27ರಂದು ಕರ್ನಾಟಕ ಜಾನಪದ ಪರಿಷತ್‌ನಿಂದ ಜಾನಪದ ಹಬ್ಬ

| Published : Oct 24 2024, 12:42 AM IST

ಸಾರಾಂಶ

ಕೃಷ್ಣ ಮಠದ ರಾಜಾಂಗಣದಲ್ಲಿ ಅ. 27ರಂದು ಜಾನಪದ ಹಬ್ಬ- 2024 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಾನಪದ ಪರಿಷತ್‌ ಜಿಲ್ಲಾಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಮಾಹಿತಿ ನೀಡಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಕರ್ನಾಟಕ ಜಾನಪದ ಪರಿಷತ್ ಉಡುಪಿ ಜಿಲ್ಲೆ, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಹಾಗೂ ಜಾನಪದ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನ ಉಡುಪಿ ಸಹಯೋಗದಲ್ಲಿ ಕೃಷ್ಣ ಮಠದ ರಾಜಾಂಗಣದಲ್ಲಿ ಅ.27ರಂದು ಜಾನಪದ ಹಬ್ಬ - 2024 ಹಮ್ಮಿಕೊಳ್ಳಲಾಗಿದೆ.

ಈ ಬಗ್ಗೆ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಅಂದು ಬೆಳಗ್ಗೆ 9:30ರಿಂದ ಸಂಜೆ 4:30ರ ವರೆಗೆ ಕುಣಿತ ಭಜನೆ, ಹೋಳಿ ಕುಣಿತ, ಗೋಂದೋಳು ಕುಣಿತ, ಜಾನಪದ ವಾದ್ಯಗೋಷ್ಠಿ ಹಾಗೂ ಚೇತೋಹಾರಿ ಪ್ರದರ್ಶನಕ್ಕೆ ಹೆಸರಾದ ಕಲಾಮಯ ಉಡುಪಿ ತಂಡದವರಿಂದ ವೈವಿಧ್ಯಮಯ ಜಾನಪದ ನೃತ್ಯ ಹಾಗೂ ಸಂಗೀತ ಪ್ರದರ್ಶನ ನಡೆಯಲಿದ್ದು, ಕೇರಳ ವಯನಾಡಿನ ಅಪರೂಪದ ಜಾನಪದ ಕಲೆ ಗೋತ್ರಂ ನೃತ್ಯ ವಿಶೇಷ ಆಕರ್ಷಣೆಯಾಗಿದೆ ಎಂದರು.

ಜಿಲ್ಲಾ ಕಾರ್ಯದರ್ಶಿ ರವಿರಾಜ ನಾಯಕ್ ಮಾತನಾಡಿ, ಪರ್ಯಾಯ ಪುತ್ರಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಜಾನಪದ ಹಬ್ಬವನ್ನು ಉದ್ಘಾಟಿಸಲಿದ್ದು, ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಹಾಗೂ ಕಾರ್ಯ ನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಉದ್ಯಮಿ ವರುಣ್ ರಾಮದಾಸ ನಾಯಕ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಹಾಗೂ ಯಕ್ಷಗಾನ ಕಲಾರಂಗದ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಂಜೆ 3:45ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಪರ್ಯಾಯ ಶ್ರೀಗಳು ಆಶೀರ್ವಚನ ನೀಡಲಿದ್ದು, ಅಂಬಲಪಾಡಿ ದೇವಸ್ಥಾನದ ಧರ್ಮದರ್ಶಿ ಡಾ. ನಿ. ಬೀ. ವಿಜಯ ಬಲ್ಲಾಳರು ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಚಿವ ವಿನಯಕುಮಾರ್ ಸೊರಕೆ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಜಾನಪದ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸುನೀಲ್ ಕುಮಾರ್ ಶೆಟ್ಟಿ, ಜಾನಪದ ಪರಿಷತ್ ಕಾರ್ಯಧ್ಯಕ್ಷ ಬಿ. ಅರುಣ್ ಕುಮಾರ್ ಹೆಗ್ಡೆ, ಸಂಘಟನಾ ಕಾರ್ಯದರ್ಶಿ ಗೋಪಾಲ್ ಸಿ. ಬಂಗೇರ ಹಾಗೂ ಖಜಾಂಚಿ ಪ್ರಶಾಂತ್ ಭಂಡಾರಿ ಉಪಸ್ಥಿತರಿದ್ದರು.