಕಡೆಗಳಲ್ಲಿ ಸಸಿಗಳನ್ನು ನೆಟ್ಟು ಹೆಚ್ಚು ಮರಗಳನ್ನು ಬೆಳೆಸುವಂತೆ ಮಾಡಬೇಕು. ಮಳೆಗಾಲ ಆರಂಭವಾಗುವ ಮುನ್ನವೇ ಹೆಸ್ಕಾಂ ಅಧಿಕಾರಿಗಳು ವಿದ್ಯುತ್ ಕಂಬ ದುರಸ್ತಿ, ವಿದ್ಯುತ್ ಪರಿವರ್ತಕ ದುರಸ್ತಿ ಮಾಡಬೇಕು. ಮುಂದೆ ವಿದ್ಯುತ್ ಅಪಘಡಗಳಾಗದಂತೆ ಮುನ್ನಚ್ಚರಿಕೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ಅವರಿಗೆ ಪಟ್ಟಣದ ವಿರಕ್ತಮಠದ ಮಾರ್ಗದಲ್ಲಿರುವ ಚರಂಡಿ ಸ್ವಚ್ಛತೆಯಿಲ್ಲದೇ ಇರುವುದರಿಂದಾಗಿ ಅಲ್ಲಿ ಸಂಚಾರ ಮಾಡುವ ಜನರಿಗೆ ಚರಂಡಿ ವಾಸನೆ ಬರುತ್ತದೆ. ಪಟ್ಟಣದ ವ್ಯಾಪ್ತಿಯಲ್ಲಿರುವ ಎಲ್ಲ ಚರಂಡಿಗಳನ್ನು ಸ್ಪಚ್ಛವಾಗಿಟ್ಟುಕೊಳ್ಳುವ ಕಡೆಗೆ ಗಮನ ಹರಿಸಬೇಕು ಎಂದು ತಿಳಿಸಿದರು.ಬಸ್ ಡಿಪೋ ವ್ಯವಸ್ಥಾಪಕ ಪಿ.ಕೆ.ಜಾಧವ ಅವರು ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿಗೆ ತಂದ ನಂತರ ಡಿಸೆಂಬರ್ ತಿಂಗಳ ಅಂತ್ಯದವರೆಗೆ ನಮ್ಮ ಡಿಪೋ ವ್ಯಾಪ್ತಿಯಿಂದ ಹೊರಡುವ ಬಸ್‌ಗಳಲ್ಲಿ ₹೩೨.೨೦ ಲಕ್ಷ ಮಹಿಳಾ ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ. ಇದರಿಂದ ಡಿಪೋಗೆ ₹೧೦.೩೫ ಕೋಟಿ ಆದಾಯ ಬಂದಿದೆ ಎಂದು ಮಾಹಿತಿ ನೀಡಿದರು.

ಆಗ ತಾಲೂಕು ಉಸ್ತುವಾರಿ ಅಧಿಕಾರಿಗಳು ಶಕ್ತಿ ಯೋಜನೆ ಜಾರಿಗೆಯಾದ ನಂತರ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆಯ ಹೆಚ್ಚಳವಾಗಿರುವುದರಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಡಿಪೋ ವ್ಯವಸ್ಥಾಪಕರು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಆ ಮಾರ್ಗದಲ್ಲಿ ಹೆಚ್ಚು ವಾಹನಗಳು ಸಂಚಾರ ಮಾಡುವ ಕ್ರಮ ವಹಿಸುವಂತೆ ಸೂಚಿಸಿದರು.

ಸಭೆಯಲ್ಲಿ ಆರೋಗ್ಯ, ಶಿಶು ಅಭಿವೃದ್ಧಿ ಇಲಾಖೆ, ಲೋಕೋಪಯೋಗಿ ಇಲಾಖೆಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಇಲಾಖೆಯಲ್ಲಿ ನಡೆದಿರುವ ಕಾರ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಸಭೆಯಲ್ಲಿ ತಹಸೀಲ್ದಾರ್‌ ವೈ.ಎಸ್.ಸೋಮನಕಟ್ಟಿ, ತಾಪಂ ಇಒ ಡಾ.ಯುವರಾಜ ಹನಗಂಡಿ, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು. ನಂತರ ಪಟ್ಟಣದ ಲಕ್ಷ್ಮೀ ನಗರದ ಅಂಗನವಾಡಿ ಕೇಂದ್ರಕ್ಕೆ, ಡಾ.ಅಂಬೇಡ್ಕರ್ ವೃತ್ತದ ಸಮೀಪವಿರುವ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಕ್ಕೆ ತಾಲೂಕು ಉಸ್ತುವಾರಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.